ಪ್ರಗತಿವಾಹಿನಿ ಸುದ್ದಿ; ತಿರುವನಂತಪುರ: ವಿಶ್ವಾದ್ಯಂತ ತೀವ್ರ ಆತಂಕಕ್ಕೆ ಕಾರಣವಾಗಿರುವ ಕರೋನಾ ವೈರಸ್ ಭಾರತಕ್ಕೂ ಕಾಲಿಟ್ಟಿದ್ದು, ಕೊರೊನಾ ಸೋಂಕು ತಗುಲಿರುವ ಮತ್ತೊಂದು ಪ್ರಕರಣ ಕೇರಳದಲ್ಲಿ ಪತ್ತೆಯಾಗಿದೆ. ಇದು ದೇಶದಲ್ಲಿ ಪತ್ತೆಯಾದ ಮೂರನೇ ಪ್ರಕರಣವಾಗಿದೆ.
ಕಾಸರಗೋಡಿನ ಕಾಂಗಾಡ್ ನಲ್ಲಿ ವ್ಯಕ್ತಿಯೊಬ್ಬರಲ್ಲಿ ಕೊರೊನಾ ವೈರಸ್ ಸೋಂಕು ಇರುವುದು ಪತ್ತೆಯಾಗಿದೆ ಎಂದು ಕೇರಳ ಆರೋಗ್ಯ ಸಚಿವೆ ಕೆಕೆ ಶೈಲಜಾ ಖಚಿತಪಡಿಸಿದ್ದಾರೆ.
ಈ ವ್ಯಕ್ತಿ ಚೀನಾದ ವುಹುನಾ ನಗರದಿಂದ ಇತ್ತೀಚೆಗೆ ಹಿಂತಿರುಗಿದ್ದರು. ಇದಾದ ಬಳಿಕ ಅವರು ಅನಾರೋಗ್ಯಕ್ಕೆ ತುತ್ತಾಗಿದ್ದರು. ಅವರನ್ನು ಪರೀಕ್ಷಿಸಿದಾಗ ವ್ಯಕ್ತಿಯಲ್ಲಿ ಕೊರೊನಾ ವೈರಸ್ ಸೋಂಕಿರುವುದು ಗೊತ್ತಾಗಿದೆ. ವ್ಯಕ್ತಿಯನ್ನು ಗೌಪ್ಯವಾಗಿ, ಪ್ರತ್ಯೇಕವಾಗಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆರೋಗ್ಯ ಸ್ಥಿರವಾಗಿದ್ದು, ತಪಾಸಣೆ ಮುಂದುವರೆದಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಕೇರಳದಲ್ಲಿ ಈ ಹಿಂದೆ ಇಬ್ಬರಲ್ಲಿ ಕೊರೊನಾ ವೈರಸ್ ಸೋಂಕು ಪತ್ತೆಯಾಗಿತ್ತು. ಅಲ್ಲದೇ ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ಸುಮಾರು ಎರಡು ಸಾವಿರ ಜನರ ಮೇಲೆ ನಿಗಾ ಇರಿಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ