
ಪ್ರಗತಿವಾಹಿನಿ ಸುದ್ದಿ: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸುತ್ತಿರುವ ಕೋರ್ಟ್ ನಟರಾದ ಚಿಕ್ಕಣ್ಣ ಹಾಗೂ ಯಶಸ್ ಸೂರ್ಯ ಅವರಿಗೆ ಸಮನ್ಸ್ ಜಾರಿ ಮಾಡಿದೆ.
ರೇಣುಕಾಸ್ವಾಮಿ ಹತ್ಯೆ ಪ್ರಕರಣದ ವಿಚಾರಣೆ ನಡೆಸುತ್ತಿರುವ ಬೆಂಗಳೂರಿನ 59ನೇ ಸಿಎಸ್‌ಎಚ್ ನ್ಯಾಯಾಲಯವು ನಟರಾದ ಚಿಕ್ಕಣ್ಣ ಹಾಗೂ ಯಶಸ್ ಸೂರ್ಯ ಅವರಿಗೆ ಸಮನ್ಸ್ ಜಾರಿ ಮಾಡಿದ್ದು, ಅಕ್ಟೋಬರ್ 15ರಂದು ನ್ಯಾಯಾಲಯಕ್ಕೆ ಖುದ್ದು ಹಾಜರಾಗಿ ಹೇಳಿಕೆ ದಾಖಲಿಸುವಂತೆ ಸೂಚಿಸಿದೆ.
ಜೂನ್ 8, 2024ರಂದು ರೇಣುಕಾಸ್ವಾಮಿ ಹತ್ಯೆ ನಡೆದ ದಿನದಂದು ನಟ ದರ್ಶನ್ ಅವರು ಆರ್‌ಆರ್ ನಗರದ ‘ಸ್ಟೋನಿಬ್ರೂಕ್’ ರೆಸ್ಟೋರೆಂಟ್‌ನಲ್ಲಿ ಆಯೋಜಿಸಲಾಗಿದ್ದ ಪಾರ್ಟಿಯಲ್ಲಿ ಭಾಗವಹಿಸಿದ್ದರು. ಈ ಪಾರ್ಟಿಯಲ್ಲಿ ನಟ ಚಿಕ್ಕಣ್ಣ ಕೂಡ ಉಪಸ್ಥಿತರಿದ್ದರು. ತನಿಖಾಧಿಕಾರಿಗಳು ಸಲ್ಲಿಸಿರುವ ಚಾರ್ಜ್‌ಶೀಟ್‌ನಲ್ಲಿ ನಟ ಚಿಕ್ಕಣ್ಣ ಅವರನ್ನು ದರ್ಶನ್ ವಿರುದ್ಧದ ಪ್ರಮುಖ ಸಾಕ್ಷಿಯನ್ನಾಗಿ ಮಾಡಲಾಗಿದೆ.
ಹತ್ಯೆ ನಡೆಯುವ ಮೊದಲು ದರ್ಶನ್ ಎಲ್ಲಿದ್ದರು? ಅವರ ಸ್ಥಿತಿ ಹೇಗಿತ್ತು ಎಂಬುದನ್ನು ದೃಢೀಕರಿಸಲು ಚಿಕ್ಕಣ್ಣ ಅವರ ಸಾಕ್ಷ್ಯ ಹಾಗೂ ವಿಚಾರಣೆ ಅತ್ಯಂತ ನಿರ್ಣಾಯಕವಾಗಿದೆ. ಈ ಹಿನ್ನೆಲೆಯಲ್ಲಿ ಕೋರ್ಟ್ ಚಿಕ್ಕಣ್ಣ ಅವರಿಗೆ ಸಮನ್ಸ್ ನೀಡಿದ್ದು, ಖುದ್ದು ಹಾಜರಿಗೆ ಸೂಚಿಸಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ




