ಪ್ರಗತಿವಾಹಿನಿ ಸುದ್ದಿ: ರಾಜ್ಯ ಸರಕಾರದಿಂದ ನೇರವಾಗಿ ರೈತರ ಬ್ಯಾಂಕ್ ಖಾತೆಗೆ ಜಮೆ ಮಾಡುವ ಬರ ಪರಿಹಾರ, ವಿವಿಧ ಯೋಜನೆಗಳ ಸಹಾಯಧನ, ಸಾಮಾಜಿಕ ನೆರವು ಯೋಜನೆಯ ಸಹಾಯಧನವನ್ನು ರೈತರ ಒಪ್ಪಿಗೆ ಇಲ್ಲದೆ ಅವರ ಸಾಲದ ಖಾತೆಗೆ ಹಣ ಹೊಂದಾಣಿಕೆ ಮಾಡದಿರುವಂತೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ
ಸಿಎಂ ಸಿದ್ದರಾಮಯ್ಯ ಅವರು ವಿವಿಧ ಇಲಾಖೆಗಳ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಸುದೀರ್ಘ ಸಭೆ ನಡೆಸಿದ ಬಳಿಕ ಈ ತೀರ್ಮಾನ ಕೈಗೊಂಡಿದ್ದಾರೆ. ಭೀಕರ ಬರದಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಬಿಡುಗಡೆಯಾಗುತ್ತಿರುವ ಪರಿಹಾರ ಮೊತ್ತವನ್ನು ಸಾಲದ ಮೊತ್ತಕ್ಕೆ ಜಮೆ ಮಾಡಿಕೊಳ್ಳಬಾರದು ಎಂದು ಬ್ಯಾಂಕ್‌ಗಳಿಗೆ ಸೂಚನೆ ನೀಡಲಾಗಿದೆ.
ರೈತರಿಗೆ ಬಿಡುಗಡೆಯಾದ ಬರಪರಿಹಾರದ ಮೊತ್ತವನ್ನು ಬೆಳೆಸಾಲ ಅಥವಾ ಇತರ ಯಾವುದೇ ವಿಷಯಗಳಿಗೆ ಬ್ಯಾಂಕುಗಳಲ್ಲಿ ಕಡಿತ ಗೊಳಿಸುತ್ತಿರುವ ವಿಷಯವು ಹಲವು ಜಿಲ್ಲೆಗಳ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಗಮನಕ್ಕೆ ಬಂದಿದೆ. ಆದ್ದರಿಂದ 2023-24ನೇ ಸಾಲಿನ ಮುಂಗಾರು ಹಂಗಾಮಿನ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಸರಕಾರದಿಂದ ಬಿಡುಗಡೆಯಾಗಿರುವ ಪರಿಹಾರ ಧನವನ್ನು ಬ್ಯಾಂಕುಗಳು ಬೆಳೆ ಸಾಲಕ್ಕೆ ಜಮಾ ಮಾಡಿಕೊಳ್ಳದಂತೆ ಸೂಚಿಸಲಾಗಿದೆ.
ಈ ಸಂಬಂಧ ಅಧಿಕೃತವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ, ಜಿಲ್ಲೆಯ ಲೀಡ್ ಬ್ಯಾಂಕ್ ವ್ಯವಸ್ಥಾಪಕರಿಗೆ ನಿರ್ದೇಶನ ನೀಡಿದ್ದಾರೆ. ಇದೇ ರೀತಿ ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಮೂಲಕ, ಬ್ಯಾಂಕ್ ಗಳಿಗೆ ಸೂಚನೆ ನೀಡಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ