ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸಧ್ಯಕ್ಕೆ ಲಾಕ್ ಡೌನ್ ನಂತಹ ಕಠಿಣ ಕ್ರಮದ ಅಗತ್ಯವಿಲ್ಲ. ಅಗತ್ಯವಿದ್ದರೆ ವೀಕೆಂಡ್ ಕರ್ಫ್ಯೂ ಜಾರಿಗೊಳಿಸೋಣ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ಕೋವಿಡ್ ನಿವರ್ಹಣೆ ನಿಟ್ಟಿನಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಇಂದು ಹಿರಿಯ ಅಧಿಕಾರಿಗಳ ಸಭೆ ನಡೆದಿದ್ದು, ಸಭೆಯಲ್ಲಿ ಕೊರೊನಾ ಮೂರನೇ ಅಲೆ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚೆ ನಡೆಸಲಾಯಿತು.
ಈ ವೇಳೆ ಮೂರನೇ ಅಲೆ ಭೀತಿ ಇರುವುದರಿಂದ ಮಕ್ಕಳ ಬಗ್ಗೆ ಹೆಚ್ಚಿನ ನಿಗಾ ವಹಿಸಬೇಕು. ಹಬ್ಬಗಳಲ್ಲಿ ಜನರು ಒಂದೆಡೆ ಸೇರದಂತೆ ಎಚ್ಚರಿಕೆ ವಹಿಸಿ. ಒಂದು ರಾಜ್ಯದಿಂದ ಇನ್ನೊಂದು ರಾಜ್ಯಗಳಿಗೆ ಜನ ಸಂಚಾರಕ್ಕೆ ಕಡಿವಾಣ ಹಾಕಬೇಕು ಎಂದು ತಜ್ಞರು ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.
ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ, ಗ್ರಾಮೀಣ ಭಾಗ ಹಾಗೂ ಜಿಲ್ಲೆಗಳಲ್ಲಿ ತಪಾಸಣೆ ಹೆಚ್ಚಿಸಿ, ಲಸಿಕಾಕರಣ ಹೆಚ್ಚಿಸಿವಂತೆ ಅಧಿಕಾರಿಗಳಿಗೆ ಸೂಚನೆ ನಿಡಲಾಗಿದೆ. ಮಹಾರಾಷ್ಟ್ರ, ಕೇರಳ ಗಡಿಜಿಲ್ಲೆಗಳಲ್ಲಿ ಟೆಸ್ಟಿಂಗ್ ಕಡ್ಡಾಯ. ಮುಂದಿನ ಎರಡು ವಾರಗಳ ಕಾಲ ಹಾಲಿ ಇರುವ ಕೋವಿಡ್ ನಿಯಮಗಳೇ ಮುಂದುವರೆಯಲಿದೆ ಎಂದು ಹೇಳಿದರು.
ಡೆಲ್ಟಾ ವೈರಸ್, ಕೋವಿಡ್ ರೂಪಾಂತರಿ ಕಂಡು ಹಿಡಿಯಲು ಲ್ಯಾಬ್ ತೆರೆಯಲಾಗುವುದು. ಸಧ್ಯ ರಾಜ್ಯದಲ್ಲಿ ಪಾಸಿಟಿವಿಟಿ ರೇಟ್ ಶೇ.1.04ರಷ್ಟಿದ್ದು, ಪಾಸಿಟಿವಿಟಿ ರೇಟ್ ಶೇ.2ಕ್ಕಿಂತ ಕಡಿಮೆ ಇರುವಲ್ಲಿ ಆ.23ರಿಂದ ಶಾಲೆಗಳ ಆರಂಭಕ್ಕೆ ನಿರ್ಧರಿಸಲಾಗಿದೆ. ಪೋಷಕರು, ಶಿಕ್ಷಕರಿಗೆ ಆದ್ಯತೆ ಮೇರೆಗೆ ವ್ಯಾಕ್ಸಿನ್ ಕಡ್ಡಾಯವಾಗಿದೆ. ಶಾಲೆ ಆರಂಭದ ಬಳಿಕ ಪ್ರಕರಣ ಹೆಚ್ಚಾದಲ್ಲಿ ಶಾಲೆಗಳನ್ನು ಒಂದು ವಾರ ಬಂದ್ ಮಾಡಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.
ಕೋವಿಡ್ ನಿರ್ವಹಣೆಗೆ ಜಿಲ್ಲಾವಾರು ಯೋಜನೆ ರೂಪಿಸಲು ಸೂಚಿಸಲಾಯಿತು. ಆಯಾ ಜಿಲ್ಲೆಗಳ ಪರಿಸ್ಥಿತಿಗೆ ಅನುಗುಣವಾಗಿ ಜಿಲ್ಲೆಯ ಅಗತ್ಯಕ್ಕೆ ತಕ್ಕಂತೆ ಯೋಜನೆ ರೂಪಿಸಲಾಗುವುದು.
ದಕ್ಷಿಣ ಕನ್ನಡ, ಉಡುಪಿ, ಮೈಸೂರು, ಕೊಡಗು ಹಾಸನ, ಚಿಕ್ಕಮಗಳೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಲಸಿಕೆ ಹಾಕಿಸಲು ಹಾಗೂ ಪರೀಕ್ಷಾ ಪ್ರಮಾಣ ಹೆಚ್ಚಿಸಲು ತೀರ್ಮಾನಿಸಲಾಗಿದೆ.
ಕೇರಳ ಮತ್ತು ಮಹಾರಾಷ್ಟ್ರ ಗಡಿ ಭಾಗದಿಂದ 10 ಕಿ.ಮೀ. ವ್ಯಾಪ್ತಿಯಲ್ಲಿರುವ ರಾಜ್ಯದ ಹಳ್ಳಿಗಳಲ್ಲಿ ಲಸಿಕೆ ನೀಡುವುದನ್ನು ತೀವ್ರಗೊಳಿಸಲು ಹಾಗೂ ಪರೀಕ್ಷಾ ಪ್ರಮಾಣ ಹೆಚ್ಚಿಸಲು ತೀರ್ಮಾನಿಸಲಾಗಿದೆ.
ರಾಯಚೂರು, ಕಲಬುರಗಿ, ಬಳ್ಳಾರಿ, ಬೀದರ್, ಕೊಪ್ಪಳ, ಹಾವೇರಿ, ವಿಜಯಪುರ, ತುಮಕೂರು, ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಪರಿಕ್ಷಾ ಪ್ರಮಾಣ ಹೆಚ್ಚಿಸಲು ನಿರ್ಧರಿಸಲಾಗಿದೆ.
ಮುಂದಿನ ಎರಡು ವಾರದಲ್ಲಿ ರಾಜ್ಯದಲ್ಲಿ ಬೆಂಗಳೂರು, ಮೈಸೂರು, ಶಿವಮೊಗ್ಗ, ಕಲಬುರಗಿ, ಬೆಳಗಾವಿ, ಹುಬ್ಬಳ್ಳಿಗಳಲ್ಲಿ ಆರು ಜಿನೋಮ್ ಪರೀಕ್ಷಾ ಪ್ರಯೋಗಾಲಯಗಳನ್ನು ಸ್ಥಾಪಿಸಲು ಸೂಚಿಸಲಾಗಿದೆ. ಡೆಲ್ಟಾ ವೇರಿಯೆಂಟ್ ವೈರಸ್ ಅಧ್ಯಯನ ಹಾಗೂ ಇತರ ವೇರಿಯೆಂಟ್ ಗಳನ್ನು ಪತ್ತೆ ಹಚ್ಚಲು ಇದರಿಂದ ಅನುಕೂಲವಾಗಲಿದೆ.
ರಾಜ್ಯದಲ್ಲಿ ಇಂದಿನ ವರೆಗೆ ಸುಮಾರು 4 ಕೋಟಿ ಲಸಿಕೆ ಹಾಕಲಾಗಿದೆ. 14.89 ಲಕ್ಷ ಡೋಸ್ ಲಸಿಕೆ ಲಭ್ಯವಿದೆ. ಮುಂದಿನ ವಾರ ದೆಹಲಿಗೆ ತೆರಳಿ ಕೇಂದ್ರ ಆರೋಗ್ಯ ಸಚಿವರನ್ನು ಭೇಟಿಯಾಗಿ ರಾಜ್ಯಕ್ಕೆ ಹಂಚಿಕೆಯಾಗುವ ಲಸಿಕೆ ಡೋಸ್ ಗಳನ್ನು 65 ಲಕ್ಷದಿಂದ 1 ಕೋಟಿಗೆ ಹೆಚ್ಚಿಸುವಂತೆ ಮನವಿ ಮಾಡಲಾಗುವುದು ಎಂದು ತಿಳಿಸಿದರು.
ಬೆಂಗಳೂರು ನಗರದಲ್ಲಿ ಕೋವಿಡ್ ನಿರ್ವಹಣೆ ಕುರಿತಂತೆ ಮಕ್ಕಳ ಐಸಿಯು ಬೆಡ್ ಗಳನ್ನು ಮೀಸಲಿರಿಸಲು ಸೂಚಿಸಲಾಗಿದೆ. ಬೆಂಗಳೂರಿನಲ್ಲಿ ಸದ್ಯ 0.75 ಪಾಸಿಟಿವಿಟಿ ದರ ಇದೆ. ಶೆ. 2 ರಷ್ಟು ಪಾಸಿಟಿವಿಟಿ ದರ ಹಾಗೂ ಶೆ. 40 ರಷ್ಟು ಆಕ್ಸಿಜನೇಟೆಡ್ ಬೆಡ್ ಗೆ ಸೋಂಕಿತರಾದರೆ ದಾಖಲಾದರೆ, ಮುಂದಿನ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಅಧಿಕಾರ ನೀಡಲಾಗಿದೆ.
ಸಚಿವನಾಗುವ ಆಸೆಯೇ ಇಲ್ಲ, ಅದಕ್ಕಿಂತ ಹೆಚ್ಚಿದ್ದೇನೆ ಎಂದ ರಮೇಶ್ ಜಾರಕಿಹೊಳಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ