ಪ್ರಗತಿವಾಹಿನಿ ಸುದ್ದಿ; ಚಿಕ್ಕಮಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ನಿರಂತರ ಮಳೆಯಿಂದ ಅವಾಂತರಗಳು ಸೃಷ್ಟಿಯಾಗಿದ್ದು, ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಭೂಕುಸಿತದಿಂದಾಗಿ ಜನರು ಆತಂಕಕ್ಕೀಡಾಗಿದ್ದಾರೆ. ಹಲವೆಡೆ ರಸ್ತೆ ಸಂಪರ್ಕ ಕಡಿತಗೊಂಡಿದ್ದು ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ.
ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಗುಡ್ಡ ಕುಸಿತದಿಂದಾಗಿ ಹಲವು ಮನೆಗಳು, ಕೃಷಿ ಭೂಮಿ, ಅಡಿಕೆ ತೋಟಗಳು ನಾಶವಾಗಿವೆ. ಚಿಕ್ಕಮಗಳೂರಿನ ಕೊಪ್ಪ ತಾಲೂಕಿನ ಗುಡ್ಡೆತೋಟ ಗ್ರಾಮದಲ್ಲಿ ಗುಡ್ಡ ಕುಸಿತವುಂಟಾಗಿದ್ದು, ಹೊರನಾಡು-ಶೃಂಗೇರಿ ರಸ್ತೆ ಸಂಪರ್ಕ ಕಡಿತಗೊಂಡಿದೆ.
ರಸ್ತೆ ಮೇಲೆಯೇ ಗುಡ್ಡ ಕುಸಿದಿದ್ದು, ಈ ಮಾರ್ಗದ ಸಂಚಾರ ಬಂದ್ ಆಗಿದೆ. ಧಾರಾಕಾರ ಮಳೆಯಿಂದಾಗಿ ಮಣ್ಣು ತೆರವು ಕಾರ್ಯಾಚರಣೆಗೆ ಅಡ್ಡಿಯುಂಟಾಗಿದೆ.
ಕೊಪ್ಪ ಬಳಿ ನಾಲ್ಕೈದು ಮನೆಗಳ ಮೇಲೆ ಗುಡ್ಡ ಕುಸಿಯುವ ಭೀತಿ ಎದುರಾಗಿದ್ದು, ಜನರು ಆತಂಕದಲ್ಲಿ ಕಾಲ ಕಳೆಯುತ್ತಿದ್ದಾರೆ.
ಇನ್ನೊಂದೆಡೆ ಶಿವಮೊಗ್ಗ ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು, ಆಗುಂಬೆ ಘಟ್ಟದಲ್ಲಿ ಭೂಕುಸಿತವುಂಟಾಗಿದೆ. ಆಗುಂಬೆ ಘಾಟಿಯ 10ನೇ ತಿರುವಿನಲ್ಲಿ ಗುಡ್ಡ ಕುಸಿತವುಂಟಾಗಿದ್ದು, ರಸ್ತೆ ಸಂಪರ್ಕ ಕಡಿತಗೊಂಡಿದೆ.
ಮೂರು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ; ಭೂಕುಸಿತದ ಜತೆಗೆ ಮತ್ತೆ ಕಂಪಿಸಿದ ಭೂಮಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ