
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ‘ಪ್ರಜಾಪ್ರಭುತ್ವ ಉಳಿಸಿ, ಸಂವಿಧಾನ ರಕ್ಷಿಸಿ’ ಎಂಬ ಹೆಸರಿನಲ್ಲಿ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದ್ದು, ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಕಾಂಗ್ರೆಸ್ ನಾಯಕರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಕೆಪಿಸಿಸಿ ಕಚೇರಿಯಿಂದ ರಾಜಭವನದತ್ತ ಹೊರಟಿದ್ದ ಕಾಂಗ್ರೆಸ್ ನಾಯಕರನ್ನು ದಾರಿ ಮಧ್ಯೆಯೇ ಪೊಲೀಸರು ತಡೆದರು. ಅಲ್ಲಿಯೇ ಕುಳಿತು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೇರಿದಂತೆ ಹಲವು ನಾಯಕರು ಪ್ರತಿಭಟನೆ ನಡೆಸಿ, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಈ ವೇಳೆ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ನಾಯಕರನ್ನು ಪೊಲೀಸರು ವಶಕ್ಕೆ ಪಡೆದು, ಬಿಎಂಟಿಸಿ ಬಸ್ನಲ್ಲಿ ಕರೆದುಕೊಂಡು ಹೋಗಿದ್ದಾರೆ.
ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೇಲೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ನಡೆಸುತ್ತಿರುವ ದಾಳಿಯನ್ನು ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ ನಡೆಸಿತು. ಕರ್ನಾಟಕದ ಬಳಿಕ ರಾಜಸ್ಥಾನ, ಮಧ್ಯಪ್ರದೇಶದಲ್ಲೂ ಬಿಜೆಪಿ ಆಪರೇಷನ್ ಕಮಲಕ್ಕೆ ಮುಂದಾಗಿರುವುದನ್ನು ಖಂಡಿಸಿ ಈ ಪ್ರತಿಭಟನೆ ನಡೆಸಲಾಯಿತು. ಇಂದು ರಾಜಭವನದ ಎದುರು ಪ್ರತಿಭಟನೆ ನಡೆಸಲು ಕಾಂಗ್ರೆಸ್ ನಾಯಕರು ನಿರ್ಧರಿಸಿದ್ದರು. ಆದರೆ, ಪೊಲೀಸರು ಅದಕ್ಕೆ ಅವಕಾಶ ನೀಡಲಿಲ್ಲ.