ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮಾಂಸಾಹಾರ ಸೇವನೆಯಿಂದ ಕೊರೊನಾ ವೈರಸ್ ಹರಡುವುದಿಲ್ಲ. ಈ ಬಗ್ಗೆ ಜನರಲ್ಲಿ ಆತಂಕ ಬೇಡ. ಕೆಲ ಮಾರ್ಗ ಸೂಚಿಗಳನ್ನು ಅನುಸರಿಸಿ ಆಹಾರ ಸೇವಿಸಿ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಕೊರೋನಾ ವೈರಸ್ ಪ್ರಾಣಿಗಳಿಂದ ಹರಡಿರುವ ಸಾಧ್ಯತೆ ಇದೆ ಎಂಬ ಕಾರಣಕ್ಕೆ ಈ ರೀತಿಯ ಸುದ್ದಿಯನ್ನು ಹಬ್ಬಿಸಲಾಗುತ್ತಿದೆ. ಆದರೆ, ಮಾಂಸ ಆಹಾರ ಸೇವನೆಯಿಂದ ಕೊರೋನಾ ಹರಡುತ್ತದೆ ಎಂಬುದು ಶುದ್ಧ ಸುಳ್ಳು. ಹೀಗಾಗಿ ಆಹಾರ ಸೇವನೆಯಲ್ಲಿ ಕೆಲವು ಮಾರ್ಗಸೂಚಿಗಳನ್ನು ಅನುಸರಿಸಿದರೆ ಯಾವುದೇ ಸಮಸ್ಯೆ ಇಲ್ಲ ಎಂದು ತಿಳಿಸಿದರು.
ರಾಜ್ಯದಲ್ಲಿ ಕೊರೊನಾ ವೈರಸ್ ಹರಡದಂತೆ ತಡೆಯುವ ಸಲುವಾಗಿ 13.5 ಕೋಟಿ ಹಣವನ್ನು ಬಿಡುಗಡೆ ಮಾಡಲಾಗಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಹಣ ಬಿಡುಗಡೆ ಮಾಡಿದ್ದು, ಕೊರೋನಾ ಕುರಿತು ಪ್ರತಿನಿತ್ಯ ಮಾಹಿತಿ ಪಡೆಯುತ್ತಿದ್ದಾರೆ. ಅಲ್ಲದೆ ಸೂಕ್ತ ಮುಂಜಾಗ್ರತಾ ಕ್ರಮ ಜರುಗಿಸಲು ಸೂಚಿಸಿದ್ದಾರೆ ಎಂದರು.
ಇನ್ನೂ ಕೊರೋನಾ ವೈರಸ್ ಪತ್ತೆಯಾಗಿದ್ದ ಟೆಕ್ಕಿಯ ಆರೋಗ್ಯ ಸುಧಾರಿಸಿದೆ. ವಿದೇಶದಿಂದ ಬೆಂಗಳೂರಿಗೆ ಆಗಮಿಸುವ ಪ್ರತಿಯೊಬ್ಬರನ್ನೂ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಜನ ಗುಂಪುಗಳಲ್ಲಿದ್ದಾಗ ಕೊರೋನಾ ಹರಡುವ ಸಾಧ್ಯತೆ ಇದ್ದು, ಗುಂಪು ಸಮಾರಂಭಗಳಿಂದ ದೂರ ಇರಿ. ಸರ್ಕಾರದ ಮಾರ್ಗಸೂಚಿಗಳನ್ನು ಜನರು ಪಾಲಿಸಿ ಎಂದು ಹೇಳಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ