ಪ್ರಗತಿವಾಹಿನಿ ಸುದ್ದಿ, ಬೆಳಗಾವಿ –: ಕೋವಿಡ್-19 ಆಸ್ಪತ್ರೆ ಹಾಗೂ ಬಿಮ್ಸ್ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ವೈದ್ಯರಿಗೆ, ನರ್ಸಗಳಿಗೆ ಹಾಗೂ ಸಿಬ್ಬಂದಿಗಳಿಗೆ ಕೋವಿಡ್-19 (ಕರೋನಾ ವೈರಾಣು ಕಾಯಿಲೆ-2019) ಹರಡದಂತೆ ಹಾಗೂ ಸಾರ್ವಜನಿಕರ ಆರೋಗ್ಯಕಾಪಾಡುವ ಹಿತದೃಷ್ಟಿಯಿಂದ ಕೋವಿಡ್-19 ಆಸ್ಪತ್ರೆಗೆ ರೋಗಿಗಳು ಹಾಗೂ ವೈದ್ಯಕೀಯ ಸಿಬ್ಬಂದಿಗಳು ಹೊರತುಪಡಿಸಿ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಆದೇಶ ಹೊರಡಿಸಿದ್ದಾರೆ.
ನಿಗದಿತ ಕೋವಿಡ್-೧೯ ಆಸ್ಪತ್ರೆ ಮತ್ತು ಬಿಮ್ಸ್ ಆಸ್ಪತ್ರೆಗೆ ಆಗಮಿಸುವ ಹೊರ ರೋಗಿಗಳು ಮತ್ತು ಒಳ ರೋಗಿಗಳ ಜೊತೆ ಒಬ್ಬರಿಗೆ ಮಾತ್ರ ಪ್ರವೇಶಿಸಲು ಅವಕಾಶ ನೀಡಿ, ಆಸ್ಪತ್ರೆಗಳ ಆವರಣದಲ್ಲಿ ಸಾರ್ವಜನಿಕರು ಅನಾವಶ್ಯಕವಾಗಿ ಪ್ರವೇಶಿಸುವುದನ್ನು ನಿಷೇಧಿಸಲಾಗಿದೆ.
ಈ ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ಭಾರತೀಯ ದಂಡ ಸಂಹಿತೆ 188 ರ ಪ್ರಕಾರ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದ್ದಾರೆ.
ಆಸ್ಪತ್ರೆಗೆ ಸಾರ್ವಜನಿಕರ ಪ್ರವೇಶ ನಿಷೇಧ ಆದೇಶವನ್ನು ಜಾರಿಗೊಳಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಬೆಳಗಾವಿ ನಗರ ಪೊಲೀಸ್ ಆಯುಕ್ತರು, ಜಿಲ್ಲಾ ಪೊಲೀಸ್ ಅಧೀಕ್ಷಕರು, ಜಿಲ್ಲೆಯ ಎಲ್ಲ ಉಪವಿಭಾಗಾಧಿಕಾರಿಗಳು, ತಹಶೀಲದಾರರು ಹಾಗೂ ಜಿಲ್ಲೆಯ
ಸಂಬಂಧಪಟ್ಟ ಎಲ್ಲ ಇಲಾಖಾ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಹಿರೇಮಠ ಅವರು ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ