ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೊರೊನಾ ಸೋಂಕಿನಿಂದ ಬಳಲುತ್ತಿರುವ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯಕೀಯ ಸಿಬ್ಬಂದಿಗಳನ್ನು ಮನೆ ಖಾಲಿ ಮಾಡುವಂತೆ ಒತ್ತಾಯಿಸುವ ಮನೆ ಮಾಲೀಕರ ವಿರುದ್ಧ ಕಠಿಣಕ್ರಮ ತೆಗೆದುಕೊಳ್ಳುವುದಾಗಿ ಆರೋಗ್ಯ ಸಚಿವ ಶ್ರೀರಾಮುಲು ಎಚ್ಚರಿಕೆ ನೀಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಚಿವರು, ಕೊರೋನಾ ಸೋಂಕಿತರ ಚಿತ್ಸೆಯಲ್ಲಿ ತೊಡಗಿರುವ ವೈದ್ಯರು ಮತ್ತು ಹೋಮ್ ಕ್ವಾರಂಟೀನ್ನಲ್ಲಿ ಇರುವವರನ್ನು ಮನೆ ಖಾಲಿ ಮಾಡುವಂತೆ ಒತ್ತಾಯಿಸಲಾಗುತ್ತಿದೆ ಎಂಬ ಆರೋಪಗಳು ಕೇಳಿ ಬಂದಿವೆ. ಹೀಗೆ ಕೊರೋನಾ ವಿರುದ್ಧ ಹೋರಾಡುತ್ತಿರುವವರ ಮನೆ ಖಾಲಿ ಮಾಡಲು ಮಾಲೀಕರು ಒತ್ತಾಯಿಸುವುದು ಅಮಾನವೀಯ. ಇದನ್ನು ಗಂಭೀರ ಸ್ವರೂಪದ ಅಪರಾಧ ಎಂದು ಪರಿಗಣಿಸಿ ಮನೆ ಮಾಲೀಕರ ವಿರುದ್ಧ ಕಠಿಣಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.
ವೈದ್ಯಕೀಯ ಸಿಬ್ಬಂದಿಗಳನ್ನು ಮನೆ ಖಾಲಿ ಮಾಡುವಂತೆ ಮನೆ ಮಾಲೀಕರ ವಿರುದ್ಧ ಕ್ರಮಕ್ಕೆ ಮುಂದಾಗಿ ಎಂದು ಸಚಿವ ಶ್ರೀರಾಮುಲು ಜಿಲ್ಲಾಧಿಕಾರಿಗಳು ಮತ್ತು ಪಾಲಿಕೆ ಆಯುಕ್ತರು, ಪೊಲೀಸ್ ಇಲಾಖೆಗೆ ಪತ್ರ ಬರೆದಿದ್ದಾರೆ.
ಕೊರೋನಾ ಶಂಕಿತರನ್ನು ತಪಾಸಣೆ ಮಾಡುವ ವೈದ್ಯರಿಗೆ ಕೂಡ ಕೊರೋನಾ ಸೋಂಕು ತಗುಲುವ ಸಾಧ್ಯತೆ ಹೆಚ್ಚಾಗಿರುವುದರಿಂದ ಆತಂಕಕ್ಕೆ ಒಳಗಾಗಿರುವ ಮನೆ ಮಾಲೀಕರು ಮನೆ ಖಾಲಿ ಮಾಡುವಂತೆ ಮಂಗಳೂರು ಸೇರಿದಂತೆ ವಿವಿಧ ಭಾಗಗಳಲ್ಲಿ ಒತ್ತಾಯಿಸುತ್ತಿದ್ದಾರೆ ಎನ್ನಲಾಗಿತ್ತು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ