ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ನೂತನ ಕಚೇರಿಯ ಲಾಂಛನ ಮತ್ತು ಜಾಲತಾಣವನ್ನು ಉದ್ಘಾಟನೆ ಮಾಡಿದರು.
ಯಾವುದೇ ಒಂದು ಸಮುದಾಯವನ್ನು ಸಾರಾಸಗಟಾಗಿ ಮುಂದುವರೆದ ಸಮುದಾಯ ಎಂದು ಹೇಳಲು ಸಾಧ್ಯವಿಲ್ಲ. ಎಲ್ಲ ಸಮುದಾಯಗಳಲ್ಲೂ ಮುಂದುವರೆದವರು ಮತ್ತು ಹಿಂದುಳಿದವರು ಇರುತ್ತಾರೆ ಎಂದು ಯಡಿಯೂರಪ್ಪ ಈ ಸಂದರ್ಭದಲ್ಲಿ ಹೇಳಿದರು.
ಪಾರಂಪರಿಕವಾಗಿ ಬ್ರಾಹ್ಮಣ ಸಮುದಾಯವನ್ನು ಮುಂದುವರೆದ ಸಮುದಾಯ ಎಂದು ಗುರುತಿಸಿದ್ದರೂ, ಆರ್ಥಿಕವಾಗಿ ಅಶಕ್ತರಾಗಿರುವ ಹಲವಾರು ಮಂದಿ ಈ ಸಮುದಾಯದಲ್ಲಿದ್ದಾರೆ. ಅಂತಹವರ ಅಭ್ಯುದಯಕ್ಕಾಗಿ ಬ್ರಾಹ್ಮಣರ ಅಭಿವೃದ್ಧಿ ಮಂಡಳಿಯನ್ನು ಸ್ಥಾಪಿಸಲಾಯಿತು ಎಂದು ಅವರು ಹೇಳಿದರು.
ದೇಶದ ಇತಿಹಾಸದಲ್ಲಿ ಬ್ರಾಹ್ಮಣ ಸಮುದಾಯದವರ ಕೊಡುಗೆ ಉಲ್ಲೇಖಾರ್ಹವಾದುದು. ವಿಶೇಷವಾಗಿ ಶಿಕ್ಷಣ ಹಾಗೂ ಸಾಂಸ್ಕೃತಿಕ ಪರಂಪರೆಯ ರಕ್ಷಣೆಯಲ್ಲಿ ಈ ಸಮುದಾಯದ ಸಾಧನೆ ಅದ್ವಿತೀಯವಾದುದು. ಶ್ರೀ ಶಂಕರಾಚಾರ್ಯರು, ಶ್ರೀ ರಾಮಾನುಜಾಚಾರ್ಯರು, ಶ್ರೀ ಮಧ್ವಾಚಾರ್ಯರಂತಹ ಗುರುಶ್ರೇಷ್ಠರ ತತ್ವ ಹಾಗೂ ಆದರ್ಶಗಳ ಹಾದಿಯಲ್ಲಿ ನಡೆದು ಸಮಾಜ ಒಳಿತನ್ನು ಕಂಡಿದೆ. ವೇದೋಪನಿಷತ್ತುಗಳನ್ನು ಅಭ್ಯಸಿಸುವ ಮೂಲಕ ಆಧ್ಯಾತ್ಮಿಕತೆಯನ್ನು ಮನುಕುಲಕ್ಕೆ ವಿಪ್ರ ಸಮಾಜ ಭೋದಿಸುತ್ತಾ ಬಂದಿದೆ. ಬ್ರಾಹ್ಮಣ ಸಮುದಾಯವು ಸಾವಿರಾರು ವರ್ಷಗಳ ಇತಿಹಾಸ ಹಾಗೂ ಪರಂಪರೆಯನ್ನು ಹೊಂದಿದ್ದು, ರಾಷ್ಟ್ರ ನಿರ್ಮಾಣದಲ್ಲಿ ಅಪೂರ್ವ ಕೊಡುಗೆ ನೀಡಿದೆ ಎಂದು ಪ್ರಶಂಸಿಸಿದರು.
ಬ್ರಾಹ್ಮಣ ಸಮುದಾಯ ಹಣ, ಆಸ್ತಿ, ಸಂಪತ್ತಿಗಿಂತ ಶಿಕ್ಷಣಕ್ಕೆ ಪ್ರಾಮುಖ್ಯತೆ ನೀಡುವ ಮೂಲಕ ಸಂಸ್ಕಾರಯುತ ಸಮಾಜದ ನಿರ್ಮಾಣಕ್ಕೆ ಶ್ರಮಿಸುತ್ತಿದೆ. ಅಶಕ್ತರಾದ ಬ್ರಾಹ್ಮಣರು ಆರ್ಥಿಕವಾಗಿ ಸಶಕ್ತರಾಗಲು ಮಂಡಳಿಯ ವತಿಯಿಂದ ಅನೇಕ ವಿಭಿನ್ನ ಯೋಜನೆಗಳನ್ನು ಹಮ್ಮಿಕೊಂಡಿರುವುದು ಶ್ಲಾಘನೀಯ. ಶಿಕ್ಷಣ, ಕೌಶಲ್ಯಾಭಿವೃದ್ಧಿ, ಸ್ವಯಂ ಉದ್ಯೋಗ ಮತ್ತು ಮೂಲ ಸೌಕರ್ಯಗಳನ್ನು ಒದಗಿಸಿ ಅವರ ಜೀವನ ಮಟ್ಟವನ್ನು ಸುಧಾರಿಸಲು ಯೋಜನೆಗಳು ಸಹಕಾರಿಯಾಗಲಿದೆ ಎಂದು ಯಡಿಯೂರಪ್ಪ ಹೇಳಿದರು.
ವಿದ್ಯಾರ್ಥಿವೇತನ, ಪ್ರತಿಭಾ ಪುರಸ್ಕಾರ, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ತರಬೇತಿ, ವಿದ್ಯಾರ್ಥಿಗಳಿಗೆ ವಸತಿ ನಿಲಯದ ವ್ಯವಸ್ಥೆ ಕಲ್ಪಿಸಲಾಗಿದೆ. ಅನಾಥ, ನಿರಾಶ್ರಿತ ಅಂಗವಿಕಲ / ವಿಧವೆ ಮಹಿಳೆಯರಿಗೆ, ಹಿರಿಯ ನಾಗರಿಕರಿಗೆ ಮಾಸಿಕ ಪಿಂಚಣಿ, ವೃದ್ಧಾಶ್ರಮ, ವೈದ್ಯಕೀಯ ತಪಾಸಣೆ ಹಾಗೂ ವೈದ್ಯಕೀಯ ವೆಚ್ಚ ಮರುಪಾವತಿ ಸೌಲಭ್ಯಗಳನ್ನು ಒದಗಿಸುವ ಸದುದ್ದೇಶ ಸ್ವಾಗತಾರ್ಹ. ಸಮುದಾಯದವರಿಗಾಗಿ ಸಾಮೂಹಿಕ ವಿವಾಹ, ಉಪನಯನ ಆಯೋಜನೆ ಸೇರಿದಂತೆ ಯುವ ಪೀಳಿಗೆಯ ಸಂಘಟನೆಗೆ ಅಭಿವೃದ್ಧಿ ಉತ್ಸವಗಳನ್ನು ಆಯೋಜಿಸುವುದು ಇತ್ಯಾದಿ ಪ್ರಶಂಸಾರ್ಹ ಎಂದರು.
ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡುತ್ತಿರುವ ಯುವಕ-ಯುವತಿಯರಿಗೆ ಪ್ರೋತ್ಸಾಹ ಹಾಗೂ ಸಹಾಯಧನ ನೀಡುವ ಯೋಜನೆಗಳಿವೆ. ಈ ಎಲ್ಲ ಯೋಜನೆಗಳು ಸಮುದಾಯದವರ ಉನ್ನತಿಗಾಗಿ ಹಮ್ಮಿಕೊಂಡಿದ್ದು, ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು. ಕರ್ನಾಟಕದಲ್ಲಿ ಬ್ರಾಹ್ಮಣರ ಜನಸಂಖ್ಯೆ ಅಂದಾಜು ಶೇಕಡಾ 3 ರಷ್ಟಿದ್ದು, ಬ್ರಾಹ್ಮಣ ಸಮುದಾಯದ ಸಮಗ್ರ ಶ್ರೇಯೋಭಿವೃದ್ಧಿಗಾಗಿ ಸರ್ಕಾರ ಸಂಪೂರ್ಣ ಸಹಕಾರ ನೀಡಲಿದೆ ಎಂದು ಭರವಸೆ ನೀಡಿದರು.
ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾದ ಹಳೇಬೀಡು ಶ್ಯಾಮಣ್ಣ ಸಚ್ಚಿದಾನಂದ ಮೂರ್ತಿ ಅವರ ನೇತೃತದಲ್ಲಿ ಸಮುದಾಯ ಸರ್ವತೋಮುಖ ಅಭಿವೃದ್ಧಿ ಹೊಂದಲಿದೆ ಎಂದು ಭಾವಿಸಿದ್ದೇನೆ. ಮಂಡಳಿಯ ನೂತನ ಕಚೇರಿ ಹಾಗೂ ಜಾಲತಾಣ ಬ್ರಾಹ್ಮಣ ಸಮುದಾಯಕ್ಕೆ ಉಪಯುಕ್ತವಾಗಲಿ ಎಂದು ಹಾರೈಸುತ್ತೇನೆ ಎಂದರು.
ಈ ಸಂದರ್ಭದಲ್ಲಿ ಮಂಡಳಿಯ ಅಧ್ಯಕ್ಷರಾದ ಸಚ್ಚಿದಾನಂದಮೂರ್ತಿ, ಸಚಿವರಾದ ಆರ್ ಅಶೋಕ್. ರಮೇಶ್ ಜಾರಕಿಹೊಳಿ, ಅಶ್ವಥ್ ನಾರಾಯಣ್, ಸಂಸದರಾದ ತೇಜಸ್ವಿ ಸೂರ್ಯ, ರಾಜಕೀಯ ಕಾರ್ಯದರ್ಶಿಗಳಾದ ವಿಶ್ವನಾಥ್, ಶಂಕರ್ ಗೌಡ ಪಾಟೀಲ್, ಶಾಸಕರಾದ ರಾಜು ಗೌಡ, ರಾಮದಾಸ್, ರವಿಸುಬ್ರಮಣ್ಯ, ಅರ್.ವಿ ದೇಶಪಾಂಡೆ, ಮುಖಂಡರಾದ ಎಂಟಿಬಿ ನಾಗರಾಜ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ