ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೊರೊನಾ ಸೋಂಕಿತರನ್ನು ಗುಣಪಡಿಸಬಲ್ಲ ಆಶಾದಾಯಕವಾಗಿದ್ದ ಪ್ಲಾಸ್ಮಾ ಥೆರಪಿ ಮೊದಲ ಪ್ರಯತ್ನ ರಾಜ್ಯದಲ್ಲಿ ವಿಫಲವಾಗಿದೆ. ಬೆಂಗಳೂರಿನಲ್ಲಿ ಇಂದು ಕೊರೊನಾ ಸೋಂಕಿಗೆ ಸಾವನ್ನಪ್ಪಿದ್ದ 60 ವರ್ಷದ ವ್ಯಕ್ತಿಗೆ ಪ್ಲಾಸ್ಮಾ ಥೆರಪಿ ಮಾಡಲಾಗಿತ್ತು. ಆದಾಗ್ಯೂ ಚಿಕಿತ್ಸೆ ಫಲಕಾರಿಯಾಗದೇ ವ್ಯಕ್ತಿ ಮೃತಪಟ್ಟಿದ್ದಾರೆ.
ಕೊರೊನಾ ಸೋಂಕಿತರಿಗೆ ಪ್ಲಾಸ್ಮಾ ಥೆರಪಿ ಸಹಕಾರಿಯಾಗಲಿದೆ ಎನ್ನಲಾಗಿತ್ತು. ಬೆಂಗಳೂರಿನ ವಿಕ್ಟೋರೊಯಾ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಆಂಧ್ರ ಮೂಲದ ವ್ಯಕ್ತಿ ಕೊರೊನಾ ಸೋಂಕಿನಿಂದ ತೀವ್ರವಾಗಿ ಬಳಲುತ್ತಿದ್ದರು. ತಜ್ನ ವೈದ್ಯರ ತಂಡ ಪ್ಲಾಸ್ಮಾ ಚಿಕಿತ್ಸೆ ನೀಡಿದ್ದರು. ಪ್ಲಾಸ್ಮಾ ಚಿಕಿತ್ಸೆ ನೀಡಿದ ಕೆಲ ಸಮಯದಲ್ಲೇ ವ್ಯಕ್ತಿಗೆ ಹೃದಯಾಘಾತವಾಗಿದೆ. ಇದು ವೈದ್ಯರಲ್ಲಿಯೂ ಅಚ್ಚರಿಗೆ ಕಾರಣವಾಗಿದೆ. ರಾಜ್ಯದಲ್ಲಿ ಮೊದಲ ಪ್ಲಾಸ್ಮಾ ಥೆರಪಿ ಪ್ರಯತ್ನವೇ ವಿಫಲವಾಗಿರುವುದು ವೈದ್ಯರಲ್ಲೂ ಬೇಸರಕ್ಕೆ ಕಾರಣವಾಗಿದೆ.
ಆಂಧ್ರ ಪ್ರದೇಶದಿಂದ ಬೆಂಗಳೂರಿಗೆ ಬಂದಿದ್ದ ರೋಗಿ-796 (60 ವರ್ಷದ ವೃದ್ಧ) ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಇಂದು ಬೆಳಿಗ್ಗೆ ಮೃತಪಟ್ಟಿದ್ದಾರೆ. ವೃದ್ಧನಿಂದ ಪತ್ನಿ ಮತ್ತು ಖಾಸಗಿ ಆಸ್ಪತ್ರೆಯ ವಾರ್ಡ್ ಬಾಯ್‍ಗೆ ಸೋಂಕು ತಗುಲಿದೆ. ಮೃತ ವೃದ್ಧ ಅನಂತಪುರ ಜಿಲ್ಲೆಯ ನಿವಾಸಿಯಾಗಿದ್ದು, ಅನಾರೋಗ್ಯದ ಕಾರಣ ಆಂಧ್ರ ಪ್ರದೇಶದಲ್ಲೇ ಚಿಕಿತ್ಸೆ ಪಡೆದಿದ್ದರು. ಆದರೆ ಹೆಚ್ಚಿನ ಚಿಕಿತ್ಸೆಗೆ ಎಂದು ಬೆಂಗಳೂರಿಗೆ ಬಂದಿದ್ದರು. ಈ ವೇಳೆ ವೃದ್ಧ ಖಾಸಗಿ ಆಸ್ಪತ್ರೆಯಲ್ಲಿ ಪರೀಕ್ಷೆ ಮಾಡಿಸಿದ್ದಾರೆ. ಆಗ ಆತನಿಗೆ ಲೋ ಬಿಪಿ, ಶುಗರ್, ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದರು. ವೃದ್ಧನನ್ನು ವಿಕ್ಟೋರಿಯಾ ಆಸ್ಪತ್ರೆಗೆ ಕಳುಹಿಸಲಾಗಿತ್ತು. ಅಲ್ಲಿ ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದ್ದು, ಈ ವೇಳೆ ವರದಿಯಲ್ಲಿ ಪಾಸಿಟಿವ್ ಬಂದಿದೆ. ನಂತರ ವೃದ್ಧನನ್ನು ಕೋವಿಡ್ ವಾರ್ಡಿನಲ್ಲಿ ಇರಿಸಿ ಮೂರು ದಿನಗಳಿಂದ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ