ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಶಾಲಾ-ಕಾಲೇಜುಗಳಲ್ಲಿ ಕೊರೊನಾ ಸೋಂಕು ಸ್ಫೋಟಗೊಳ್ಳುತ್ತಿದೆ. ಮಕ್ಕಳನ್ನೇ ವೈರಸ್ ಹೆಚ್ಚು ಟಾರ್ಗೆಟ್ ಮಾಡುತ್ತಿದ್ದು, ಸಾಲು ಸಾಲು ವಿದ್ಯಾರ್ಥಿಗಳಲ್ಲಿ ಸೋಂಕು ಹರಡುತ್ತಿದೆ.
ಬೆಳಗಾವಿ ಜಿಲ್ಲೆಯಲ್ಲಿ ವಿದ್ಯಾರ್ಥಿಗಳಲ್ಲಿ ವೈರಸ್ ವ್ಯಾಪಕವಾಗಿ ಹರಡುತ್ತಿದ್ದು, ಆತಂಕ ಹೆಚ್ಚಿದೆ. ಅಥಣಿ ತಾಲೂಕಿನ ಯಂಕಂಚಿಯಲ್ಲಿ ಪ್ರೌಢಶಾಲೆಯ 10 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಹತ್ತನೇ ತರಗತಿಯ 95 ವಿದ್ಯಾರ್ಥಿಗಳನ್ನು ಕೋವಿಡ್ ಟೆಸ್ಟ್ ಗೊಳಪಡಿಸಲಾಗಿದ್ದು, ಈ ವೇಳೆ 10 ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆಯಾಗಿದೆ. ಶಾಲೆಯ 35 ವಿದ್ಯಾರ್ಥಿಗಳ ಪರೀಕ್ಷೆ ಬಾಕಿಯಿದ್ದು, ಸೋಂಕಿತರ ಸಂಖ್ಯೆ ಇನ್ನಷ್ಟು ಹೆಚ್ಚುವ ಭೀತಿ ಎದುರಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಗೌಡಪ್ಪ ತಿಳಿಸಿದ್ದಾರೆ.
ಶಾಲೆಯ ಓರ್ವ ಶಿಕ್ಷಕರಲ್ಲೂ ಸೋಂಕು ದೃಢಪಟ್ಟಿದ್ದು, ಸೋಂಕಿತ ಶಿಕ್ಷಕರು ಹಾಗೂ ವಿದ್ಯಾರ್ಥಿಗಳನ್ನು ಹೋಂ ಐಸೋಲೇಷನ್ ಮಾಡಲಾಗಿದೆ ಎಂದು ಹೇಳಿದ್ದಾರೆ.
ಈ ನಡುವೆ ಬೀದರ್ ಜಿಲ್ಲೆಯ ಹುಮ್ನಾಬಾದ್ ನಲ್ಲಿರುವ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯ 16 ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದರೆ ಮತ್ತೊಂದೆಡೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 42 ಶಿಕ್ಷಕರಿಗೆ ಸೋಂಕು ಹರಡಿದೆ ಎಂದು ತಿಳಿದುಬಂದಿದೆ.
ವಿಷಾಹಾರ ಸೇವನೆ; ಆಸ್ಪತ್ರೆಗೆ ದಾಖಲಾದ 50 ಮಕ್ಕಳು
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ