
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿಶ್ವಾದ್ಯಂತ ಆತಂಕ ಸೃಷ್ಟಿಸಿರುವ ಕೊರೊನಾ ವೈರಸ್, ಕರ್ನಾಟಕಕ್ಕೂ ಕಾಲಿಟ್ಟಿದ್ದು, ರಾಜಧಾನಿ ಬೆಂಗಳೂರಿನಲ್ಲಿಯೇ ನಾಲ್ವರಲ್ಲಿ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.
ಅಮೆರಿಕದಿಂದ ಮರಳಿದ್ದ ಬೆಂಗಳೂರು ಮೂಲದ ಟೆಕ್ಕಿಯಲ್ಲಿ ಕೊರೋನಾ ಸೋಂಕು ಇರುವುದು ಪತ್ತೆಯಾಗಿತ್ತು. ಇದರ ಬೆನ್ನಲ್ಲೇ ಈಗ ಮತ್ತೆ ಮೂವರಲ್ಲಿ ಈ ವೈರಸ್ ಹರಡಿರುವುದು ದೃಢ ಪಟ್ಟಿದೆ. ಈಗಾಗಲೇ ಸೋಂಕು ಪತ್ತೆಯಾಗಿರುವ ಟೆಕಿಗೆ ರಾಜೀವ್ ಗಾಂಧಿ ಆಸ್ಪತ್ರೆಯಲ್ಲಿ ತೀವ್ರಾ ನಿಗಾ ಘಟಕದಲ್ಲಿ ಪ್ರತ್ಯೇಕ ಚಿಕಿತ್ಸೆ ನೀಡಲಾಗುತ್ತಿದೆ.
ಮೂಲಗಳ ಪ್ರಕಾರ, ಅಮೆರಿಕಾದಿಂದ ವಾಪಸಾಗಿದ್ದ ಟೆಕ್ಕಿಯ ಹೆಂಡತಿ, ಮಗಳು ಮತ್ತು ಸಹೋದ್ಯೋಗಿಗಳಿಗೂ ಸೋಂಕು ತಗುಲಿದೆ ಎನ್ನಲಾಗಿದೆ.
ಈ ಕುರಿತು ಟ್ವೀಟ್ ಮಾಡಿರುವ ಆರೋಗ್ಯ ಸಚಿವ ಶ್ರೀರಾಮುಲು, ಕರ್ನಾಟಕದಲ್ಲಿ ಇದುವರೆಗೆ 4 ವ್ಯಕ್ತಿಗಳಲ್ಲಿ ಕೊವಿಡ್ 19 ಸೋಂಕು ದೃಢಪಟ್ಟಿದ್ದು, ಅವರನ್ನು ಹಾಗೂ ಅವರ ಕುಟುಂಬ ಸದಸ್ಯರನ್ನು ಪ್ರತ್ಯೇಕವಾಗಿರಿಸಿ ಅವರ ಆರೋಗ್ಯದ ಮೇಲೆ ನಿಗಾ ವಹಿಸಲಾಗಿದೆ. ನಾಗರಿಕರು ಮುಂಜಾಗೃತ ಕ್ರಮ ವಹಿಸಿ ಸೋಂಕು ಹರಡದಂತೆ ಸಹಕರಿಸಬೇಕು ಎಂದು ಕೋರುತ್ತೇನೆ ಎಂದಿದ್ದಾರೆ.
ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಸಚಿವ ಶ್ರೀರಾಮುಲು ಸಿಎಂ ಯಡಿಯೂರಪ್ಪನವರನ್ನು ಭೇಟಿಯಾಗಿ ಸಂಪೂರ್ಣ ವಿವರಣೆ ನೀಡಿದ್ದಾರೆ. ಅಲ್ಲದೇ ವೈದ್ಯಕೀಯ ಶಿಕ್ಷಣ ಸಚಿವ ಕೆ ಸುಧಾಕರ್, ಆರೋಗ್ಯ ಇಲಾಖೆ ಅಧಿಕಾರಿಗಳ ಜೊತೆ ತುರ್ತು ಸಭೆ ನಡೆಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ