
ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಕರ್ನಾಟಕಕ್ಕೆ ಮತ್ತೆ ಬಿಗ್ ಶಾಕ್ ನೀಡಿದೆ. ತಮಿಳುನಾಡಿಗೆ ಪ್ರತಿದಿನ 3000 ಕ್ಯೂಸೆಕ್ ನೀರು ಹರಿಸುವಂತೆ ಆದೇಶ ನೀಡಿದೆ.
ನವದೆಹಲಿಯಲ್ಲಿ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಸಭೆ ನಡೆದಿದ್ದು, ಸಭೆಯಲ್ಲಿ ಕರ್ನಾಟಕ್ಕೆ CWRC ಆದೇಶ ಪಾಲಿಸುವಂತೆ ಸೂಚಿಸಿದೆ. ಅಕ್ಟೋಬರ್ 15ರವರೆಗೆ ಪ್ರತಿದಿನ ತಮಿಳುನಾಡಿಗೆ 3000 ಕ್ಯೂಸೆಕ್ ನೀರು ಹರಿಸುವಂತೆ ಸೂಚನೆ ನೀಡಿದೆ.
ತಮಿಳುನಾಡಿಗೆ ನೀರು ಹರಿಸಿರುವ ರಾಜ್ಯ ಸರ್ಕಾರದ ಕ್ರಮ ಖಂಡಿಸಿ ಈಗಾಗಲೇ ರಾಜ್ಯಾದ್ಯಂತ ಬಂದ್ ಗೆ ಕರೆ ನೀಡಿ, ಪ್ರತಿಭಟನೆ ನಡೆಸಲಾಗುತ್ತಿದ್ದು, ರಾಜ್ಯದಲ್ಲಿ ಕಾವೇರಿ ನೀರಿಗಾಗಿ ಹೋರಾಟ ಭುಗಿಲೆದ್ದಿರುವ ನಡುವೆಯೂ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ, ಕರ್ನಾಟಕದ ಸಂಕಷ್ಟವನ್ನು ಗಮನಕ್ಕೂ ತೆಗೆದುಕೊಂಡಿಲ್ಲ.
ರಾಜ್ಯದಲ್ಲಿ ಬರಗಾಲದಿಂದ ರೈತರು ತತ್ತರಿಸಿದ್ದು, ಕುಡಿಯುವ ನೀರಿಗೂ ತತ್ವಾರ ಶುರುವಾಗಿದೆ ಇಂತಹ ಸಂಕಷ್ಟದ ಸಂದರ್ಭದಲ್ಲಿಯೂ CWMA ಮತ್ತೆ ಕಾವೇರಿ ನೀರು ಹರಿಸುವಂತೆ ಸರ್ಕಾರಕ್ಕೆ ಸೂಚಿಸಿದ್ದು, ರಾಜ್ಯದಲ್ಲಿ ಪ್ರತಿಭಟನೆಗಳು ಇನ್ನಷ್ಟು ಭುಗಿಲೇಳುವ ಸಾಧ್ಯತೆ ದಟ್ಟವಾಗಿದೆ.
					
				
					
					
					
					
					
					
					

