*ಮಹಿಳೆಯರ ರಕ್ಷಣೆಗೆ ಎಲ್ಲ ಇಲಾಖೆಗಳ ಸಮನ್ವಯ ಅಗತ್ಯ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಮಹಿಳೆಯರ ಮೇಲಾಗುತ್ತಿರುವ ಕೌಟುಂಬಿಕ ಹಿಂಸೆಯ ಪ್ರಕರಣಗಳನ್ನು ಇತ್ಯರ್ಥಗೊಳಿಸುವಲ್ಲಿ ತಳಮಟ್ಟದಲ್ಲಿ ಸಾಂತ್ವನ ಕೇಂದ್ರಗಳು ಹಾಗೂ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಬಹು ಮುಖ್ಯ ಪಾತ್ರವನ್ನು ವಹಿಸುತ್ತಿದ್ದಾರೆ ಈ ಕುರಿತು ಎಲ್ಲ ಇಲಾಖೆಗಳು ಇನ್ನಷ್ಟೂ ಚುರುಕಾಗಿ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಚೇರಿ ಸಭಾಂಗಣದಲ್ಲಿ ಬುಧವಾರ (ಜು.23) ನಡೆದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವಿವಿಧ ಸಮಿತಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮಹಿಳೆಯರ ಮತ್ತು ಮಕ್ಕಳ ಅನೈತಿಕ ಸಾಗಾಣಿಕೆಗೆ ಸಂಬಂಧಿಸಿದಂತೆ ಪ್ರತಿ ಗ್ರಾಮ ಪಂಚಾಯತ್ ಹಂತದಲ್ಲಿ ಕಾವಲು ಸಮಿತಿಗಳಿದ್ದು, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಮಹಿಳೆ ಮತ್ತು ಮಕ್ಕಳ ಅಪಹರಣಗಳು, ಪೋಕ್ಸೋ, ಬಾಲ್ಯ ವಿವಾಹ ಹಾಗೂ ವಿವಾಹೇತರ ಸಂಬಂಧಗಳಂತಹ ಪ್ರಕರಣಗಳು ಕಳ್ಳಸಾಗಾಣಿಕೆಯೊಂದಿಗೆ ಸಹ ಸಂಬಂಧ ಹೊಂದಿರುವುದರಿಂದ ಇಂತಹ ಪ್ರಕರಣಗಳು ಹೆಚ್ಚಿನ ಸಂಖ್ಯೆಯಲ್ಲಿ ಕಂಡು ಬರುವ ಪ್ರದೇಶಗಳನ್ನು ಗುರುತಿಸಿ ರಕ್ಷಣೆಗೆ ಕ್ರಮ ವಹಿಸಬೇಕು.
ಯಾವುದೇ ಕಾರಣಕ್ಕೂ ಮಹಿಳೆಯರ ಮತ್ತು ಮಕ್ಕಳ ಅನೈತಿಕ ಸಾಗಾಣಿಕೆಯಾಗದಂತೆ ಎಲ್ಲಾ ತಾಲೂಕು ಮಟ್ಟದ ಅಧಿಕಾರಿಗಳು ಪಾರದರ್ಶಕವಾಗಿ ಕಾರ್ಯನಿರ್ವಹಿಸಬೇಕು ಹಾಗೂ ಪ್ರತಿ ತಿಂಗಳು ಈ ಕುರಿತು ಪ್ರಗತಿ ಪರಿಶೀಲನೆ ನಡೆಸಬೇಕು ಎಂದು ಸೂಚಿಸಿದರು.
ಇತ್ತೀಚ್ಚಿನ ದಿನಗಳಲ್ಲಿ ಸೈಬರ್ ಅಪರಾಧಗಳಿಂದಾಗಿ ಯುವತಿಯರಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವ ಹಾಗೂ ಪೋಕ್ಸೋ ಪ್ರಕರಣಗಳು ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಶಾಲಾ-ಕಾಲೇಜುಗಳಲ್ಲಿ ಅರಿವು ಕಾರ್ಯಕ್ರಮಗಳನ್ನು ಹಾಗೂ ಕಾರ್ಯಾಗಾರಗಳನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗಳ ಸಹಯೋಗದಲ್ಲಿ ಹಮ್ಮಿಕೊಳ್ಳಬೇಕು.
ಮಹಿಳಾ ಅಭಿವೃದ್ಧಿ ನಿಗಮದಡಿ ಅನುಷ್ಠಾನಗೊಳ್ಳುತ್ತಿರುವ ಮಾಜಿ ದೇವದಾಸಿಗಳ ಹಾಗೂ ಲಿಂಗತ್ವ ಅಲ್ಪಸಂಖ್ಯಾತರ ಪನರ್ವಸತಿ ಯೋಜನೆಗಳಿಗೆ ಸಂಬಂಧಿಸಿದಂತೆ ಚರ್ಚಿಸುವುದರೊಂದಿಗೆ ಸ್ಥಾನಿಕವಾಗಿ ಭೇಟಿ ನೀಡಿ ಫಲಾನುಭವಿಗಳ ಸರ್ವೆ ಮಾಡಿ ವರದಿಯನ್ನು ಸಲ್ಲಿಸುವಂತೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ತಿಳಿಸಿದರು.
ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಂದೀಪ ಪಾಟೀಲ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಚೇತನ ಕುಮಾರ, ಜಿಲ್ಲಾ ನಿರೂಪಣಾಧಿಕಾರಿ ಎಂ ಎನ್, ಶ್ರೀ ಅಣ್ಣಪ್ಪಾ ಹೆಗಡೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಈಶ್ವರ ಗಡಾದಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಿಬ್ಬಂದಿಗಳು, ವಿವಿಧ ಸಮಿತಿ ಸದಸ್ಯರು ಸಭೆಯಲ್ಲಿ ಉಪಸ್ಥಿತರಿದ್ದರು.