* *ಜನರ ಆಶೋತ್ತರಗಳಿಗೆ ಸ್ಪಂದಿಸುವ ಪಕ್ಷ ಕಾಂಗ್ರೆಸ್* *ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್*
* *ಬೆಳಗಾವಿ ದಕ್ಷಿಣ ಕ್ಷೇತ್ರದ ಕಾರ್ಯಕರ್ತರ ಸಭೆ*
ಪ್ರಗತಿವಾಹಿನಿ ಸುದ್ದಿ, *ಬೆಳಗಾವಿ* : ನಮ್ಮ ಸರ್ಕಾರ ಕೊಟ್ಟ ಭಾಷೆಯನ್ನು ಉಳಿಸಿಕೊಂಡಿದೆ. ಚುನಾವಣೆಗೂ ಮುನ್ನ ಘೋಷಿಸಿದ್ದ 5 ಗ್ಯಾರಂಟಿ ಯೋಜನೆಗಳನ್ನು ಮನೆ ಮನೆಗೆ ತಲುಪಿಸುವ ಕೆಲಸ ಮಾಡುತ್ತಿದ್ದೇವೆ. ತನ್ಮೂಲಕ ಕಾರ್ಯಕರ್ತರಿಗೆ ಶಕ್ತಿ ತುಂಬಿದ್ದೇವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.
ಬೆಳಗಾವಿ ದಕ್ಷಿಣ ಕ್ಷೇತ್ರದಲ್ಲಿ ಮುಖಂಡರ ಸಭೆಯಲ್ಲಿ ಮಾತನಾಡಿದ ಸಚಿವರು, ಬೆಳಗಾವಿ ದಕ್ಷಿಣದಲ್ಲಿ ಕಾಂಗ್ರೆಸ್ ಶಾಸಕರು ಇಲ್ಲದಿದ್ದರೂ ಯಾವುದೇ ಸ್ವಾರ್ಥ ರಾಜಕಾರಣ ಮಾಡಿಲ್ಲ. ಕಾಂಗ್ರೆಸ್ ಪಕ್ಷ ಎಂದರೆ ಬದ್ಧತೆ, ಬದ್ಧತೆಗೆ ಮತ್ತೊಂದು ಹೆಸರೇ ಕಾಂಗ್ರೆಸ್ ಪಕ್ಷ. ಬಸವಣ್ಣನವರ ತತ್ವ, ಬಾಬಾ ಸಾಹೇಬ್ ಅಂಬೇಡ್ಕರ್ ಬರೆದಿರುವ ಸಂವಿಧಾನದ ಆಶಯದಂತೆ ಸರ್ಕಾರ ಕಾರ್ಯನಿರ್ವಹಿಸುತ್ತಿದೆ ಎಂದರು.
ಕಳೆದ ವಿಧಾನಸಭಾ ಚುನಾವಣೆಗೂ ಮುನ್ನ ನಾವು ಕೊಟ್ಟ ಮಾತು, ಕೊಟ್ಟ ಭರವಸೆಗಳನ್ನು ಜಾರಿಗೆ ತಂದಿದ್ದೇವೆ. ಕರ್ನಾಟಕ ಸರ್ಕಾರ ಬಂದು ಒಂಭತ್ತು ತಿಂಗಳು ಕಳೀತು. ಇದೀಗ ಮತ್ತೆ ಲೋಕಸಭಾ ಚುನಾವಣೆ ಬಂದಿದೆ. ಈ ಚುನಾವಣೆಯಲ್ಲಿ ಬೂತ್ ಮಟ್ಟದ ಕಾರ್ಯಕರ್ತರ ಜವಾಬ್ದಾರಿ ಹೆಚ್ಚಿದೆ ಎಂದು ಹೇಳಿದರು.
ಈ ಭಾಗದಲ್ಲಿ ಪಕ್ಷ ಸಂಘಟಿಸುವ ಸಲುವಾಗಿ ಸತೀಶ್ ಜಾರಕಿಹೊಳಿ ಅವರು ಬೆಳಗಾವಿ ದಕ್ಷಿಣ ಕ್ಷೇತ್ರದ ಬಗ್ಗೆ ಸಾಕಷ್ಟು ಕಾಳಜಿ ತೆಗೆದುಕೊಂಡಿದ್ದಾರೆ ಎಂದರು.
ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ, ಬೆಳಗಾವಿ ಉತ್ತರ ಕ್ಷೇತ್ರದ ಶಾಸಕ ರಾಜು ಸೇಠ್, ಯುವ ಮುಖಂಡರಾದ ಮೃಣಾಲ್ ಹೆಬ್ಬಾಳ್ಕರ್, ಜಿಲ್ಲಾಧ್ಯಕ್ಷರಾದ ವಿನಯ್ ನಾವಲಗಟ್ಟಿ, ಮಾಜಿ ಬುಡಾ ಅಧ್ಯಕ್ಷರಾದ ಯುವರಾಜ್ ಕದಂ, ಕಾರ್ಯದರ್ಶಿ ಪ್ರದೀಪ್, ಪರಶುರಾಮ್ ಢಗೆ, ಕಿರಣ್ ಪಾಟೀಲ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಕಲ್ಪನಾ, ರಮೇಶ್ ಸೊಂಟಕ್ಕಿ ಸೇರಿದಂತೆ ಅನೇಕ ಮುಖಂಡರು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ