*ರಾಜ್ಯದಲ್ಲಿ ಚಳಿ, ಅಲ್ಲಲ್ಲಿ ತುಂತುರು ಮಳೆ: ಹವಾಮಾನ ಇಲಾಖೆ ಸೂಚನೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ರಾಜ್ಯದಲ್ಲಿ ಮುಂದಿನ ಒಂದು ವಾರ ಚಳಿಯ ವಾತಾವರಣ ಮುಂದುವರಿಯಲಿದ್ದು, ಅಲ್ಲಲ್ಲಿ ತುಂತುರು ಮಳೆ ಬೀಳಲಿದೆ ಹಾಗೆಯೇ ಒಣಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರ್ನಾಟಕದ ದಕ್ಷಿಣ ಜಿಲ್ಲೆಗಳಾದ ಮೈಸೂರು, ಹಾಸನ, ಕೊಡಗು, ಚಾಮರಾಜನಗರ, ಕೋಲಾರ, ಬೆಂಗಳೂರು, ಶಿವಮೊಗ್ಗ ಚಿಕ್ಕಮಗಳೂರು, ಬೆಂಗಳೂರು ನಗರ, ತುಮಕೂರು, ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ ಮತ್ತು ವಿಜಯನಗರ, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಲ್ಲಿ ಫೆಬ್ರವರಿ 9ರವರೆಗೆ ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಒಳನಾಡಿನಲ್ಲಿ ಬೆಳಗಾವಿ, ಬೀದರ್, ವಿಜಯಪುರ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಹಾಗೂ ವಿಜಯನಗರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ ಸೇರಿದಂತೆ ಜಿಲ್ಲೆಗಳಲ್ಲಿ ಹಲವಾರು ದಿನಗಳಿಂದ ಒಣಹವೆ ಮುಂದುವರೆಯಲಿದೆ.
ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸ್ಪಷ್ಟ ಆಕಾಶ ಮತ್ತು ಶೀತ ವಾತಾವರಣ ಮುಂದುವರಿಯಲಿದ.
ಫೆಬ್ರವರಿ 10 ರ ಬಳಿಕ ಚಳಿ ಹಾಗೂ ಒಣಹವೆ ಎರಡೂ ಕೂಡ ಕಡಿಮೆಯಾಗಲಿದೆ ಎಂದು ತಜ್ಞರು ಹೇಳಿದ್ದಾರೆ. ಆನಂತರ ಬಿಸಿಲ ಝಳ ಹೆಚ್ಚಾಗಲಿದೆ. ಈ ಬಾರಿ ಅಧಿಕ ಬೇಸಿಗೆ ಇರಲಿದೆ ಎಂದು ಹೇಳಲಾಗಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು ಕನಿಷ್ಠ ತಾಪಮಾನ 16 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 16 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.




