ಪ್ರಗತಿವಾಹಿನಿ ಸುದ್ದಿ, ನವದೆಹಲಿ: ಎಲ್ಲ ಸಹಕಾರಿ ಬ್ಯಾಂಕುಗಳನ್ನು ಭಾರತೀಯ ರಿಸರ್ವ್ ಬ್ಯಾಂಕ್ ವ್ಯಾಪ್ತಿಗೆ ತರಲು ಕೇಂದ್ರ ಸರ್ಕಾರ ನಿರ್ಧರಿಸಿದೆ.
ಬುಧವಾರ ನಡೆದ ಸಚಿವ ಸಂಪುಟ ಸಭೆ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಪ್ರಕಾಶ್ ಜಾವಡೇಕರ್ ಈ ವಿಷಯ ತಿಳಿಸಿದ್ದಾರೆ.
ವಾಣಿಜ್ಯ ಬ್ಯಾಂಕುಗಳಿಗೆ ಅನ್ವಯವಾಗುವ ಆರ್‌ಬಿಐ ಮೇಲ್ವಿಚಾರಣಾ ಪ್ರಕ್ರಿಯೆಯಡಿ ನಗರ ಸಹಕಾರಿ ಬ್ಯಾಂಕುಗಳು ಮತ್ತು ಬಹು-ರಾಜ್ಯ ಸಹಕಾರಿ ಬ್ಯಾಂಕುಗಳನ್ನು ತರಲಾಗುವುದು ಎಂದು ಜಾವಡೇಕರ್ ಹೇಳಿದರು.
ಸುಮಾರು 1,482 ನಗರ ಸಹಕಾರಿ ಬ್ಯಾಂಕುಗಳು ಮತ್ತು 58 ಬಹು-ರಾಜ್ಯ ಸಹಕಾರಿ ಬ್ಯಾಂಕುಗಳು ಸುಮಾರು 8.6 ಕೋಟಿ ಠೇವಣಿದಾರರನ್ನು ಹೊಂದಿದೆ ಎಂದು ಅವರು ತಿಳಿಸಿದರು.
ಪಂಜಾಬ್ ಮತ್ತು ಮಹಾರಾಷ್ಟ್ರ ಸಹಕಾರಿ (ಪಿಎಮ್‌ಸಿ) ಬ್ಯಾಂಕ್ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ, 1,540 ಸಹಕಾರಿ ಬ್ಯಾಂಕುಗಳನ್ನು ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ನಿಯಂತ್ರಣಕ್ಕೆ ತರಲು ಬ್ಯಾಂಕಿಂಗ್ ನಿಯಂತ್ರಣ ಕಾಯ್ದೆಗೆ ತಿದ್ದುಪಡಿ ತರಲು ಕೇಂದ್ರ ಸಚಿವ ಸಂಪುಟ ಫೆಬ್ರವರಿಯಲ್ಲಿ ಅನುಮೋದನೆ ನೀಡಿತ್ತು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ