ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮತ್ತೆ ಇಬ್ಬರು ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ಬಂದಿದೆ. ಅಲ್ಲದೇ ಸಿಎಂ ಬೆಂಗಾವಲು ಪಡೆ ಸಿಬ್ಬಂದಿಯೊಬ್ಬರಿಗೂ ಕೊರೊನಾ ಸೋಂಕು ಹರಡಿರುವ ಶಂಕೆ ವ್ಯಕ್ತವಾಗಿದೆ. ಈ ಹಿನ್ನಲೆಯಲ್ಲಿ ಸಿಎಂ ಯಡಿಯೂರಪ್ಪ ಅವರಿಗೆ ಕೊರೊನಾ ಆತಂಕ ಆರಂಭವಾಗಿದೆ.
ಗೃಹ ಕಚೇರಿ ಕೃಷ್ಣಾದ ಜನರೇಟರ್ ಆಪರೇಟ್ ಮಾಡುವ ಎಲೆಕ್ಟ್ರಿಷಿಯನ್ ಹಾಗೂ ಇನ್ನೋರ್ವ ಸಿಬ್ಬಂದಿಗೆ ಕೊರೊನಾ ಪಾಸಿಟೀವ್ ಬಂದಿದೆ. ತಮ್ಮ ಕಚೇರಿಯಲ್ಲೇ ಸೋಂಕು ಕಾಣಿಸಿಕೊಂಡ ಕಾರಣ ಸಿಎಂ ಬಿಎಸ್‍ವೈ ಇಂದಿನ ಎಲ್ಲ ಕಾರ್ಯಕ್ರಮಗಳನ್ನು ರದ್ದು ಮಾಡಿ ಮನೆಯಲ್ಲೇ ಉಳಿದಿದ್ದಾರೆ. ಈ ಹಿನ್ನೆಲೆಯಲ್ಲಿ ವಿಧಾನಸೌಧದಲ್ಲಿ ನಿವೃತ್ತಿ ಹೊಂದಿರುವ ವಿಧಾನ ಪರಿಷತ್ ಸದಸ್ಯರಿಗೆ ಬೀಳ್ಕೊಡುಗೆ ಕಾರ್ಯಕ್ರಮಲ್ಲಿ ಸಿಎಂ ಗೈರು ಹಾಜರಾಗಲಿದ್ದಾರೆ.
ಇನ್ನು ಸಿಎಂ ಗೃಹ ಕಚೇರಿ ಕೃಷ್ಣಾ, ಸರ್ಕಾರಿ ನಿವಾಸ ಕಾವೇರಿ ಮತ್ತು ಅಧಿಕೃತ ನಿವಾಸ ಧವಳಗಿರಿಯಲ್ಲಿರುವ ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ. ಕಳೆದ ಹಲವು ದಿನಗಳಿಂದಲೂ ಮೂರೂ ನಿವಾಸಗಳಲ್ಲಿರುವ ಸಿಬ್ಬಂದಿಗೆ ಸೋಂಕು ಪಾಸಿಟಿವ್ ಪತ್ತೆ ಆಗುತ್ತಿದ್ದು, ಸಿಎಂಗೆ ಕೊರೊನಾಂತಕ ಎದುರಾಗಿದೆ. ಈ ಹಿನ್ನಲೆಯಲ್ಲಿ ಸಿಎಂ ನಿವಾಸ ಕಾವೇರಿ, ಗೃಹ ಕಚೇರಿ ಕೃಷ್ಣ, ದವಳಗಿರಿ ನಿವಾಸವನ್ನು ಸಂಪೂರ್ಣ ಸ್ಯಾನಿಟೈಸ್ ಮಾಡಲಾಗುತ್ತಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ