ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಎಲ್ಲಾ ವೈದ್ಯಕೀಯ ಕಾಲೇಜುಗಳಲ್ಲಿ ಕೊರೋನಾ ವೈರಸ್ ವಾರ್ ರೂಮ್ ಹಾಗೂ ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಆರೋಗ್ಯ ಇಲಾಖೆ ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಎಲ್ಲಾ ಸರ್ಕಾರಿ ವೈದ್ಯಕೀಯ ಕಾಲೇಜುಗಳ ನಿರ್ದೇಶಕರೊಂದಿಗೆ ಸಭೆ ನಡೆಸಲಾಗಿದೆ. ಕೋವಿಡ್-19 ಹೇಗೆ ತಡೆಯಬೇಕು ಎಂಬುದರ ಬಗ್ಗೆ ಚರ್ಚೆ ಮಾಡಿದ್ದು, ಇದರ ಭಾಗವಾಗಿಯೇ ರಾಜ್ಯದ ಎಲ್ಲಾ ವೈದ್ಯಕೀಯ ಕಾಲೇಜುಗಳಲ್ಲಿ ಕೊರೋನಾ ವೈರಸ್ ವಾರ್ ರೂಮ್ ಮತ್ತು ಪರೀಕ್ಷಾ ಕೇಂದ್ರಗಳ ಸ್ಥಾಪನೆ ಮಾಡಲಾಗುತ್ತಿದೆ ಎಂದರು.
ಬೆಂಗಳೂರು, ಹಾಸನ, ಮಂಗಳೂರು, ಹುಬ್ಬಳ್ಳಿ, ಕಲಬುರಗಿ ಸೇರಿದಂತೆ ಹಲವು ಕಡೆ ಕೊರೋನಾ ವೈರಸ್ ವಾರ್ ರೂಮ್ ಮತ್ತು ತಪಾಸಣೆ ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದೆ. ರಾಜ್ಯಾದ್ಯಂತ ಹೆಲ್ಪ್ ಡೆಸ್ಕ್ ಆರಂಭಿಸಲು ತೀರ್ಮಾನಿಸಲಾಗಿದೆ. ಇದಕ್ಕಾಗಿಯೇ ಪ್ರತಿ ಜಿಲ್ಲೆಯಲ್ಲಿ 150-250 ಪ್ರತ್ಯೇಕ ಬೆಡ್ ವ್ಯವಸ್ಥೆ ಮಾಡಲಾಗುವುದು. ಇದನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ವೀಕ್ಷಿಸಲಾಗುವುದು ಎಂದು ತಿಳಿಸಿದರು.
ಕೊರೊನಾ ಮುನ್ನೆಚ್ಚರಿಕೆ ಕ್ರಮವಾಗಿ ರಾಜ್ಯದಲ್ಲಿ ಒಂದುವಾರ ಬಂದ್ ಇದ್ದಾಗ್ಯೂ ಸೂಪರ್ ಮಾರ್ಕೆಟ್ಗಳು ತೆರೆದ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, ಈ ಬಗ್ಗೆ ಸಿಎಂ ಯಡಿಯೂರಪ್ಪ ಸಭೆ ನಡೆಸಲಿದ್ದಾರೆ. ಸಭೆಯಲ್ಲಿ ಸೂಪರ್ ಮಾರ್ಕೆಟ್ಗಳು ಮುಚ್ಚಬೇಕೇ, ಬೇಡವೆ ಎಂಬುದರ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ