ಪ್ರಗತಿವಾಹಿನಿ ಸುದ್ದಿ; ಕಲಬುರಗಿ: ವಿಧಾನಮಂಡಲ ಅಧಿವೇಶನಕ್ಕೂ ಮುನ್ನ ರಾಜ್ಯ ಸಚಿವ ಸಂಪುಟ ವಿಸ್ತರಣೆ ಮಾಡುವ ಆಸೆಯಿದೆ. ಈ ಬಗ್ಗೆ ಪ್ರಧಾನಿ ಮೋದಿ ಹಾಗೂ ಕೇಂದ್ರ ಸಚಿವರ ಜತೆ ಚರ್ಚಿಸಿ ನಿರ್ಧಾರ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದರು.
ಕಲಬುರಗಿಯಲ್ಲಿ ಕಲ್ಯಾಣ ಕರ್ನಾಟ ಉತ್ಸವಕ್ಕೆ ಚಾಲನೆ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಯಡಿಯೂರಪ್ಪ, ಇಂದು ದೆಹಲಿಗೆ ತೆರಳುತ್ತಿದ್ದು ನಾಳೆ ಪ್ರಧಾನಿ ಮೋದಿ ಹಾಗೂ ಕೇಂದ್ರ ಸಚಿವರನ್ನು ಭೇಟಿಯಾಗಲಿದ್ದೇನೆ. ಸಂಪುಟ ವಿಸ್ತರಣೆ ವಿಚಾರ ಹಾಗೂ ಕೊರೊನಾ ಸೋಂಕು, ಪ್ರವಾಹದಿಂದ ರಾಜ್ಯದಲ್ಲಿ ಉಂಟಾಗಿರುವ ಸಂಕಷ್ಟ ಮೊದಲಾದ ವಿಷಯಗಳ ಬಗ್ಗೆ ಚರ್ಚೆ ನಡೆಸುವುದಾಗಿ ತಿಳಿಸಿದರು.
ರಾಜ್ಯದ ಅಭಿವೃದ್ಧಿಗೆ ಹೆಚ್ಚಿನ ಹಣ ಬಿಡುಗಡೆಗೂ ಪ್ರಧಾನಿ ಮೋದಿಯವರಿಗೆ ಮನವಿ ಮಾಡಲಿದ್ದೇನೆ. ಇನ್ನು ಸಂಪುಟ ವಿಸ್ತರಣೆ ಬಗ್ಗೆ ವರಿಷ್ಠರ ಸಲಹೆ ಮೇರೆಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದರು.
ಕಲಬುರ್ಗಿಯಿಂದ ವಿಶೇಷ ವಿಮಾನದ ಮೂಲಕ ಇಂದು ಸಿಎಂ ಯಡಿಯೂರಪ್ಪ ದೆಹಲಿಗೆ ತೆರಳಲಿದ್ದು, ಮೊದಲಿಗೆ ಪ್ರಧಾನಿ ಮೋದಿ ಅವರನ್ನು ಭೇಟಿಯಾಗಿ ಹುಟ್ಟುಹಬ್ಬದ ಶುಭ ಕೋರಲಿದ್ದಾರೆ. ಇನ್ನು ರಾಜ್ಯದಲ್ಲಿ ಬಿಜೆಪಿ ಸರ್ಕಾರ ಒಂದು ವರ್ಷ ಪೂರೈಸಿರುವುದಕ್ಕೆ ಅಭಿನಂದನೆ ಸಲ್ಲಿಸಲಿದ್ದಾರೆ. ಬಳಿಕ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿ ಮಾಡಿ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚಿಸಲಿದ್ದಾರೆ ಎನ್ನಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ