*ಸಿಎಂ ಬಳಿ ಉಡುಪಿ ಶಾಸಕರ ನಿಯೋಗ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮಾಹಿತಿ*
ಪ್ರಗತಿವಾಹಿನಿ ಸುದ್ದಿ: ಜಿಲ್ಲೆಯ ಜ್ವಲಂತ ಸಮಸ್ಯೆಗಳಿಗೆ ಬೆಳಕು ಚೆಲ್ಲುವ ಸಲುವಾಗಿ ಮುಂಬರುವ ಅಧಿವೇಶನದ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಿ ಜಿಲ್ಲೆಯ ಶಾಸಕರೊಳಗೊಂಡ ನಿಯೋಗ ತೆರಳಿ ಮನವಿ ಸಲ್ಲಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಉಡುಪಿ ಜಿಲ್ಲಾ ಪಂಚಾಯತ್ ನ ಡಾ.ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಶನಿವಾರ ನಡೆದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಮಾತನಾಡಿದ ಸಚಿವರು, ಜಿಲ್ಲೆಯ ಸಮಸ್ಯೆಗಳಿಗೆ ಸೂಕ್ತ ರೀತಿಯಲ್ಲಿ ಸ್ಪಂದಿಸಬೇಕು ಎಂದು ಆದೇಶಿಸಿದರು.
ಸುಮಾರು ಮೂರು ಗಂಟೆಗೂ ಹೆಚ್ಚು ಕಾಲ ನಡೆದ ಸಭೆಯಲ್ಲಿ ಇಲಾಖಾವಾರು ಜಿಲ್ಲೆಯ ಸಮಸ್ಯೆಗಳನ್ನು ಆಲಿಸಿ, ಮಾಹಿತಿ ಪಡೆದುಕೊಂಡರು. ಮಾಹಿತಿ ಕೊರತೆಯಿಂದ ಸಭೆಯಲ್ಲಿ ಉತ್ತರಿಸಲು ಪರದಾಡಿದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಜಿಲ್ಲೆಯ ಜ್ವಲಂತ ಸಮಸ್ಯೆಗಳಿಗೆ ಬೆಳಕು ಚೆಲ್ಲಿ ಜನ ಸಾಮಾನ್ಯರ ಕೆಲಸ ಕಾರ್ಯಗಳನ್ನು ಮಾಡಿಕೊಡಲು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ ನೀಡಿದರು.
ಉಡುಪಿ ನಗರಕ್ಕೆ ಕುಡಿಯುವ ನೀರನ್ನು ಒದಗಿಸಲು ವರಾಹಿ ನದಿಯಿಂದ ಕೈಗೊಳ್ಳಲಾಗುತ್ತಿರುವ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಲು ತಿಳಿಸಿದರು.
ಕಿಂಡಿ ಅಣೆಕಟ್ಟು ನಿರ್ಮಾಣದಿಂದ ಅಂತರ್ಜಲ ವೃದ್ಧಿಯಾಗಿದೆ ಎಂಬುದರ ವೈಜ್ಞಾನಿಕ ವರದಿಯನ್ನು ನೀಡಲು ಸೂಚನೆ ನೀಡಿದ ಸಚಿವರು, ನಗರಾಭಿವೃದ್ಧಿ ಅನುದಾನ ದಲ್ಲಿ 15 ದಿನಗಳಲ್ಲಿ ಕೆರೆಗಳ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲು ತಿಳಿಸಿದರು.
ಮೀನುಗಾರಿಕೆಗೆ ಅನುಕೂಲವಾಗುವ ಉದ್ದೇಶದಿಂದ ಹೆಜಮಾಡಿ ಮೀನುಗಾರಿಕೆ ಬಂದರಿನ ಅಭಿವೃದ್ಧಿ ಕಾಮಗಾರಿ ಶೇಕಡ 80 ರಷ್ಟು ಮುಕ್ತಾಯಗೊಂಡಿದ್ದು, ಬಾಕಿ ಉಳಿದಿರುವ ಕಾಮಗಾರಿ ಮುಕ್ತಾಯಗೊಳಿಸಲು ಸೂಚನೆ ನೀಡಿದರು.
ಹೊಸ ಹಾಸ್ಟೆಲ್ ಗಳಿಗೆ ಬೇಡಿಕೆ
ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪ್ರಸ್ತುತ ಸಾಲಿನಲ್ಲಿ ಉಡುಪಿ ಜಿಲ್ಲೆಗೆ ಈಗಾಗಲೇ ಹೊಸದಾಗಿ ಎರಡು ಹಾಸ್ಟೆಲ್ ಗಳು ಮಂಜೂರಾಗಿದ್ದು,ಹೆಚ್ಚುವರಿ ಹಾಸ್ಟೆಲ್ ಗಳನ್ನು ತೆರೆಯಲು ಸಭೆಯಲ್ಲಿ ಶಾಸಕರು ಸಚಿವರಿಗೆ ಮನವಿ ಮಾಡಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ