Kannada NewsLatest

ಕೋವಿಡ್ ಲಸಿಕೆಯಿಂದ ಮರಣಪ್ರಮಾಣ ನಿಯಂತ್ರಣ ಸಾಧ್ಯ: ಜಿಲ್ಲಾಧಿಕಾರಿ ಹಿರೇಮಠ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಲಸಿಕೆ ಪಡೆಯುವುದರಿಂದ ರೂಪಾಂತರಿ ಕೊರೊನಾ ದಿಂದ ಉದ್ಭವಿಸಬಹುದಾದ ಮರಣ ಪ್ರಮಾಣಗಳನ್ನು ನಿಯಂತ್ರಿಸುವುದು ಸಾಧ್ಯವಿದೆ. ಆದ್ದರಿಂದ ಎಲ್ಲರೂ ತಪ್ಪದೇ ಲಸಿಕೆ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಹೇಳಿದರು.

ಕೋವಿಡ್ ಲಸಿಕಾ ಕಾರಣ ಹಿನ್ನೆಲೆಯಲ್ಲಿ ಮಂಗಳವಾರ (ಮಾ.16) ತಾಲ್ಲೂಕುಮಟ್ಟದ ಅಧಿಕಾರಿಗಳ ಜತೆ ನಡೆದ ವಿಡಿಯೋ ಸಂವಾದದಲ್ಲಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಕೋವಿಡ್ ತಪಾಸಣೆ ಹೆಚ್ಚಿಸಬೇಕು. ಸರ್ಕಾರದ ಮಾರ್ಗಸೂಚಿ ಪ್ರಕಾರ ಗಡಿ ಭಾಗದಲ್ಲಿ ಹೆಚ್ಚಿನ ನಿಗಾ ವಹಿಸಬೇಕು. ನೆರೆಯ ಜಿಲ್ಲೆಗಳಿಂದ ಆಗಮಿಸುವ ಪ್ರಯಾಣಿಕರಿಗೆ ತಪಾಸಣೆಗೆ ಆದ್ಯತೆ ‌ನೀಡಬೇಕು. ಜಿಲ್ಲೆಯಲ್ಲಿ 60 ವರ್ಷ ಮೇಲ್ಪಟ್ಟಿರುವವರು ನಾಲ್ಕು ಲಕ್ಷಕ್ಕೂ ಅಧಿಕ ಜನರಿದ್ದಾರೆ. ಅಂತಹವರನ್ನು ಗುರುತಿಸಿ ಕೋವಿಡ್ ಲಸಿಕೆ ನೀಡಲು ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು. ಲಸಿಕೆ‌ ನೀಡುವ ಪ್ರಕ್ರಿಯೆಯಲ್ಲಿ ನಿರ್ಲಕ್ಷ್ಯ ತೋರುವ ಆರೋಗ್ಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು.

60 ವರ್ಷ ಮೇಲ್ಪಟ್ಟಿರುವರಿಗೆ ಲಸಿಕೆ ನೀಡಲು ಸ್ಥಳೀಯ ಸಂಘ-ಸಂಸ್ಥೆಗಳ ನೆರವಿನೊಂದಿಗೆ ವಿಶೇಷ ಅಭಿಯಾನ ನಡೆಸಬೇಕು ಎಂದು ತಿಳಿಸಿದರು. ಸ್ಥಳೀಯವಾಗಿ ಲಭ್ಯವಿರುವ ಅನುದಾನ ಅಥವಾ ಸೌಲಭ್ಯಗಳನ್ನು ಬಳಸಿಕೊಂಡು ಲಸಿಕೆ ನೀಡಲು ಕ್ರಮ ಕೈಗೊಳ್ಳಬೇಕು.

ಒಂದೆರಡು ದಿನಗಳಲ್ಲಿ ಲಸಿಕಾಕರಣ ಅಭಿಯಾನದಲ್ಲಿ ಪ್ರಗತಿ ಸಾಧಿಸಬೇಕು. ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ತಮ್ಮ ವ್ಯಾಪ್ತಿಯಲ್ಲಿ ಇರುವ ಹಿರಿಯ ನಾಗರಿಕರನ್ನು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಕರೆತಂದು ಲಸಿಕೆ ಹಾಕಿಸಬೇಕು ಎಂದು ಸೂಚನೆ ನೀಡಿದರು.

ಗ್ರಾಮಗಳಿಂದ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಹಿರಿಯ‌ ನಾಗರಿಕರನ್ನು ಕರೆತಂದು ಲಸಿಕೆ ನೀಡುವುದು ಪಿಡಿಓ ಹಾಗೂ ಗ್ರಾಮ ಲೆಕ್ಕಾಧಿಕಾರಿಗಳ ಜವಾಬ್ದಾರಿಯಾಗಿದೆ ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದರ್ಶನ್ ಎಚ್.ವಿ. ತಿಳಿಸಿದರು.

ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ಪಾಲಿಕೆಯ ಆಯುಕ್ತರಾದ ಜಗದೀಶ್, ಉಪ ವಿಭಾಗಾಧಿಕಾರಿ ಅಶೋಕ ತೇಲಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ವಿ.ಮುನ್ಯಾಳ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು. ಚಿಕೋಡಿ, ಬೈಲಹೊಂಗಲ ಉಪ ವಿಭಾಗಾಧಿಕಾರಿಗಳು, ತಹಶೀಲ್ದಾರರು, ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳು ಭಾಗವಹಿಸಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button