*ಶಾಲಾ ಮಕ್ಕಳಿಗೆ ಪೌಷ್ಠಿಕ ಆಹಾರ ನೀಡುವ ಕಾರ್ಯಕ್ಕೆ ಮುಂದಾದ ಅಜೀಂ ಪ್ರೇಮ್ ಜಿ ಫೌಂಡೇಷನ್ ಗೆ ಸಿಎಂ ಮೆಚ್ಚುಗೆ*

ಪ್ರಗತಿವಾಹಿನಿ ಸುದ್ದಿ: ಮಾನಸಿಕ ಆರೋಗ್ಯ ಮತ್ತು ಉತ್ತಮ ಶಿಕ್ಷಣಕ್ಕೆ ಗುಣಮಟ್ಟದ ಆಹಾರ ಮುಖ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.
ಅಜೀಂಪ್ರೇಮ್ ಜಿ ಫೌಂಡೇಷನ್ ಸಹಭಾಗಿತ್ವದಲ್ಲಿ ಸರ್ಕಾರಿ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲಾ ಮಕ್ಕಳಿಗೆ ವಾರದಲ್ಲಿ ಉಚಿತ 6 ದಿನ ಪೂರಕ ಪೌಷ್ಠಿಕ ಆಹಾರ ನೀಡುವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಉಪಹಾರ ಇಲ್ಲದೆ ಶಾಲೆಗೆ ಬಂದು, ಊಟ ಇಲ್ಲದೆ ಮಧ್ಯಾಹ್ನದವರೆಗೂ ಶಾಲೆಯಲ್ಲಿರುವ ಮಕ್ಕಳನ್ನು ನಾನು ನೋಡಿದ್ದೇನೆ. ಹೀಗಾಗಿ ವಾರದಲ್ಲಿ ಎರಡು ದಿನ ಊಟ ಮತ್ತು ಮೊಟ್ಟೆ ಕೊಡಲು ಮುಂದಾದೆವು. ಈಗ ಅಜೀಂ ಪ್ರೇಮ್ ಜಿ ಫೌಂಡೇಷನ್ ಅವರು ವಾರದಲ್ಲಿ ನಾಲ್ಕು ದಿನವೂ ಮಕ್ಕಳಿಗೆ ಮೊಟ್ಟೆ ನೀಡಲು ಮತ್ತು ಪೂರಕ ಪೌಷ್ಠಿಕ ಆಹಾರ ಒದಗಿಸುವ ಪುಣ್ಯದ ಕಾರ್ಯಕ್ಕೆ ಸರ್ಕಾರದ ಜೊತೆಗೆ ಕೈಜೋಡಿಸಿದ್ದಾರೆ ಎಂದರು.
ವೈಜ್ಞಾನಿಕವಾಗಿ, ವೈಚಾರಿಕವಾಗಿ ನೀವು ವಿಕಾಸ ಹೊಂದಬೇಕು. ಆಗ ಮಾತ್ರ ಸಮಾಜಮುಖಿ ಆಗುತ್ತೀರಿ ಎಂದು ಶಾಲಾ ಮಕ್ಕಳಿಗೆ ಕರೆ ನೀಡಿದರು.
ಬಡವರ ಮಕ್ಕಳಿಗೂ ಉತ್ತಮ ಶಿಕ್ಷಣಕ್ಕಾಗಿ ಅವಕಾಶಗಳನ್ನು ಸೃಷ್ಟಿಸುವುದು ನಮ್ಮ ಆಶಯ. ಈ ಕಾರಣಕ್ಕೇ ಸಮವಸ್ತ್ರ, ಶೂ, ಸಾಕ್ಸ್ ಕೊಡುವ ಜೊತೆಗೆ ಹೆಚ್ಚೆಚ್ಚು ವಸತಿ ಶಾಲೆಗಳನ್ನು ತೆರೆಯುತ್ತಿದ್ದೇವೆ ಎಂದರು.
ಶಿಕ್ಷಣ ಸಚಿವ ಮಧು ಬಂಗಾರಪ್ಪ, ವಿಪ್ರೋ ಮುಖ್ಯಸ್ಥರಾದ ಅಜೀಂ ಪ್ರೇಮ್ ಜಿ ದಂಪತಿ, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್ ಅಹಮದ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷರಾದ ಮೆಹರೂಜ್ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ