ಡಿಸೆಂಬರ್ ಒಳಗೆ ಎಲ್ಲ ಅರ್ಹ ಫಲಾನುಭವಿಗಳಿಗೆ ಗೃಹಲಕ್ಷ್ಮೀ ಹಣ ತಲುಪಿಸಲು ಸಿಎಂ, ಸಚಿವರ ಸೂಚನೆ ; ಗೃಹಲಕ್ಷ್ಮೀ ಅದಾಲತ್ ಮೂಲಕ ಸಮಸ್ಯೆ ಪರಿಹರಿಸಲು ಸಲಹೆ


ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : ಡಿಸೆಂಬರ್ ಒಳಗೆ ಎಲ್ಲ ಅರ್ಹ ಫಲಾನುಭವಿಗಳಿಗೆ ಗೃಹಲಕ್ಷ್ಮೀ ಯೋಜನೆಯ ನಗದು ವರ್ಗಾವಣೆಯನ್ನು ಖಾತರಿ ಪಡಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆ ಹಾಗೂ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉಪಸ್ಥಿತಿಯಲ್ಲಿ ಬುಧವಾರ ಗೃಹ ಲಕ್ಶ್ಮಿ ಯೋಜನೆಯ ಪ್ರಗತಿ ಪರಿಶೀಲನೆ ಸಭೆ ನಡೆಯಿತು. ಗೃಹಲಕ್ಷ್ಮಿ ಫಲಾನುಭವಿಗಳು ಬಿಟ್ಟು ಹೋಗಿದ್ದಲ್ಲಿ ಅಥವಾ ಬ್ಯಾಂಕ್ ಖಾತೆ ಆಧಾರ್ ಲಿಂಕ್ ಮತ್ತಿತರ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಗೃಹ ಲಕ್ಷ್ಮಿ ಅದಾಲತ್ ಆಯೋಜಿಸಿ, ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಲಾಯಿತು.

ನವೆಂಬರ್ ತನಕ 1.17 ಕೋಟಿ ಫಲಾನುಭವಿಗಳು ನೋಂದಣಿಯಾಗಿದ್ದು, 1.10 ಕೋಟಿ ಫಲಾನುಭವಿಗಳಿಗೆ ನೆರವು ವರ್ಗಾವಣೆ ಮಾಡಲಾಗಿದೆ. 2 ಲಕ್ಷ ಫಲಾನುಭವಿಗಳಿಗೆ ಸಂಬಂಧಿಸಿದ ತೊಡಕು ನಿವಾರಿಸಲಾಗುತ್ತಿದೆ. ಖಾತೆಯ ಮಾಹಿತಿಯಲ್ಲಿ ಗೊಂದಲ, ಆಧಾರ್ ಲಿಂಕ್ ಆಗದಿರುವುದು ಮೊದಲಾದ ಕಾರಣಗಳಿಂದ ಹಣ ವರ್ಗಾವಣೆಗೆ ತೊಡಕಾಗಿದೆ. ಅಂಗನವಾಡಿ ಕಾರ್ಯಕರ್ತೆಯರು ಫಲಾನುಭವಿಗಳನ್ನು ಬ್ಯಾಂಕಿಗೇ ಕರೆದೊಯ್ದು ಸಮಸ್ಯೆ ಬಗೆಹರಿಸಲಾಗುತ್ತಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹಾಗೂ ಅಧಿಕಾರಿಗಳು ಮುಖ್ಯಮಂತ್ರಿಗಳಿಗೆ ಮಾಹಿತಿ ನೀಡಿದರು.
ಕೆಲವೇ ದಿನಗಳಲ್ಲಿ ಈ ಪ್ರಕ್ರಿಯೆ ಪೂರ್ಣಗೊಳಿಸಿ, ಎಲ್ಲ ಅರ್ಹ ಫಲಾನುಭವಿಗಳಿಗೆ ನೆರವು ಕ್ರಮ ಕೈಗೊಳ್ಳಲು ಸಿಎಂ ಸೂಚಿಸಿದರು.
ಸಭೆಯಲ್ಲಿ ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಕೆ.ಗೋವಿಂದರಾಜು, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯೆಲ್, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ಅಭಿವೃದ್ಧಿ ಆಯುಕ್ತೆ ಡಾ : ಶಾಲಿನಿ ರಜನೀಶ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕಾರ್ಯದರ್ಶಿ ಡಿ.ಸಿ.ಪ್ರಕಾಶ್ ನಿರ್ದೇಶಕಿ ಎಂ.ಎಸ್. ಅರ್ಚನಾ ಮತ್ತು ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ