ಪ್ರಗತಿವಾಹಿನಿ ಸುದ್ದಿ, ಕಾಗವಾಡ – ಕಾಂಗ್ರೆಸ್ 5 ದಶಕಗಳ ಆಳ್ವಿಕೆಯಲ್ಲಿ ದೇಶವನ್ನು ಅಧಃಪತನಕ್ಕೆ ತಳ್ಳಿದೆ. ಆದರೆ ಭಾರತೀಯ ಜನತಾ ಪಕ್ಷ ಕೆಲವೇ ವರ್ಷಗಳಲ್ಲಿ ಅದ್ವಿತೀಯವಾದ ಸಾಧನೆ ಮಾಡಿದೆ ಎಂದು ರಾಜ್ಯಸಭೆ ಸದಸ್ಯ ಡಾ.ಪ್ರಭಾಕರ ಕೋರೆ ಹೇಳಿದ್ದಾರೆ.
ಕಾಗವಾಡ ಮತಕ್ಷೇತ್ರದ ಅಭ್ಯರ್ಥಿ ಶ್ರೀಮಂತ ಪಾಟೀಲ ಪರವಾಗಿ ಶಿರಗುಪ್ಪಿ ಹಾಗೂ ಜುಗೂಳ ಗ್ರಾಮಗಳಲ್ಲಿ ಪ್ರಚಾರ ನಡೆಸಿದ ಕೋರೆ, ಬಡವರ ಕಲ್ಯಾಣಕ್ಕಾಗಿ ಕೇಂದ್ರದ ಬಿಜೆಪಿ ಸರಕಾರ ಕೈಗೊಳ್ಳುತ್ತಿರುವ ಯೋಜನೆಗಳು ಪ್ರಗತಿದಾಯಕವಾಗಿವೆ. ದೇಶದ ಅಭಿವೃದ್ಧಿಗಾಗಿ ಕೆಲವೇ ವರ್ಷಗಳಲ್ಲಿ ಮೌಲಿಕವಾದ ಕೊಡುಗೆಯನ್ನು ನೀಡಿದೆ ಎಂದು ಬಣ್ಣಿಸಿದರು.
ಕಾಂಗ್ರೆಸ್ ಸರ್ಕಾರ 5 ದಶಕಗಳಲ್ಲಿ ಭಾರತದ ಅಭಿವೃದ್ಧಿಯನ್ನು ಅಧಃಪತನಕ್ಕೆ ತಳ್ಳಿತು. ಆದರೆ ಕೇಂದ್ರದ ಮೋದಿ ಸರ್ಕಾರ ದೇಶದ ಉದ್ದಗಲಕ್ಕೂ ಹೊಸ ಸಂಚಲನವನ್ನು ಉಂಟು ಮಾಡಿ ಭಾರತ ಜಾಗತಿಕವಾಗಿ ಪ್ರಕಾಶಿಸುವಂತೆ ಮಾಡಿದೆ. ಮುಂದಿನ ದಿನಗಳಲ್ಲಿ ಭಾರತ ಜಗತ್ತಿನಲ್ಲೇ ಮುಂಚೂಣಿಯಲ್ಲಿ ನಿಂತು ವಿಶ್ವಗುರುವಾಗಿ ಹೊರಹೊಮ್ಮಲಿದೆ ಎಂದು ಪ್ರಭಾಕರ ಕೋರೆ ಹೇಳಿದರು.
ರಾಜ್ಯದಲ್ಲಿ ಬಿ.ಎಸ್.ಯಡಿಯೂರಪ್ಪನವರ ಸರಕಾರ ಸಾಕಷ್ಟು ಅಭಿವೃದ್ಧಿ ಕಾರ್ಯಕ್ರಮಗಳನ್ನು ಮಾಡುತ್ತಿದೆ. ರಾಜ್ಯದ ಸಮಗ್ರ ಅಭಿವೃದ್ಧಿಗೆ, ರೈತರು, ಬಡವರಿಗಾಗಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಹಾಗಾಗಿ ಬಿಜೆಪಿ ಅಭ್ಯರ್ಥಿಗೆ ಮತ ನೀಡುವ ಮೂಲಕ ಕೇಂದ್ರ ಹಾಗೂ ರಾಜ್ಯ ಸರಕಾರಕ್ಕೆ ಇನ್ನಷ್ಟು ಬಲ ತುಂಬಬೇಕು ಎಂದು ಅವರು ವಿನಂತಿಸಿದರು.
ಈ ಸಂದರ್ಭದಲ್ಲಿ ಸಚಿವರಾದ ಜಗದೀಶ ಶೆಟ್ಟರ್, ಸಿ.ಸಿ.ಪಾಟೀಲ, ಶಶಿಕಲಾ ಜೊಲ್ಲೆ, ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ, ವಿಧಾನ ಪರಿಷತ್ತಿನ ಮುಖ್ಯ ಸಚೇತಕರಾದ ಮಹಾಂತೇಶ ಕವಟಗಿಮಠ, ಮಾಜಿ ಶಾಸಕ ಸಂಜಯ ಪಾಟೀಲರು, ಬಿಜೆಪಿಯ ರಾಜ್ಯ ಪ್ರಧಾನಕಾರ್ಯದರ್ಶಿ ಮಹೇಶ ಟೆಂಗಿನಕಾಯಿ ಮೊದಲಾದವರು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ