*ನಾಳೆ ದೆಹಲಿಯಲ್ಲಿ ʻಜಿರಳೆʼ ಪ್ರತಿಭಟನೆ*: *ಇಂದು ರಾತ್ರಿಯಿಂದಲೇ ಇಂಟರ್‌ನೆಂಟ್ ಸ್ಥಗಿತ*

ಪ್ರಗತಿವಾಹಿನಿ ಸುದ್ದಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಅಕ್ಟೋಬರ್ 10ರಂದು ದೆಹಲಿಯಲ್ಲಿ ಪ್ರತಿಭಟನೆಗೆ ಕರೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಮಧ್ಯ ದೆಹಲಿಯ ಕೆಲವು ಭಾಗಗಳಲ್ಲಿ 24 ಗಂಟೆಗಳ ಕಾಲ ಇಂಟರ್ನೆಟ್ ಸೇವೆ ಸ್ಥಗಿತಗೊಳಿಸಲು ಆದೇಶಿಸಲಾಗಿದೆ.
ಇಂದು ರಾತ್ರಿ 10 ಗಂಟೆಯಿಂದ ನಾಳೆ ರಾತ್ರಿ 10 ಗಂಟೆಯವರೆಗೆ ನವದೆಹಲಿಯ ಜನಪಥ್-ಕರ್ತವ್ಯ ಪಥ್ ಕ್ರಾಸಿಂಗ್‌ನ ನಾಲ್ಕು ಕಿಲೋಮೀಟರ್ ವ್ಯಾಪ್ತಿಯಲ್ಲಿ ಇಂಟರ್ನೆಟ್ ಸೇವೆ ಸ್ಥಗಿತಗೊಳ್ಳಲಿದೆ. ಗೃಹ ಸಚಿವಾಲಯದ ಅನುಮೋದನೆಯೊಂದಿಗೆ ಈ ಆದೇಶ ಹೊರಡಿಸಲಾಗಿದೆ ಎಂದು ವರದಿಯಾಗಿದೆ.
ಆದೇಶವನ್ನು ಜಾರಿಗೊಳಿಸುವಂತೆ ದೆಹಲಿ ಪೊಲೀಸರು ಏರ್‌ಟೆಲ್, ವೊಡಾಫೋನ್ ಐಡಿಯಾ, ಜಿಯೋ ಮತ್ತು ಎಂಟಿಎನ್‌ಎಲ್ ಸೇರಿದಂತೆ ಟೆಲಿಕಾಂ ಕಂಪನಿಗಳಿಗೆ ಸೂಚನೆ ನೀಡಿದ್ದಾರೆ. ಪ್ರತಿಭಟನೆಯ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ.
ಇನ್ನೊಂದೆಡೆ, ಅಕ್ಟೋಬರ್ 10ರಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸೇರಿದಂತೆ ಕೆಲವು ವಿದ್ಯಾರ್ಥಿ ಸಂಘಟನೆಗಳು ನಡೆಸಲು ಉದ್ದೇಶಿಸಿದ್ದ ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನಿರಾಕರಿಸಿದ್ದಾರೆ. ಪ್ರತಿಭಟನೆಗೆ ಅರ್ಜಿ ಸಲ್ಲಿಸುವಲ್ಲಿ ವಿಳಂಬವಾಗಿರುವುದು ಮತ್ತು ಹಿಂದಿನ ಪ್ರತಿಭಟನೆಯಲ್ಲಿ ನಿಯಮ ಉಲ್ಲಂಘನೆಯಾಗಿರುವುದನ್ನು ನಿರ್ಧಾರಕ್ಕೆ ಕಾರಣವಾಗಿ ಉಲ್ಲೇಖಿಸಿದ್ದಾರೆ.
ಈ ಕುರಿತು ಮಾತನಾಡಿದ ನವದೆಹಲಿ ವ್ಯಾಪ್ತಿಯ ಜಂಟಿ ಪೊಲೀಸ್ ಆಯುಕ್ತೆ ನೂಪುರ್ ಪ್ರಸಾದ್, ಪ್ರತಿಭಟನೆಗೆ ಅನುಮತಿ ಕೋರಿ ತಡವಾಗಿ ಅರ್ಜಿ ಸಲ್ಲಿಸಲಾಗಿದೆ ಎಂದು ತಿಳಿಸಿದ್ದಾರೆ. ಹಿಂದಿನ ಪ್ರತಿಭಟನೆಯ ಸಂದರ್ಭದಲ್ಲಿ ನಿಯಮ ಪಾಲನೆಯಾಗದಿರುವುದನ್ನೂ ಪರಿಗಣಿಸಿ ಅನುಮತಿ ನಿರಾಕರಿಸಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ




