
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ –: ನಿರಂತರ ನೀರು ಯೋಜನೆ ನಗರದ ಜನತೆಗೆ ಕುಡಿಯುವ ನೀರು ಒದಗಿಸುವ ಮಹತ್ವಾಕಾಂಕ್ಷಿ ಯೋಜನೆಯಾಗಿದೆ. ಈ ಯೋಜನೆಯ ಅನುಷ್ಠಾನ ಕುರಿತು ವಿಶೇಷ ಕಾಳಜಿ ವಹಿಸಬೇಕು ಎಂದು ನಗರಾಭಿವೃದ್ಧಿ ಇಲಾಖೆಯ ಸಚಿವರಾದ ಬಿ.ಎ.ಬಸವರಾಜ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ಶುಕ್ರವಾರ (ಜ.8) ನಡೆದ ಪಾಲಿಕೆ, ಸ್ಮಾರ್ಟ್ ಸಿಟಿ ಹಾಗೂ ನಗರಾಭಿವೃದ್ಧಿ ಪ್ರಾಧಿಕಾರದ ಅಭಿವೃದ್ಧಿ ಕಾರ್ಯಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ನೀರಂತರ ನೀರು ಯೋಜನೆ ಯೋಜನೆಗೆ ಮುಖ್ಯಮಂತ್ರಿಗಳಿಂದ ಚಾಲನೆ ನೀಡಲು ಕ್ರಮ ಕೈಗೊಳ್ಳಲಾಗುವುದು.
ಯೋಜನೆಯ ತುರ್ತು ಅನುಷ್ಠಾನಕ್ಕೆ ಅಗತ್ಯವಿರುವ ಎಲ್ಲ ನೆರವು ಸರ್ಕಾರ ನೀಡಲಿದೆ ಎಂದು ಸಚಿವ ಬಸವರಾಜ್ ಭರವಸೆಯನ್ನು ನೀಡಿದರು.
ಆರ್.ಎಫ್.ಐ.ಡಿ. ಟ್ಯಾಗ್ ವೈಫಲ್ಯ -ವರದಿ ಸಲ್ಲಿಸಲು ಸೂಚನೆ:
ಬೆಳಗಾವಿ ನಗರದಲ್ಲಿ ಸುಮಾರು ಒಂದು ಲಕ್ಷ ಆರ್.ಎಫ್.ಐ.ಡಿ. ಟ್ಯಾಗ್ ಅಳವಡಿಸಲಾಗಿದೆ. ಆದರೆ ಅದರಲ್ಲಿ ಕೇವಲ ಮೂರ್ನಾಲ್ಕು ಸಾವಿರ ಕಾರ್ಡುಗಳು ಮಾತ್ರ ರೀಡ್ ಮಾಡಲಾಗುತ್ತಿದೆ ಎಂದು ಶಾಸಕ ಅಭಯ್ ಪಾಟೀಲ ಅಸಮಾಧಾನ ವ್ಯಕ್ತಪಡಿಸಿದರು.
46 ಕೋಟಿ ರೂಪಾಯಿ ವೆಚ್ಚದ ಆರ್.ಎಫ್.ಐ.ಡಿ. ವ್ಯವಸ್ಥೆ ಸಮರ್ಪಕವಾಗಿ ಕಾರ್ಯನಿರ್ವಹಿಸದ ಸಂಬಂಧಿಸಿದ ಅಧಿಕಾರಿಗಳ ಮೇಲೆ ಶಿಸ್ತುಕ್ರಮ ತೆಗೆದುಕೊಳ್ಳಬೇಕು ಎಂದು ಸಚಿವರಿಗೆ ಒತ್ತಾಯಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಕಸ ಸಂಗ್ರಹಣೆಗೆ ಸಂಬಂಧಿಸಿದಂತೆ ನಗರದಲ್ಲಿ ಅಳವಡಿಸಲಾಗಿರುವ ಆರ್.ಎಫ್.ಐ.ಡಿ. ಟ್ಯಾಗ್ ಗಳು ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂಬುದರ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿ, ಸಂಬಂಧಿಸಿದ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಈ ಬಗ್ಗೆ ಕೂಲಂಕಷವಾಗಿ ಪರಿಶೀಲಿಸಿ ವರದಿ ನೀಡಬೇಕು ಎಂದು ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದರು.
ನಗರ ಸ್ವಚ್ಛವಾಗಿಡಬೇಕಾದರೆ ಕಸ ವಿಲೇವಾರಿ ವ್ಯವಸ್ಥೆ ಸಮರ್ಪಕವಾಗಿ ಇರಬೇಕು. ನಿಯಮಾವಳಿ ಉಲ್ಲಂಘಿಸಿ ಕಸ ಚೆಲ್ಲುವವರ ವಿರುದ್ಧ ದಂಡದ ಜತೆಗೆ ಪ್ರಕರಣ ದಾಖಲಿಸಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಆಸ್ತಿ ತೆರಿಗೆ ಸಂಗ್ರಹಕ್ಕೆ ಕಟ್ಟುನಿಟ್ಟಿನ ಸೂಚನೆ:
ನಿಗದಿಪಡಿಸಲಾಗಿರುವ ಆಸ್ತಿ ತೆರಿಗೆಯನ್ನು ಮಾರ್ಚ್ ಅಂತ್ಯದೊಳಗೆ ಶೇ.100 ರಷ್ಟು ಕಡ್ಡಾಯವಾಗಿ ಸಂಗ್ರಹಿಸಬೇಕು ಎಂದು ಸಚಿವ ಬಸವರಾಜ್ ಸೂಚನೆ ನೀಡಿದರು.
ಆಸ್ತಿ ತೆರಿಗೆಯಿಂದ ಸಾರ್ವಜನಿಕರಿಗೆ ಹೆಚ್ಚಿನ ಸೌಕರ್ಯಗಳನ್ನು ಒದಗಿಸುವುದು ಸಾಧ್ಯ. ಆದ್ದರಿಂದ ಆಸ್ತಿ ತೆರಿಗೆ ಸಂಗ್ರಹಣೆಯಲ್ಲಿ ನಿರ್ಲಕ್ಷ್ಯ ತೋರಬಾರದು ಎಂದರು.
ಬಾಕಿ ತೆರಿಗೆಯನ್ನು ಮಾಸಾಂತ್ಯದಲ್ಲಿ ಸಂಗ್ರಹಿಸಲು ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.
ಅನಧಿಕೃತ ಜಾಹೀರಾತು ಫಲಕಗಳನ್ನು ತಕ್ಷಣವೇ ತೆರವುಗೊಳಿಸಬೇಕು ಮತ್ತು ಬಾಕಿ ಉಳಿಸಿಕೊಂಡಿರುವ ಗುತ್ತಿಗೆದಾರರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಅಭಯ ಪಾಟೀಲ ಒತ್ತಾಯಿಸಿದರು.
ಹಿಂದಿನ ಮೂರು ವರ್ಷಗಳ ಅವಧಿಯಲ್ಲಿ ಬಾಕಿ ಉಳಿದಿರುವ ಜಾಹೀರಾತು ಮೊತ್ತ ಪಾವತಿಸದೇ ಇರುವ ಸಂಸ್ಥೆಯ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದು ಪಾಲಿಕೆಯ ಆಡಳಿತಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು.
ಅನಧಿಕೃತ ಜಾಹೀರಾತು ಫಲಕಗಳನ್ನು ತಕ್ಷಣವೇ ತೆರವುಗೊಳಿಸುವಂತೆ ತಿಳಿಸಿದರು.
ಸ್ವಚ್ಛತೆ ನಿರ್ಲಕ್ಷಿಸಿದರೆ ಕ್ರಮ- ಸಚಿವರ ಎಚ್ಚರಿಕೆ:
ಕುಡಿಯುವ ನೀರು ಪೂರೈಕೆ, ಸ್ವಚ್ಛತೆ, ಬೀದಿ ದೀಪ ಮತ್ತಿತರ ಸೌಕರ್ಯಗಳನ್ನು ಸಮರ್ಪಕವಾಗಿ ಒದಗಿಸಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳು ಕೆಲಸ ಮಾಡಬೇಕು.
ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಅಧಿಕಾರಿಗಳು, ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಶಾಸಕ ಪಾಟೀಲ ಒತ್ತಾಯ:
ನಿರಂತರ ನೀರು ಯೋಜನೆ ಅನುಷ್ಠಾನಕ್ಕೆ ಸಂಬಂಧಿಸಿದಂತೆ ವಿಳಂಬಕ್ಕೆ ಕಾರಣವಾದ ಸಂಸ್ಥೆಗೆ ದಂಡ ವಿಧಿಸಲು ಕ್ರಮ ಕೈಗೊಳ್ಳಬೇಕು ಎಂದು ಬೆಳಗಾವಿ ದಕ್ಷಿಣ ಮತಕ್ಷೇತ್ರದ ಶಾಸಕ ಅಭಯ್ ಪಾಟೀಲ ಒತ್ತಾಯಿಸಿದರು.
ಕುಡಿಯುವ ನೀರು, ಒಳಚರಂಡಿ, ಅಮೃತ ಸೇರಿದಂತೆ ಬಹುತೇಕ ಯೋಜನೆ ನೆನೆಗುದಿಗೆ ಬಿದ್ದಿರುವುದರಿಂದ ಜನರು ಜನಪ್ರತಿನಿಧಿಗಳ ಬಗ್ಗೆ ಅಸಮಾಧಾನಗೊಂಡಿದ್ದಾರೆ. ಆದ್ದರಿಂದ ಕಾಲಮಿತಿಯಲ್ಲಿ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.
ಕಸ ವಿಲೇವಾರಿ-ನಾಗರಿಕ ಸಮಿತಿ ರಚಿಸಲು ಸಲಹೆ:
ಕಸ ವಿಲೇವಾರಿ ಮೇಲುಸ್ತುವಾರಿಗೆ ವಾರ್ಡವಾರು ನಾಗರಿಕ ಸಮಿತಿ ರಚಿಸಬೇಕು. ಸಮಿತಿ ಸಹಿ ಮಾಡಿ ನೀಡಿದ ಬಳಿಕವೇ ಗುತ್ತಿಗೆದಾರರಿಗೆ ಹಣ ಪಾವತಿಸಬೇಕು ಎಂದು ಶಾಸಕ ಅಭಯ್ ಪಾಟೀಲ ಸಲಹೆ ನೀಡಿದರು.
ಮಹಾನಗರ ಪಾಲಿಕೆಯ ಅನುಮತಿ ಇಲ್ಲದೇ ರಸ್ತೆ ಅಗೆಯುವ ನೀರು ಸರಬರಾಜು ಮಂಡಳಿ, ಹೆಸ್ಕಾಂ ಮತ್ತಿತರ ಸಂಸ್ಥೆಗಳ ವಿರುದ್ಧ ದಂಡ ವಿಧಿಸಬೇಕು ಎಂದು ಆಗ್ರಹಿಸಿದರು.
ಕಂಟೋನ್ಮೆಂಟ್ ಪ್ರದೇಶದಲ್ಲಿ ಕಸ ವಿಲೇವಾರಿ ಕೆಲಸ ಸರಿಯಾಗಿ ನಡೆಯುತ್ತಿಲ್ಲ ಎಂದು ಶಾಸಕ ಅನಿಲ್ ಬೆನಕೆ ಅವರು ಸಚಿವರ ಗಮನಕ್ಕೆ ತಂದರು.
ಬೆಳಗಾವಿ ನಗರದಲ್ಲಿ ಯುಜಿಡಿ ವ್ಯವಸ್ಥೆ ಸುಧಾರಣೆ ಕಾರ್ಯ ಕೈಗೆತ್ತಿಕೊಳ್ಳಲಾಗಿದೆ. ಸಮಗ್ರ ಅಭಿವೃದ್ಧಿಗೆ 500 ಕೋಟಿ ರೂಪಾಯಿ ವೆಚ್ಚದ ಪ್ರಸ್ತಾವ ಸಿದ್ಧಪಡಿಸಲಾಗಿದೆ ಎಂದು ಅಧಿಕಾರಿಗಳು ವಿವರಿಸಿದರು.
ಕಸ ಸಂಗ್ರಹಣೆ, ಪ್ರತ್ಯೇಕ ಮತ್ತು ವಿಲೇವಾರಿಗೆ ಪ್ರತಿ ವಾರ್ಡಿಗೆ ಪ್ರತ್ಯೇಕ ವಾಹನ ಹೊಂದುವ ಯೋಜನೆ ಹಾಕಿಕೊಳ್ಳಲಾಗಿದೆ ಎಂದು ಪಾಲಿಕೆಯ ಆಯುಕ್ತರಾದ ಜಗದೀಶ್ ತಿಳಿಸಿದರು.
45 ಕೋಟಿ ಆಸ್ತಿ ತೆರಿಗೆ ಗುರಿ:
ಈ ವರ್ಷ 45 ಕೋಟಿ ಗುರಿ ನಿಗದಿಪಡಿಸಲಾಗಿತ್ತು. ಇದುವರೆಗೆ 30 ಕೋಟಿ ರೂಪಾಯಿ ಸಂಗ್ರಹಿಸಲಾಗಿದೆ. ಕಳೆದ ವರ್ಷಕ್ಕಿಂತ ಐದು ಕೋಟಿ ಹೆಚ್ಚುವರಿ ಗುರಿ ನಿಗದಿಪಡಿಸಲಾಗಿದೆ ಎಂದು ಆಯುಕ್ತರಾದ ಜಗದೀಶ್ ತಿಳಿಸಿದರು.
ಕೆಯುಐಡಿಎಫ್ ಸಿ ಅಧ್ಯಕ್ಷರಾದ ಶಂಕರ್ ಪಾಟೀಲ ಮುನೇನಕೊಪ್ಪ, ಕೆಯುಡಬ್ಲ್ಯುಸಿ ನಿರ್ದೇಶಕರಾದ ದೀಪಾ ಕುಡಚಿ, ಬುಡಾ ಅಧ್ಯಕ್ಷ ಘೂಳಪ್ಪ ಹೊಸಮನಿ, ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಮತ್ತಿತರರು ಸಭೆಯಲ್ಲಿ ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ