
ಪ್ರಗತಿವಾಹಿನಿ ಸುದ್ದಿ: ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಕನ್ನಡಪರ ಸಂಘಟನೆ ಮುಖ್ಯಂಡರು ಹಾಗೂ ರೈತ ಮುಖಂಡರು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿದ್ದಾರೆ.
ತಮಿಳುನಾಡಿಗೆ ಪ್ರತಿದಿನ 12,000 ಕ್ಯೂಸೆಕ್ ನೀರಿನಂತೆ 15 ದಿನಗಳ ಕಾಲ ನೀರು ಹರಿಸುವಂತೆ CWRC ಹಾಗೂ CWMA ಆದೇಶ ನೀಡಿರುವ ಬೆನ್ನಲ್ಲೇ ಕರ್ನಾಟಕಕ್ಕೆ ಸಂಕಷ್ಟ ಎದುರಾಗಿದ್ದು, ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಬಿಡಬೇಡಿ. ರಾಜ್ಯದ ರೈತರ, ಜನರ ಹಿತ ಕಾಯುವಂತೆ ಕನ್ನಡಪರ ಸಂಘಟನೆಗಳು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಮನವಿ ಮಾಡಿದರು.
ಬೆಂಗಳೂರಿನ ಸದಾಶಿವ ನಗರದಲ್ಲಿರುವ ಸಿಎಂ ನಿವಾಸಕ್ಕೆ ಆಗಮಿಸಿದ ಕನ್ನಡಪರ ಸಂಘಟನೆ ಮುಖಂಡರಾದ ಸಾ.ರಾ.ಗೋವಿಂದು, ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಶಿವರಾಮೇಗೌಡ, ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಸೇರಿದಂತೆ ಹಲವು ಮುಖಂಡರು, ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾದರು.
ಈ ವೇಳೆ ಮಳೆ ಕೊರತೆಯಿಂದಾಗಿ ನಮಗೇ ಕುಡಿಯಲು ನೀರಿಲ್ಲ. ರೈತರ ಬೆಳೆಗಳಿಗೆ ನೀರಲ್ಲದೇ ಸಂಕಷ್ಟ ಎದುರಾಗಿದೆ. ಕೆ.ಆರ್.ಎಸ್.ಡ್ಯಾಂ, ಹಾರಂಗಿ ಜಲಾಶಯಗಳು ಇನ್ನೂ ಭರ್ತಿಯಾಗಿಲ್ಲ. ನೀರಿನ ಒಳ ಹರಿವು ಕಡಿಮೆಯಾಗಿದೆ. ಇಂತಹ ಸ್ಥಿತಿಯಲ್ಲಿ ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಬಿಡಬಾರದು. ರಾಜ್ಯ ಸರ್ಕಾರ ರಜ್ಯದ ರೈತರ, ಜನರ ಹಿತ ಕಾಯಬೇಕು. ಈ ನಿಟ್ಟಿನಲ್ಲಿ ನಿರ್ಧಾರ ಕೈಗೊಳ್ಳುವಂತೆ ಮನವಿ ಮಾಅಡಿದರು.
ಕನ್ನಡಪರ ಹೋರಾಟಗಾರರ ಮನವಿಗೆ ಸ್ಪಂದಿಸಿದ ಸಿಎಂ ಡಿ.ಕೆ.ಶಿವಕುಮಾರ್, ರಾಜ್ಯದ ರೈತರ ಹಿತಕಾಯಲು ಸರ್ಕಾರ ಬದ್ಧವಾಗಿದೆ ಎಂದು ಭರವಸೆ ನೀಡಿದ್ದಾರೆ.



