Latest

ಕುತೂಹಲ ಕೆರಳಿಸಿದ ಸಿಎಂ ಯಡಿಯೂರಪ್ಪ ಹಾಗೂ ರಾಜ್ಯಪಾಲರ ಭೇಟಿ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಸಂಪುಟ ವಿಸ್ತರಣೆ ಸಿದ್ಧತೆಗಳು ಆರಂಭವಾಗಿವೆ ಎನ್ನಲಾಗುತ್ತಿದೆ. ಈ ನಡುವೆ ಇಂದು ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ದಿಢೀರ್‌ ರಾಜಭವನಕ್ಕೆ ತೆರಳಿ ರಾಜ್ಯಪಾಲ ವಜುಭಾಯಿ ವಾಲಾ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿರುವುದು ಕುತೂಹಲಕ್ಕೆ ಕಾರಣವಾಗಿದೆ.

ಸಿಎಂ ಯಡಿಯೂರಪ್ಪ ಹಾಗೂ ಗೃಹ ಸಚಿವ ಬಸವರಾಜ್‌ ಬೊಮ್ಮಾಯಿ ಇಂದು ರಾಜ್ಯಪಾಲರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಸಂಪುಟ ವಿಸ್ತರಣೆ ಕುರಿತು ಚರ್ಚೆ ಮಾಡುವ ನಿಟ್ಟಿನಲ್ಲಿಯೇ ಸಿಎಂ ಯಡಿಯೂರಪ್ಪ ರಾಜ್ಯಪಾಲರನ್ನು ಭೇಟಿ ಮಾಡಿದ್ದಾರೆ ಎನ್ನಲಾಗುತ್ತಿದೆ.

ಇದೇ ವೇಳೆ ಪ್ರಸ್ತುತ ರಾಜಕೀಯ ವಿದ್ಯಮಾನ ಹಾಗೂ ಕೊರೊನಾ ಸೋಂಕು ತಡೆಗಟ್ಟಲು ಸರ್ಕಾರ ಕೈಗೊಂಡ ಕ್ರಮಗಳು, ಚಿಕಿತ್ಸೆ ನೀಡಲು ಸರ್ಕಾರದ ಕ್ರಮಗಳ ಕುರಿತು ಸಿಎಂ ಯಡಿಯೂರಪ್ಪ ರಾಜ್ಯಪಾಲರಿಗೆ ವಿವರಿಸಿದರು.

ಈ ಸಂದರ್ಭದಲ್ಲಿ ರಾಜ್ಯಪಾಲರು, ರಾಜ್ಯದಲ್ಲಿ ತಂಬಾಕು, ಗುಟ್ಕಾ, ಪಾನ್ ಮಸಾಲಾ ಪ್ಯಾಕೆಟ್ ಗಳಲಿ ಡ್ರಗ್ಸ್ ಮಾರಾಟ ಮಾಡುತ್ತಿರುವ ಪ್ರಕರಣಗಳು ಕಂಡುಬಂದಿದ್ದು, ಇದರಿಂದಾಗಿ ರಾಜ್ಯದಲ್ಲಿನ ಯುವಕರು ಮತ್ತು ವಿದ್ಯಾರ್ಥಿಗಳು ಮಾದಕ ವ್ಯಸನಕ್ಕೆ ತುತ್ತಾಗುತ್ತಿದ್ದು, ಅವರ ಜೀವನಕ್ಕೆ ತೊಂದರೆ ಉಂಟಾಗುತ್ತಿರುವುದರಿಂದ ಈ ಪದಾರ್ಥಗಳ ಮಾರಾಟಕ್ಕೆ ನಿಷೇಧ ಹೇರುವಂತೆ ಮನವಿ ಮಾಡಿದ್ದಾರೆ.

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷ ಕಳೆದಿದೆ. ಸಂಪುಟದಲ್ಲಿ ಆರು ಸಚಿವ ಸ್ಥಾನಗಳು ಖಾಲಿಯಾಗಿಯೇ ಇವೆ. ಈ ಸ್ಥಾನಕ್ಕಾಗಿ ಹಲವು ಸಚಿವರು ಪೈಪೋಟಿ ನಡೆಸಿದ್ದಾರೆ. ಆಗಸ್ಟ್‌ ತಿಂಗಳಲ್ಲಿ ಸಂಪುಟ ವಿಸ್ತರಣೆ ಮಾಡಲು ಸಿಎಂ ಮುಂದಾಗಿದ್ದು, ಹೈಕಮಾಂಡ್‌ ನಾಯಕರ ಒಪ್ಪಿಗೆ ದೊರೆತರೆ ಸಂಪುಟ ವಿಸ್ತರಣೆ ಖಚಿತ ಎನ್ನಲಾಗುತ್ತಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button