ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕಾಂಗ್ರೆಸ್ ಪಕ್ಷಕ್ಕೆ ಪೂರ್ಣ ಬಹುಮತ ಸಿಕ್ಕಿರುವ ಹಿನ್ನೆಲೆಯಲ್ಲಿ ಸರ್ಕಾರ ರಚನೆಗೆ ಸಿದ್ಧತೆಗಳು ನಡೆದಿವೆ. ಇಂದು ಸಂಜೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ.
ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಸಂಜೆ 5:30ಕ್ಕೆ ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು, ಸಭೆಯಲ್ಲಿ ಮುಖ್ಯಮಂತ್ರಿ ಅಭ್ಯರ್ಥಿ ಆಯ್ಕೆಯಾಗಲಿದ್ದಾರೆ. ಸಭೆಯಲ್ಲಿ ಸಿಎಂ ಆಯ್ಕೆಯಾಗಲಿದೆ ಎಂದು ಈಗಾಗಲೇ ಹೈಕಮಾಂಡ್ ತಿಳಿಸಿರುವ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ ಶಾಸಕರ ವಿಶ್ವಾಸ ಗಳಿಸಲು ಕಸರತ್ತು ನಡೆಸಿದ್ದಾರೆ.
ಮುಖ್ಯಮಂತ್ರಿ ಹುದ್ದೆಗಾಗಿ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ನಡುವೆ ನೇರ ಪೈಪೋಟಿ ನಡೆದಿದೆ. ಒಂದೆಡೆ ಸಿದ್ದರಾಮಯ್ಯ ರಹಸ್ಯ ಸಭೆ ನಡೆಸಿ ತಂತ್ರಗಾರಿಕೆ ನಡೆಸಿದ್ದಾರೆ. ಇನ್ನೊಂದೆಡೆ ಡಿ.ಕೆ.ಶಿವಕುಮಾರ್ ಸಿಎಂ ಆಗಲಿ ಎಂಬ ನಿಟ್ಟಿನಲ್ಲಿ ಒಕ್ಕಲಿಗ ಮಠಾಧೀಶರು ಸಭೆ ನಡೆಸಿದ್ದಾರೆ. ಮತ್ತೊಂದೆಡೆ ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್ ಅವರನ್ನು ಸಿಎಂ ಮಾಡಬೇಕು ಎಂದು ಅವರ ಬೆಂಬಲಿಗರು ಬೇಡಿಕೆ ಇಟ್ಟಿದ್ದಾರೆ.
ಈ ಎಲ್ಲಾ ಬೆಳವಣಿಗೆ ನಡುವೆ ಬೆಂಗಳೂರಿನ ಕೆಲ ರಸ್ತೆಗಳಲ್ಲಿ ಸಿದರಾಮಯ್ಯ ಮತ್ತೆ ಸಿಎಂ ಆಗಬೇಕು ಎಂದು ಬೆಂಬಲಿಗರು ಬೃಹತ್ ಬ್ಯಾನರ್, ಕಟೌಟ್ ಅಳವಡಿಸಿದ್ದರೆ ಅದಕ್ಕೆ ಪ್ರತಿಯಾಗಿ ಇನ್ನೊಂದೆಡೆ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಬೇಕು ಎಂದು ಬೆಂಬಲಿಗರು ಬ್ಯಾನರ್ ಅಳವಡಿಸಿದ್ದಾರೆ. ಒಟ್ಟಾರೆ ಶಾಸಕಾಂಗ ಸಭೆಯಲ್ಲಿ ಸಿಎಂ ಅಭ್ಯರ್ಥಿ ಯಾರಾಗಲಿದ್ದಾರೆ ಎಂಬುದೇ ಸಧ್ಯದ ಕುತೂಹಲ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ