ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ವೀಕ್ ಎಂಡ್ ಕರ್ಫ್ಯೂ ಹಿಂಪಡೆದಿರುವುದೂ ಸೇರಿದಂತೆ ರಾಜ್ಯ ಸರಕಾರದ ಮಾರ್ಗದರ್ಶಿ ಸೂತ್ರಗಳ ಕುರಿತು ಸಾಕಷ್ಟು ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶನಿವಾರ ಕೊರೋನಾ ಸಂಬಂಧ ಚರ್ಚಿಸಲು ಉನ್ನತ ಮಟ್ಟದ ಸಭೆ ಕರೆದಿದ್ದಾರೆ.
ಮಧ್ಯಾಹ್ನ 1 ಗಂಟೆಗೆ ಗೃಹ ಕಚೇರಿ ಕೃಷ್ಣಾದಲ್ಲಿ ಈ ಸಭೆ ಆಯೋಜಿಸಲಾಗಿದ್ದು, ಕಂದಾಯ ಸಚಿವ ಆರ್.ಅಶೋಕ, ಸಾರಿಗೆ ಸಚಿವ ಬಿ.ಶ್ರೀರಾಮುಲು, ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ, ಗೃಹ ಸಚಿವ ಅರಗ ಜ್ಞಾನೇಂದ್ರ, ಆರೋಗ್ಯ ಸಚಿವ ಡಾ.ಕೆ.ಸುಧಾಕರ, ಶಿಕ್ಷಣ ಸಚಿವ ನಾಗೇಶ್ ಸಭೆಯಲ್ಲಿ ಪಾಲ್ಗೊಳ್ಳುವರು.
ಸರಕಾರದ ಮುಖ್ಯಕಾರ್ಯದರ್ಶಿ, ಅಪರ ಮುಖ್ಯ ಕಾರ್ಯದರ್ಶಿ, ಪೊಲೀಸ್ ಮಹಾನಿರ್ದೇಶಕರು, ಪೊಲೀಸ್ ಆಯುಕ್ತರು, ಬಿಬಿಎಂಪಿ ಆಯುಕ್ತರು, ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ, ಕಂದಾಯ, ಆರೋಗ್ಯ ಶಿಕ್ಷಣ ಇಲಾಖೆಗಳ ಪ್ರಧಾನ ಕಾರ್ಯದರ್ಶಿಗಳು ಸೇರಿದಂತೆ ಅನೇಕರು ಸಭೆಯಲ್ಲಿ ಪಾಲ್ಗೊಳ್ಳುವರು.
ತಾಂತ್ರಿಕ ಸಲಹಾ ಸಮಿತಿಯ ಅಧ್ಯಕ್ಷರು ಹಾಗೂ ಸದಸ್ಯರು ವಿಡೀಯೋ ಕಾನ್ಫರೆನ್ಸ್ ಮೂಲಕ ಸಭೆಯಲ್ಲಿ ಭಾಗವಹಿಸುವರು.
ಕೊರೋನಾ ಸಂಬಂಧ ಶಾಲೆ, ಕಾಲೇಜು ನಿರ್ವಹಣೆ ಸೇರಿದಂತೆ ಕೇಂದ್ರ ಸರಕಾರದಿಂದ ಹೊಸ ಮಾರ್ಗಸೂಚಿ ಹೊರಬೀಳುವ ಹಂತದಲ್ಲಿದ್ದು, ಅದನ್ನೂ ದೃಷ್ಟಿಯಲ್ಲಿಟ್ಟುಕೊಂಡು ರಾಜ್ಯ ಸರಕಾರ ಇಡಬೇಕಾದ ಹೆಜ್ಜೆಗಳ ಕುರಿತು ಸಭೆಯಲ್ಲಿ ಚರ್ಚೆ ನಡೆಯಲಿದೆ.
ರಾಜ್ಯಕ್ಕೆ ಅನ್ವಯಿಸಬಹುದಾದ ಹೊಸ ಮಾರ್ಗಸೂಚಿಗಳನ್ನು ಈ ಸಭೆಯಲ್ಲಿ ನಿರ್ಧರಿಸುವ ಸಾಧ್ಯತೆ ಇದೆ. ವಿಶೇಷವಾಗಿ ರಾತ್ರಿ ಕರ್ಫ್ಯೂ ಕುರಿತು, ಶಾಲೆ, ಕಾಲೇಜುಗಳ ನಿರ್ವಹಣೆ ಕುರಿತು ನಿರ್ಧಾರ ಹೊರಬೀಳುವ ಸಾಧ್ಯತೆ ಇದೆ.
ಸಭೆಯ ಸುತ್ತೋಲೆ ಇಲ್ಲಿದೆ –
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ