*ನಾಳೆ 5ನೇ ಮಿನಿ ಕರ್ನಾಟಕ ಕ್ರೀಡಾಕೂಟಕ್ಕೆ ಸಿಎಂ ಡಿ.ಕೆ.ಶಿವಕುಮಾರ್ ಅವರಿಂದ ಚಾಲನೆ*

8 ದಿನಗಳ ಕಾಲ ನಡೆಯಲಿರುವ ಮಿನಿ ಕರ್ನಾಟಕ ಕ್ರೀಡಾಕೂಟ
ಪ್ರಗತಿವಾಹಿನಿ ಸುದ್ದಿ: ಬೆಂಗಳೂರು: ಕರ್ನಾಟಕ ಸರ್ಕಾರ, ಕರ್ನಾಟಕ ಒಲಿಂಪಿಕ್ ಸಂಸ್ಥೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ 5ನೇ ಮಿನಿ ಕರ್ನಾಟಕ ಕ್ರೀಡಾಕೂಟಕ್ಕೆ ಶನಿವಾರ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಚಾಲನೆ ನೀಡಲಿದ್ದಾರೆ.
ಕಂಠೀರವ ಒಳಾಂಗಣ ಸ್ಟೇಡಿಯಂನಲ್ಲಿ ನಡೆಯಲಿರುವ ಉದ್ಘಾಟನಾ ಸಮಾರಂಭದಲ್ಲಿ ಉಪ ಮುಖ್ಯಮಂತ್ರಿಗಳು ಹಾಗೂ ಕ್ರೀಡಾ ಸಚಿವರಾದ ಡಾ.ಜಿ.ಪರಮೇಶ್ವರ್, ಸಚಿವರಾದ ರಾಮಲಿಂಗಾ ರೆಡ್ಡಿ, ಕೆ.ಜೆ.ಜಾರ್ಜ್ ಉಪಸ್ಥಿತರಿದ್ದು, ಸಚಿವರಾದ ರಿಜ್ವಾನ್ ಅರ್ಷದ್ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ.
ನವೆಂಬರ್ 14 ರಿಂದ 21 ರವರೆಗೆ ಕಂಠೀರವ ಸ್ಟೇಡಿಯಂ ಸೇರಿದಂತೆ ಬೆಂಗಳೂರಿನ ವಿವಿಧ ಕ್ರೀಡಾಂಗಣಗಳಲ್ಲಿ ಸ್ಪರ್ಧೆಗಳು ನಡೆಯಲಿವೆ. 27 ವಿವಿಧ ಕ್ರೀಡಾ ಸ್ಪರ್ಧೆಗಳನ್ನು ಆಯೋಜಿಸಲಾಗುತ್ತಿದೆ. 2020ರಲ್ಲಿ ಮೊದಲ ಬಾರಿಗೆ ಈ ಕ್ರೀಡಾಕೂಟವನ್ನು ಆಯೋಜಿಸಲಾಗಿತ್ತು. 14 ವಯೋಮಿತಿಯ ಸುಮಾರು 5 ಸಾವಿರ ಕ್ರೀಡಾಪಟುಗಳು ಈ ಕ್ರೀಡಾಕೂಟದಲ್ಲಿ ಭಾಗವಹಿಸುತ್ತಿದ್ದಾರೆ.
ಸಾಂಸ್ಕೃತಿಕ ಕಾರ್ಯಕ್ರಮಗಳು
ಉದ್ಘಾಟನಾ ಸಮಾರಂಭದ ವೇಳೆ ಕ್ರೀಡಾಪಟುಗಳಿಂದ ಪಥಸಂಚಲನ ನಡೆಯಲಿದ್ದು, ಜೊತೆಗೆ ವಿವಿಧ ಸಾಂಸ್ಕೃತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಬೆಂಗಳೂರಿನ ವಿವಿಧ ಶಾಲಾ ಕಾಲೇಜು ವಿದ್ಯಾರ್ಥಿಗಳು ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಕ್ರೀಡಾಕೂಟದಲ್ಲಿ ಭಾಗವಹಿಸುತ್ತಿರುವ ಕ್ರೀಡಾಪಟುಗಳಿಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ನಗರದ ಹೋಟೆಲ್‌ಗಳಲ್ಲಿ ಊಟ, ವಸತಿ ವ್ಯವಸ್ಥೆ ಮಾಡಲಾಗಿದ್ದು, ಇದರ ಜೊತೆಗೆ ಸಾರಿಗೆ ವ್ಯವಸ್ಥೆ ಮಾಡಲಾಗುತ್ತಿದೆ.
27 ಕ್ರೀಡೆಗಳು :
ಮಿನಿ ಕರ್ನಾಟಕ ಕ್ರೀಡಾಕೂಟದಲ್ಲಿ ಅಥ್ಲೆಟಿಕ್ಸ್, ಆರ್ಚರಿ, ಬಾಸ್ಕೆಟ್‌ಬಾಲ್, ಬ್ಯಾಡ್ಮಿಂಟನ್, ಬಾಕ್ಸಿಂಗ್, ಸೈಕ್ಲಿಂಗ್, ಫೆನ್ಸಿಂಗ್, ಕಯಾಕಿಂಗ್ ಮತ್ತು ಕೆನೋಯಿಂಗ್, ಗಾಲ್ಫ್, ಫುಟ್ಬಾಲ್, ಜಿಮ್ನಾಸ್ಟಿಕ್ಸ್, ಹ್ಯಾಂಡ್‌ಬಾಲ್, ಹಾಕಿ, ಜೂಡೋ, ಖೋ-ಖೋ, ಕಬಡ್ಡಿ, ಲಾನ್ ಟೆನ್ನಿಸ್, ವಾಲಿಬಾಲ್, ನೆಟ್‌ಬಾಲ್, ಈಜು, ಟೇಬಲ್ ಟೆನ್ನಿಸ್, ಟೇಕ್ವಾಂಡೋ, ರೈಡಿಂಗ್, ರೈಫಲ್ ಶೂಟಿಂಗ್, ರೆಸ್ಲಿಂಗ್, ವುಶು ಮತ್ತು ವೆಯ್ಟ್ ಲಿಫ್ಟಿಂಗ್ ಕ್ರೀಡೆಗಳನ್ನೊಳಗೊಂಡಿರುತ್ತವೆ.
“ಯುವ ಕ್ರೀಡಾಪಟುಗಳ ಪಾಲಿಗೆ ಚಿಮ್ಮುಹಲಗೆಯಂತಿರುವ ಮಿನಿ ಕರ್ನಾಟಕ ಕ್ರೀಡಾಕೂಟಕ್ಕೆ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ಹೊರ ಜಿಲ್ಲೆಗಳಿಂದ ಬರುವ ಕ್ರೀಡಾಪಟುಗಳಿಗೆ ವಸತಿ, ಸಾರಿಗೆ ವ್ಯವಸ್ಥೆ ಮಾಡಲಾಗಿದೆ. ಈ ಮಕ್ಕಳು ಭವಿಷ್ಯದಲ್ಲಿ ರಾಜ್ಯಕ್ಕೆ ಹಾಗೂ ದೇಶಕ್ಕೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪದಕ ಗೆದ್ದು ಬರಲಿ ಅನ್ನೋದೆ ನನ್ನ ಆಸೆʼ ಎಂದು ಕೆಒಎ ಅಧ್ಯಕ್ಷರು, ಶಾಸಕರು ಆಗಿರುವ ಡಾ.ಕೆ.ಗೋವಿಂದರಾಜ್ ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ



