
ಕಾಂಗ್ರೆಸ್ನಿಂದ ಕೃಪಾ ಆಳ್ವ ಆರು ವರ್ಷ ಉಚ್ಚಾಟನೆ
ಪಕ್ಷ ವಿರೋಧಿ ಚಟುವಟಿಕೆ ಆರೋಪ; ತಕ್ಷಣದಿಂದಲೇ ಜಾರಿಗೆ ಬರುವಂತೆ ಆದೇಶ
ಪ್ರಗತಿವಾಹಿನಿ ಸುದ್ದಿ/
ಬೆಂಗಳೂರು: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕಿ ಕೃಪಾ ಆಳ್ವ ಅವರನ್ನು ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಚಾಟನೆ ಮಾಡಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಆದೇಶ ಹೊರಡಿಸಿದೆ.
ಕೆಪಿಸಿಸಿ ಉಪಾಧ್ಯಕ್ಷ ಎಂ. ನಾರಾಯಣಸ್ವಾಮಿ ಅವರು 2026ರ ಅಕ್ಟೋಬರ್ 27ರಂದು ಈ ಉಚ್ಚಾಟನೆ ಆದೇಶ ಹೊರಡಿಸಿದ್ದಾರೆ.
ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಮುಖಂಡರನ್ನು ಗುರಿಯಾಗಿಸಿಕೊಂಡು ನಡೆದಿರುವ ಸ್ಟಿಂಗ್ ಆಪರೇಷನ್ಗೆ ಸಂಬಂಧಿಸಿದ ಪ್ರಕರಣದ ಕುರಿತು ಮಾಧ್ಯಮಗಳಲ್ಲಿ ಪ್ರಕಟವಾದ ವರದಿಗಳ ಹಿನ್ನೆಲೆಯಲ್ಲಿ ಕೃಪಾ ಆಳ್ವ ಅವರಿಗೆ ಕಾರಣ ಕೇಳಿ ನೋಟಿಸ್ ನೀಡಲಾಗಿತ್ತು ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.
ಕೆಪಿಸಿಸಿ ವತಿಯಿಂದ ನೀಡಲಾಗಿದ್ದ ನೋಟಿಸ್ಗೆ ಕೃಪಾ ಆಳ್ವ ಅವರು ಇದುವರೆಗೆ ಯಾವುದೇ ರೀತಿಯ ಉತ್ತರ ಅಥವಾ ಸಮಜಾಯಿಷಿ ನೀಡಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಸಂಬಂಧಿತ ಪ್ರಕರಣದಲ್ಲಿ ಅವರ ಹೆಸರು ಕೇಳಿಬಂದಿರುವುದು ಹಾಗೂ ಅವರ ನಡವಳಿಕೆ ಪಕ್ಷ ವಿರೋಧಿ ಚಟುವಟಿಕೆಗಳಿಗೆ ಸಂಬಂಧಿಸಿದೆ ಎಂಬ ಕಾರಣವನ್ನು ಮುಂದಿಟ್ಟು, ಕೆಪಿಸಿಸಿ ಅಧ್ಯಕ್ಷರ ಸೂಚನೆಯ ಮೇರೆಗೆ ತಕ್ಷಣದಿಂದ ಜಾರಿಗೆ ಬರುವಂತೆ ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಲಾಗಿದೆ ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.
ಈ ಕುರಿತು ಕಾಂಗ್ರೆಸ್ ಪಕ್ಷದ ಅಧಿಕೃತ ಆದೇಶ ಹೊರಬಿದ್ದಿದ್ದು, ರಾಜ್ಯ ರಾಜಕೀಯ ವಲಯದಲ್ಲಿ ಬೆಳವಣಿಗೆ ಕುತೂಹಲ ಮೂಡಿಸಿದೆ.




