ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯಾದ್ಯಂತ 74ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ ಹಿನ್ನಲೆಯಲ್ಲಿ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಧ್ವಜಾರೋಹಣ ನೆರವೇರಿಸಿದರು.
ಧ್ವಜಾರೋಹಣ ನೆರವೇರಿಸಿ ರಾಜ್ಯದ ಜನತೆ ಉದ್ದೇಶಿಸಿ ಮಾತನಾಡಿದ ಸಿಎಂ ಯಡಿಯೂರಪ್ಪ, ಕೊವಿಡ್-19 ಜಾಗತಿಕ ಪಿಡುಗಾಗಿದ್ದು, ಇದು ಕೇವಲ ಆರೋಗ್ಯ ಕ್ಷೇತ್ರವನ್ನು ಮಾತ್ರವಲ್ಲ ಪ್ರತಿಯೊಂದು ಕ್ಷೇತ್ರವನ್ನು ಕೂಡ ಬಾಧಿಸುತ್ತಿದೆ. ನಾನು ಸಹ ಕೊರೊನಾ ಸೋಂಕಿತನಾಗಿ ಇದೀಗ ಸೂಕ್ತ ವೈದ್ಯಕೀಯ ಚಿಕಿತ್ಸೆಗಳನ್ನು ಪಡೆದು ಗುನಮುಖನಾಗಿದ್ದೇನೆ. ಕೊರೊನಾ ಬಗ್ಗೆ ಜನರು ಭಯಪಡುವ ಅಗತ್ಯವಿಲ್ಲ. ಜಾಗರೂಕರಾಗಿ ಎಚ್ಚರಿಕೆಯಿಂದ ಜೀವನ ನಡೆಸಬೇಕಷ್ಟೇ ಎಂದರು.
ಕೊರೋನಾದಿಂದ ಮೃತಪಟ್ಟ ವಾರಿಯರ್ಸ್ಗಳಿಗೆ 30 ಲಕ್ಷ ರೂ. ಪರಿಹಾರ ನೀಡುವುದಾಗಿ ಘೋಷಣೆ ಮಾಡಿದ್ದಾರೆ. ಲಾಕ್ಡೌನ್ನಿಂದ ಸಂಕಷ್ಟಕ್ಕೆ ಒಳಗಾದ ವಿವಿಧ ಕ್ಷೇತ್ರಗಳಿಗೆ 3,187 ಕೋಟಿ ಪ್ಯಾಕೇಜ್ ಘೋಷಣೆ ಮಾಡಲಾಗಿದೆ. ಕೊರೋನಾ ನಿಯಂತ್ರಣಕ್ಕೆ ಶ್ರಮಿಸಿದ ಎಲ್ಲರನ್ನೂ ನಾನು ಸ್ಮರಿಸುತ್ತೇನೆ ಎಂದಿದ್ದಾರೆ.
ಬೆಂಗಳೂರು ಮೆಟ್ರೋ ರೈಲು ಯೋಜನೆ 2ನೇ ಹಂತಕ್ಕೆ 30,695 ಕೋಟಿ ರೂ. ಮೀಸಲಿಡಲಾಗಿದೆ. 2024ರ ಜೂನ್ ವೇಳೆಗೆ 2ನೇ ಹಂತದ ಮೆಟ್ರೋ ರೈಲು ಯೋಜನೆ ಪೂರ್ಣಗೊಳ್ಳಲಿದೆ. 10 ಲಕ್ಷ ರೈತರಿಗೆ 6,500 ಕೋಟಿ ರೂ. ಬೆಳೆ ಸಾಲ ನೀಡಲಾಗಿದೆ. ಕೊಡಗು, ಕರಾವಳಿ ಹಾಗೂ ಉತ್ತರ ಕರ್ನಾಟಕದ ಸೇರಿದಂತೆ 11 ಜಿಲ್ಲೆಗಳನ್ನು ಪ್ರವಾಹಪೀಡಿತ ಜಿಲ್ಲೆಗಳೆಂದು ಘೋಷಿಸಲಾಗಿದೆ. ಸವಾಲುಗಳನ್ನು ಅವಕಾಶವನ್ನಾಗಿ ಪರಿವರ್ತಿಸಲು ಕರ್ನಾಟಕ ಸರ್ಕಾರ ದಿಟ್ಟ ಹೆಜ್ಜೆಯನ್ನಿಟ್ಟಿದೆ ಎಂದು ಹೇಳಿದರು.
ಅನ್ನದಾತನ ರಕ್ಷಣೆ ನಮ್ಮ ಸರ್ಕಾರದ ಮೊದಲ ಆದ್ಯತೆ. ರೈತರಿಗೆ ಕಿಸಾನ್ ಸಮ್ಮಾನ ಯೋಜನೆಯಡಿ ಆರ್ಥಿಕ ನೆರವು ನೀಡಲಾಗುವುದು. 10 ಲಕ್ಷ ರೈತರಿಗೆ 6,500 ಕೋಟಿ ರೂ. ಬೆಳೆ ಸಾಲ, 2020-21ನೇ ಸಾಲಿನಲ್ಲಿ ರಾಜ್ಯದ ಎಲ್ಲ ಅರ್ಹ ರೈತರಿಗೆ ಸಾಲ, ಒಟ್ಟು 5.82 ಲಕ್ಷ ರೈತರಿಗೆ ಸರ್ಕಾರದಿಂದ ನೆರವು ನೀಡಲಾಗುವುದು ಎಂದರು.
ಮುಖ್ಯಮಂತ್ರಿಗಳ ಭಾಷಣದ ಸಂಪೂರ್ಣ ವಿವರ ಇಲ್ಲಿದೆ-
CM Speech – 15.08.2020 FINAL – Kannada an
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ