ಪ್ರಗತಿವಾಹಿನಿ ಸುದ್ದಿ: ರಾಜ್ಯದ ವಿದ್ಯುತ್ ಗ್ರಾಹಕರಿಗೆ ದರ ಏರಿಕೆಯ ಬಿಸಿ ತಟ್ಟುವ ಸಾಧ್ಯತೆಯಿದೆ. ಮುಂಬರುವ ಅಕ್ಟೋಬರ್–ನವೆಂಬರ್ ಬಿಲ್ಲಿಂಗ್ ಅವಧಿಯಲ್ಲಿ ಪ್ರತಿ ಯೂನಿಟ್ ವಿದ್ಯುತ್ ದರವನ್ನು 40ರಿಂದ 50 ಪೈಸೆಯವರೆಗೆ ಹೆಚ್ಚಿಸುವ ಸಾಧ್ಯತೆ ಇದೆ.
ರಾಜ್ಯದಲ್ಲಿ ವಿದ್ಯುತ್ ಬೇಡಿಕೆ ಗಣನೀಯವಾಗಿ ಏರಿಕೆಯಾಗಿದ್ದು, ಅಗತ್ಯಕ್ಕೆ ತಕ್ಕಷ್ಟು ವಿದ್ಯುತ್ ಪೂರೈಸಲು ಹೊರರಾಜ್ಯಗಳು ಹಾಗೂ ಮುಕ್ತ ಮಾರುಕಟ್ಟೆಯಿಂದ ಹೆಚ್ಚಿನ ಬೆಲೆಗೆ ವಿದ್ಯುತ್ ಖರೀದಿಸಲಾಗಿದೆ. ಇದರಿಂದ ಉಂಟಾದ ಹೆಚ್ಚುವರಿ ವೆಚ್ಚವನ್ನು ಸರಿದೂಗಿಸಲು ದರ ಪರಿಷ್ಕರಣೆಗೆ ಮುಂದಾಗಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಳೆದ ನೈಋತ್ಯ ಮುಂಗಾರು ಅವಧಿಯಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿರುವುದು ಹಾಗೂ ದಕ್ಷಿಣ ಭಾರತದಾದ್ಯಂತ ತೀವ್ರ ಬಿಸಿಲು ಆವರಿಸಿದ್ದರಿಂದ ವಿದ್ಯುತ್ ಬೇಡಿಕೆ ಹೆಚ್ಚಾಗಿತ್ತು. ಇದರ ಪರಿಣಾಮವಾಗಿ ಸೆಪ್ಟೆಂಬರ್ನಲ್ಲಿ ರಾಜ್ಯದ ವಿದ್ಯುತ್ ಬೇಡಿಕೆ ದಾಖಲೆಯ 20,000 ಮೆಗಾವ್ಯಾಟ್ಗೆ ತಲುಪಿತ್ತು. ಈ ಬೇಡಿಕೆಯನ್ನು ನಿಭಾಯಿಸಲು ದುಬಾರಿ ದರದಲ್ಲಿ ವಿದ್ಯುತ್ ಖರೀದಿಸಬೇಕಾದ ಅನಿವಾರ್ಯತೆ ಎದುರಾಗಿತ್ತು.
ಈ ಹೆಚ್ಚುವರಿ ವೆಚ್ಚವನ್ನು ಸರಿದೂಗಿಸಲು ‘ಇಂಧನ ಮತ್ತು ವಿದ್ಯುತ್ ಖರೀದಿ ವೆಚ್ಚ ಹೊಂದಾಣಿಕೆ’ ನಿಯಮದಡಿ ದರ ಹೆಚ್ಚಳದ ಪ್ರಸ್ತಾವನೆ ರೂಪಿಸಲಾಗಿದೆ. ಆದರೆ, ಈ ಪರಿಷ್ಕರಣೆ ಜಾರಿಯಾಗಲು ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ ಅಂತಿಮ ಅನುಮೋದನೆ ಅಗತ್ಯವಿದೆ.
ಇನ್ನು, ಸರ್ಕಾರದ ಗೃಹ ಜ್ಯೋತಿ ಯೋಜನೆಯಡಿ ನೋಂದಾಯಿಸಿಕೊಂಡು ನಿಗದಿತ ಮಿತಿಯೊಳಗೆ ವಿದ್ಯುತ್ ಬಳಸುವ ಗ್ರಾಹಕರಿಗೆ ಈ ದರ ಏರಿಕೆಯ ಪರಿಣಾಮ ಬೀರುವುದಿಲ್ಲ ಎಂದು ತಿಳಿಸಲಾಗಿದೆ. ಯೋಜನೆಯ ವ್ಯಾಪ್ತಿಗೆ ಬಾರದ ಗ್ರಾಹಕರು, ಉಚಿತ ಮಿತಿಗಿಂತ ಹೆಚ್ಚಿನ ವಿದ್ಯುತ್ ಬಳಸುವವರು ಹಾಗೂ ವಾಣಿಜ್ಯ ಮತ್ತು ಕೈಗಾರಿಕಾ ಗ್ರಾಹಕರು ಹೆಚ್ಚುವರಿ ಶುಲ್ಕ ಪಾವತಿಸಬೇಕಾಗುವ ಸಾಧ್ಯತೆಯಿದೆ.
ಆದರೆ, ಪ್ರತಿ ಯೂನಿಟ್ಗೆ 40ರಿಂದ 50 ಪೈಸೆ ದರ ಏರಿಕೆ ಇನ್ನೂ ಅಂತಿಮವಾಗಿಲ್ಲ. ವಿದ್ಯುತ್ ನಿಯಂತ್ರಣ ಆಯೋಗದ ಅನುಮೋದನೆ ಬಳಿಕವಷ್ಟೇ ಪರಿಷ್ಕೃತ ದರದ ಕುರಿತು ಸ್ಪಷ್ಟ ಚಿತ್ರಣ ದೊರೆಯಲಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ




