
ಪ್ರಗತಿವಾಹಿನಿ ಸುದ್ದಿ: ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಇಂದು ದೆಹಲಿ ಪ್ರವಾಸ ಕೈಗೊಂಡಿದ್ದು, ಇಂದು ಹೈಕಮಾಂಡ್ ನಾಯಕರ ಭೇಟಿ ಮಾಡಲಿದ್ದಾರೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆ ಮತ್ತು ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಗಳ ಕುರಿತು ವರದಿ ಸಲ್ಲಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಈ ಹಗರಣಗಳನ್ನೇ ಮುಂದಿಟ್ಟು ಬಿಜೆಪಿ- ಜೆಡಿಎಸ್ ಮೈತ್ರಿಕೂಟ ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ನಡೆಸಲು ಮುಂದಾಗಿದೆ. ಇದರ ನಡುವೆ ಸಿಎಂ ಹಾಗೂ ಡಿಸಿಎಂ ದೆಹಲಿಗೆ ತೆರಳುತ್ತಿರುವುದು ರಾಜ್ಯ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ.
ಈ ಭೇಟಿ ಪೂರ್ವಯೋಜಿತ. ಕೇಂದ್ರದ ಜಲಶಕ್ತಿ ಸಚಿವರೂ ಸೇರಿದಂತೆ ಕೆಲವು ಸಚಿವರನ್ನೂ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ಭೇಟಿ ಮಾಡಿ ಚರ್ಚೆ ನಡೆಸಲಿದ್ದಾರೆ. ಹೊರತು ಹಗರಣ ಅಥವಾ ರಾಜ್ಯ ರಾಜಕೀಯಕ್ಕೆ ಸಂಬಂಧಿಸಿ ಅಲ್ಲ ಎಂದು ಕಾಂಗ್ರೆಸ್ ಮೂಲಗಳು ಹೇಳಿವೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸೇರಿದಂತೆ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ಚರ್ಚೆ ನಡೆಸಲಿದ್ದಾರೆ. ಹಗರಣಗಳಿಂದ ಉಂಟಾಗಿರುವ ರಾಜಕೀಯ ಪರಿಸ್ಥಿತಿಯ ಬಗ್ಗೆಯೂ ಮಾಹಿತಿ ನೀಡುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ