ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ರಾಜ್ಯ ನಾಯಕರಲ್ಲಿ ಹಲವಾರು ಚರ್ಚೆಗೆ ಗ್ರಾಸವಾಗಿದೆ. ಈ ಹಿನ್ನಲೆಯಲ್ಲಿ ಮಾತನಾಡಿರುವ ಯಡಿಯೂರಪ್ಪ ಸಾಮಾನ್ಯ ಕಾರ್ಯಕರ್ತರಿಗೆ ಬಿಜೆಪಿ ಹೈಕಮಾಂಡ್ ಟಿಕೆಟ್ ನೀಡುವ ಮೂಲಕ ಕಾರ್ಯಕರ್ತರಿಗೂ ಪಕ್ಷದಲ್ಲಿ ಉತ್ತಮ ಕೊಡುಗೆ ನೀಡಲಾಗುವುದು ಎಂಬುದನ್ನು ತೋರಿಸಿದ್ದಾರೆ ಎಂದಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯಸಭೆಗೆ ಈರಣ್ಣ ಕಡಾಡಿ ಹಾಗೂ ಅಶೋಕ್ ಗಸ್ತಿಗೆ ಬಿಜೆಪಿ ಟಿಕೆಟ್ ನೀಡಿದ್ದು, ಸಾಮಾನ್ಯ ಕಾರ್ಯಕರ್ತರನ್ನೂ ಗುರ್ತಿಸಿ, ಉತ್ತಮ ಸ್ಥಾನ ನೀಡುವುದು ಬಿಜೆಪಿಯಲ್ಲಿ ಮಾತ್ರ ಸಾಧ್ಯ ಎಂದರು.
ಕೇಂದ್ರ ಸರ್ಕಾರದ ನಿರ್ಧಾರಕ್ಕೆ ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ಹಾಗೂ ಜೆಪಿ ನಡ್ಡಾ ಅವರಿಗೆ ಧನ್ಯವಾದ ಸಲ್ಲಿಸಿದ ಬಿಎಸ್‌ವೈ ಅಭ್ಯರ್ಥಿಗಳು ರಾಜ್ಯಸಭೆಯಲ್ಲಿ ಒಳ್ಳೆಯ ಕೆಲಸ ಮಾಡುತ್ತಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ರಾಜ್ಯ ಮುಖಂಡರ ಕೋರ್ ಕಮಿಟಿ ಸಭೆಯಲ್ಲಿ ಕೆಲವು ಹೆಸರುಗಳನ್ನು ಆಯ್ಕೆಮಾಡಿ ಕಳಿಸಿಕೊಟ್ಟಿದ್ದೆವು. ಆದರೆ ಸಾಮಾನ್ಯ ಕಾರ್ಯಕರ್ತರಿಗೆ ಟಿಕೆಟ್ ಕೊಡುವ ನಿಟ್ಟಿನಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಚರ್ಚೆ ಮಾಡಿದ್ದರು. ಬಳಿಕ ನಿರ್ಧಾರವನ್ನು ಪ್ರಕಟ ಮಾಡಿದ್ದಾರೆ ಎಂದರು.
ರಾಜ್ಯಸಭೆಗೆ ಬಿಜೆಪಿ ಅಭ್ಯರ್ಥಿಯಾಗಿ ಅಶೋಕ್ ಗಸ್ತಿ ಹಾಗೂ ಈರಣ್ಣ ಕಡಾಡಿ ಅವರನ್ನು ಬಿಜೆಪಿ ಹೈಕಮಾಂಡ್ ಘೋಷಣೆ ಮಾಡಿದೆ. ಹೈಕಮಾಂಡ್ ನಿರ್ಧಾರ ರಾಜ್ಯ ಬಿಜೆಪಿಯಲ್ಲಿ ತಲ್ಲಣ ಸೃಷ್ಟಿಸಿದೆ ಎನ್ನಲಾಗುತ್ತಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ