
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮಳೆಯ ಅಬ್ಬರ ತಗ್ಗಿದ್ದು, ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ. ನವೆಂಬರ್ 12 ಮತ್ತು 13ರಂದು ಕರ್ನಾಟಕದ ಯಾವುದೇ ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ಇಲ್ಲ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಆದರೆ, ರಾತ್ರಿ ಮತ್ತು ಮುಂಜಾನೆ ವೇಳೆ ಚಳಿಯ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ.
ಕರಾವಳಿ, ಉತ್ತರ ಒಳನಾಡಿನಲ್ಲಿ ಒಣಹವೆ
ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಮಳೆಯ ಸಾಧ್ಯತೆ ಕಡಿಮೆ ಇದ್ದು, ಒಣಹವೆ ಮುಂದುವರಿಯಲಿದೆ. ಅದೇ ರೀತಿ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಬಾಗಲಕೋಟೆ, ಬೀದರ್, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲೂ ಮಳೆಯ ಲಕ್ಷಣಗಳಿಲ್ಲ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನಲ್ಲೂ ಮಳೆ ವಿರಾಮ
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳಲ್ಲೂ ನವೆಂಬರ್ 12 ಮತ್ತು 13ರಂದು ಒಣಹವೆ ಇರಲಿದೆ.
ವಿಶೇಷವಾಗಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ರಾತ್ರಿ ಹಾಗೂ ಮುಂಜಾನೆ ತಾಪಮಾನ ಇಳಿಕೆಯಾಗಲಿದ್ದು, ಚಳಿಯ ಅನುಭವ ಹೆಚ್ಚಾಗುವ ಸಾಧ್ಯತೆ ಇದೆ.
ಧಾರವಾಡದಲ್ಲಿ 12.2 ಡಿಗ್ರಿ ಕನಿಷ್ಠ ತಾಪಮಾನ ದಾಖಲು
ರಾಜ್ಯದಲ್ಲಿ ಚಳಿಯ ಪ್ರಮಾಣ ನಿಧಾನವಾಗಿ ಏರಿಕೆಯಾಗುತ್ತಿದ್ದು, ಬಯಲು ಪ್ರದೇಶಗಳ ಪೈಕಿ ಧಾರವಾಡದಲ್ಲಿ 12.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲಾಗಿದೆ. ಮುಂಬರುವ ದಿನಗಳಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ರಾತ್ರಿ ತಾಪಮಾನ ಮತ್ತಷ್ಟು ಕುಸಿಯುವ ಸಾಧ್ಯತೆ ಇದ್ದು, ಬೆಳಗಿನ ಜಾವ ಚಳಿಯ ತೀವ್ರತೆ ಹೆಚ್ಚಾಗುವ ನಿರೀಕ್ಷೆಯಿದೆ.


