ಪ್ರಗತಿವಾಹಿನಿ ಸುದ್ದಿ, ಬೆಂಗಳೂರು :
ತಮ್ಮೊಂದಿಗೆ, ತಮಗೆ ಅನುಕೂಲವಾದ ಸಮಯಕ್ಕೇ ಮಾತುಕತೆ ನಡೆಸಲು ಸರಕಾರ ಸಿದ್ದವಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಬಿಜೆಪಿ ನಾಯಕ ಯಡಿಯೂರಪ್ಪಗೆ ಪತ್ರ ಬರೆದಿದ್ದಾರೆ.
ಜೂನ್ 16ರ ಭಾನುವಾರ ಎಚ್.ಡಿ.ಕುಮಾರಸ್ವಾಮಿ ಅವರು ಈ ಪತ್ರವನ್ನು ಬರೆದಿದ್ದು, ಸಚಿವ ವೆಂಕಟರಾವ್ ನಾಡಗೌಡ ಅವರು ಬಿಜೆಪಿ ನಾಯಕರು ಧರಣಿ ನಡೆಸುತ್ತಿರುವ ಸ್ಥಳಕ್ಕೆ ತೆರಳಿ ಪತ್ರವನ್ನು ಯಡಿಯೂರಪ್ಪ ಅವರಿಗೆ ನೀಡಿದರು.
ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ಅಹೋರಾತ್ರಿ ಧರಣಿ ನಡೆಸುತ್ತಿರುವ ಹಿನ್ನೆಲೆಯಲ್ಲಿ ಎಚ್.ಡಿ.ಕುಮಾರಸ್ವಾಮಿ ಈ ಪತ್ರ ಬರೆದಿದ್ದಾರೆ. ತಮ್ಮೊಂದಿಗೆ ಚರ್ಚೆ ನಡೆಸಲು ನಾನು ಸಿದ್ಧ ಎಂದು ಪತ್ರದಲ್ಲಿ ತಿಳಿಸಿದ್ದಾರೆ.
ಜಿಂದಾಲ್ ವಿವಾದ, ಬರ ಪರಿಹಾರ ಸೇರಿದಂತೆ ವಿವಿಧ ವಿಚಾರಗಳನ್ನು ಮುಂದಿಟ್ಟುಕೊಂಡು ಪ್ರತಿಪಕ್ಷ ನಾಯಕ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ನಾಯಕರು ಸರ್ಕಾರದ ವಿರುದ್ಧ ಶುಕ್ರವಾರದಿಂದ ಮೌರ್ಯ ಸರ್ಕಲ್ ಬಳಿ ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ.
ರಾಜ್ಯದಲ್ಲಿ ಬರ ಪರಿಹಾರ ನಿರ್ವಹಣೆ, ರೈತರ ಸಾಲ ಮನ್ನಾ ಯೋಜನೆ ಹಾಗೂ ಜಿಂದಾಲ್ ಸಂಸ್ಥೆಗೆ ಭೂಮಿ ಮಾರಾಟ ಕುರಿತಂತೆ ರಾಜ್ಯ ಸರ್ಕಾರದ ಕ್ರಮಗಳನ್ನು ಪ್ರತಿಭಟಿಸಿ ತಮ್ಮ ನಾಯಕತ್ವದಲ್ಲಿ ಅಹೋರಾತ್ರಿ ಧರಣಿ ನಡೆಸುತ್ತಿರುವುದನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ಸಿಎಂ ತಿಳಿಸಿದ್ದಾರೆ.
ರಾಜ್ಯ ಸರ್ಕಾರವು ಬರ ಪರಿಹಾರ ಕಾಮಗಾರಿಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸಿ ರಾಜ್ಯದ ಜನರಿಗೆ ಯಾವುದೇ ತೊಂದರೆ ಆಗದಂತೆ ಅಗತ್ಯ ಕ್ರಮ ಕೈಗೊಂಡಿದೆ. ರೈತರ ಸಾಲ ಮನ್ನಾ ಯೋಜನೆಯನ್ನು ಸಹ ಯಶಸ್ವಿಯಾಗಿ ಅನುಷ್ಠಾನಗೊಳಿಸಲಾಗುತ್ತಿದೆ. ಜಿಂದಾಲ್ ಸಂಸ್ಥೆಗೆ ಭೂಮಿ ಮಾರಾಟ ಕುರಿತಂತೆ ಪುನರ್-ವಿಮರ್ಶಗೆ ಸಚಿವ ಸಂಪುಟದ ಉಪ ಸಮಿತಿಯನ್ನು ರಚಿಸಲಾಗುತ್ತದೆ. ಮುಖ್ಯಮಂತ್ರಿಗಳ ಗೃಹ ಕಚೇರಿಗೆ ಮುತ್ತಿಗೆ ಹಾಕುವುದಾಗಿ ಪ್ರಕಟಿಸಿರುವದನ್ನು ಗಮನಿಸಿದ್ದೇನೆ. ತಮ್ಮೊಂದಿಗೆ ಚರ್ಚಿಸಲು ನಾನು ಸದಾ ಸಿದ್ಧನಾಗಿದ್ದೇನೆ. ತಮ್ಮ ಸಮಯಕ್ಕೆ ಅನುಗುಣವಾಗಿ ಚರ್ಚಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.
ಇದಕ್ಕೆ ಯಡಿಯೂರಪ್ಪ ಹಾಗೂ ಬಿಜೆಪಿ ಪ್ರತಿಕ್ರಿಯೆ ಇನ್ನಷ್ಟ ಬರಬೇಕಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ