ಪ್ರಗತಿವಾಹಿನಿ ಸುದ್ದಿ; ಧಾರವಾಡ: ರಾಜ್ಯದಲ್ಲಿ ಮತ್ತೊಬ್ಬ ವ್ಯಕ್ತಿಗೆ ಕೊರೊನಾ ಸೋಂಕು ಇರುವುದು ಧೃಡಪಟ್ಟಿದೆ. ಈ ಮೂಲಕ ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 21ಕ್ಕೆ ಏರಿಕೆಯಾಗಿದೆ.
ಧಾರವಾಡದ ಹೊಸಯಲ್ಲಾಪುರ ಮೂಲದ ವ್ಯಕ್ತಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈತ ಆಸ್ಟ್ರೇಲಿಯಾ, ದುಬೈ, ಮಸ್ಕತ್ ಹಾಗೂ ಗೋವಾ ಮೂಲಕ ಧಾರವಾಡ ನಗರಕ್ಕೆ ಆಗಮಿಸಿದ್ದ. ವ್ಯಕ್ತಿಯಲ್ಲಿ ಕೋವಿಡ್ 19 ಪಾಸಿಟಿವ್ ಇರುವುದು, ಪ್ರಯೋಗಾಲಯ ವರದಿಯಿಂದ ದೃಢಪಟ್ಟಿದೆ ಎಂದು ಧಾರವಾಡ ಜಿಲ್ಲಾಧಿಕಾರಿ ದೀಪಾ ಚೋಳನ್ ತಿಳಿಸಿದ್ದಾರೆ.
ಇವರು ಮಾರ್ಚ್ 12 ರಂದು ಧಾರವಾಡ ನಗರಕ್ಕೆ ಆಗಮಿಸಿದ್ದರು. ಶಂಕಿತ ಕೋವಿಡ್ 19 ರ ರೋಗಲಕ್ಷಣಗಳು ಕಂಡು ಬಂದ ಹಿನ್ನೆಲೆಯಲ್ಲಿ , ಮಾರ್ಚ್ 18 ರಂದು ಖಾಸಗಿ ಆಸ್ಪತ್ರೆಯೊಂದಕ್ಕೆ ಚಿಕಿತ್ಸೆಗಾಗಿ ದಾಖಲಾಗಿದ್ದರು. ಅವರ ಗಂಟಲು ಮತ್ತು ಮೂಗಿನ ದ್ರವದ ಮಾದರಿಯನ್ನು ತಪಾಸಣೆಗಾಗಿ ಶಿವಮೊಗ್ಗದ VDRL ಪ್ರಯೋಗಾಲಯಕ್ಕೆ ಕಳುಹಿಸಿ ಕೊಡಲಾಗಿತ್ತು. ಇದೀಗ ಪ್ರಯೋಗಾಲಯ ವರದಿ ಕೋವಿಡ್ 19 ಪಾಸಿಟಿವ್ ಎಂದು ಬಂದಿದೆ.
ವ್ಯಕ್ತಿಯಲ್ಲಿ ಕೊರೊನಾ ಪಾಸಿಟಿವ್ ದೃಢವಾಗಿರುವ ಹಿನ್ನೆಲೆಯಲ್ಲಿ ಹೊಸಯಲ್ಲಾಪುರ ಪ್ರದೇಶವನ್ನು ಕಂಟೈನಮೆಂಟ್ ಎಂದು ಘೋಷಿಸಲಾಗಿದ್ದು, 3 ಕಿಮೀ ವ್ಯಾಪ್ತಿಯಲ್ಲಿ ಸಾರ್ವಜನಿಕರ ಆಗಮನ ಮತ್ತು ನಿರ್ಗಮನವನ್ನು ನಿರ್ಬಂಧಿಸಲಾಗಿದೆ. ಅಲ್ಲದೇ 3 ಕಿ ಮೀ ವ್ಯಾಪ್ತಿಯಲ್ಲಿ ಪೊಲೀಸರು ನಿಂತುಕೊಂಡು ಹೋಗುವ ಮತ್ತು ಬರುವ ಜನರನ್ನು ತಪಾಸಣೆ ಮಾಡುತ್ತಿದ್ದಾರೆ. ಜೊತೆಗೆ ಮನೆಯಿಂದ ಆಚೆ ಬರದಂತೆ ಜನರಿಗೆ ತಿಳಿಸಲಾಗಿದೆ. ಸೋಂಕಿತ ವ್ಯಕ್ತಿಗೆ ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ