
ಪ್ರಗತಿವಾಹಿನಿ ಸುದ್ದಿ: ಸಿಎಂ ಬದಲಾವಣೆ ಹಾಗೂ ರಾಜ್ಯ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆ ಚರ್ಚೆಗಳು ನಿರಂತರವಾಗಿ ನಡೆಯುತ್ತಿರುವ ಬೆನ್ನೆಲ್ಲೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ, ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ ಅವರು ಮತ್ತೊಮ್ಮೆ ದಿಲ್ಲಿಗೆ ಪ್ರಯಾಣ ಬೆಳೆಸುತ್ತಿದ್ದು, ಹೈ ಕಮಾಂಡ್ ಜತೆ ಮಹತ್ವದ ವಿಚಾರಗಳನ್ನು ಚರ್ಚಿಸಲಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜು.25ರಂದು ಮತ್ತೆ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ಸದ್ಯ ವಿಧಾನಪರಿಷತ್ ಸದಸ್ಯರ ನೇಮಕ ಹಾಗೂ ನಿಗಮ-ಮಂಡಳಿಗಳ ನೇಮಕ ಸೇರಿ ವಿವಿಧ ವಿಷಯಗಳ ಕುರಿತು ಮಹತ್ವದ ಚರ್ಚೆ ನಡೆಯುವ ನಿರೀಕ್ಷೆಯಿದೆ.
ನಿಗಮ-ಮಂಡಳಿಗೆ ಖಾಲಿ ಇರುವ ಸ್ಥಾನಗಳ ಭರ್ತಿ ಹಾಗೂ ಗೊಂದಲ ಉಂಟಾಗಿದ್ದು, ನಾಲ್ಕು ಮಂದಿ ಪರಿಷತ್ ಸದಸ್ಯರ ಹೆಸರು ಅಂತಿಮಗೊಳಿಸುವ ಬಗ್ಗೆ ಚರ್ಚೆ ನಡೆಯಲಿದೆ. ಎಂಟು ನಿಗಮ ಮಂಡಳಿ ಅಧ್ಯಕ್ಷರ ಹುದ್ದೆ ಹಾಗೂ ಉಪಾಧ್ಯಕ್ಷರು ಸೇರಿ ಒಟ್ಟು 40 ಹುದ್ದೆಗಳ ನೇಮಕದ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಹೇಳಲಾಗುತ್ತಿದೆ.