ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ಕೈಗಾರಿಕೋದ್ಯಮಿಗಳಿಗೆ ಉತ್ತೇಜನ ನೀಡಿ ಬೃಹತ್ ಕೈಗಾರಿಕೆಗಳನ್ನು ಸ್ಥಾಪಿಸುವ ನಿಟ್ಟಿನಲ್ಲಿ ಎಲ್ಲ ಅಗತ್ಯ ಸಹಕಾರ ಮತ್ತು ಸೌಲಭ್ಯಗಳನ್ನು ಒದಗಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಹೇಳಿದರು.
ಬೆಳಗಾವಿ ಸುವರ್ಣಸೌಧದಲ್ಲಿ ಜ.24 (ಶುಕ್ರವಾರ) ಜರುಗಿದ ಪ್ರಸಕ್ತ ಸಾಲಿನ ಮೂರನೇ ತ್ರೈಮಾಸಿಕ ಕೆ.ಡಿ.ಪಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕೈಗಾರಿಕೆಗಳ ಸ್ಥಾಪನೆಗೆ ಸಂಬಂಧಿಸಿದಂತೆ ಜಿಲ್ಲಾಡಳಿತ ಹಾಗೂ ಸಂಬಂಧಿಸಿದ ಇಲಾಖೆಗಳಿಂದ ಅಗತ್ಯ ಸಹಕಾರ ನೀಡಲಾಗುವುದು. ಜಿಲ್ಲೆಯಲ್ಲಿ ಕೈಗಾರಿಕಾ ಪ್ರದೇಶ ಅಭಿವೃದ್ಧಿಪಡಿಸಲು ಸಾಕಷ್ಟು ಸರಕಾರಿ ಜಮೀನು ಲಭ್ಯವಿಲ್ಲದಿರುವುದರಿಂದ ಸದ್ಯಕ್ಕೆ ದೊಡ್ಡ ಪ್ರಮಾಣದಲ್ಲಿ ಜಮೀನು ನೀಡಲು ಸಾಧ್ಯವಾಗುತ್ತಿಲ್ಲ. ಆದರೆ ಖಾಸಗಿ ಜಮೀನು ಖರೀದಿಸಿ ಕೈಗಾರಿಕೆಗಳ ಸ್ಥಾಪನೆಗೆ ಎಲ್ಲ ರೀತಿಯ ನೆರವು ಮತ್ತು ಸೌಲಭ್ಯಗಳನ್ನು ನೀಡಲಾಗುವುದು ಎಂದು ತಿಳಿಸಿದರು.
ಮೈಕ್ರೋ ಫೈನಾನ್ಸ್ ಕಿರುಕುಳ: ಪರಿಶೀಲಿಸಿ ಕ್ರಮ
ಮೈಕ್ರೋ ಫೈನಾನ್ಸಗಳಿಂದ ಜನ ಮೋಸ ಹೋಗದಂತೆ ಸಾರ್ವಜನಿಕರಲ್ಲಿ ಅದರಲ್ಲೂ ಗ್ರಾಮೀಣ ಪ್ರದೇಶಗಳಲ್ಲಿ ಈ ಕುರಿತು ಹೆಚ್ಚಿನ ಜಾಗೃತಿ ಮೂಡಿಸಬೇಕು. ಸಹಕಾರ ಸಂಘಗಳಲ್ಲಿ ಸಾಲ ನೀಡುವ ಸಂದರ್ಭದಲ್ಲಿ ಎಲ್ಲ ನಿಯಮ ಹಾಗೂ ಷರತ್ತುಗಳ ಕುರಿತು ಮಾಹಿತಿ ನೀಡುವಂತೆ ಸೂಚಿಸಿದರು.
ಬೆಳಗಾವಿ ನಗರದ ಸೂಪರ್ ಸ್ಪೆಶಾಲಿಟಿ ಆಸ್ಪತ್ರೆಯಲ್ಲಿ ಹಂತ ಹಂತವಾಗಿ ಆರೋಗ್ಯ ಸೇವೆ ಆರಂಭಿಸಬೇಕು. ನಂತರದ ದಿನಗಳಲ್ಲಿ ಆಸ್ಪತ್ರೆ ಉದ್ಘಾಟನೆಗೆ ಕ್ರಮ ವಹಿಸುವಂತೆ ಅವರು ಸೂಚನೆ ನೀಡಿದರು.
2022-23ನೇ ಸಾಲಿನಲ್ಲಿ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಶಾಲೆಗಳಲ್ಲಿ ಅಗತ್ಯವಿರುವ ಡೆನ್ನಗಳನ್ನು ಶೀಘ್ರದಲ್ಲಿ ಪೂರೈಸಬೇಕು. ಮುಂದಿನ ಸಭೆಯೊಳಗಾಗಿ ಶಾಲೆಗಳಿಗೆ ಡೆಸ್ಟ ಪೂರೈಕೆಯಾಗುವಂತೆ ಕ್ರಮ ವಹಿಸಲು ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲೆಯಲ್ಲಿ ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗಾಗಿ ಕೈಗೊಳ್ಳಲಾದ ಕ್ರಮಗಳ ಕುರಿತು ಮಾಹಿತಿ ಪಡೆದುಕೊಂಡ ಸಚಿವರು, ಜಿಲ್ಲೆಯಲ್ಲಿ ಫಲಿತಾಂಶ ಸುಧಾರಿಸಲು ಸರ್ವಕ್ರಮ ಕೈಗೊಳ್ಳುವಂತೆ ತಿಳಿಸಿದರು.
ಕೊಳಗೆರಿ ನಿವಾಸಿಗಳಿಗೆ ಹಕ್ಕು ಪತ್ರಗಳನ್ನು ಮೂರು ತಿಂಗಳೊಳಗಾಗಿ ವಿತರಿಸಬೇಕು. ಈ ಕುರಿತು ಜಿಲ್ಲಾಧಿಕಾರಿಗಳು ಸಭೆ ಜರುಗಿಸಿ ಶೀಘ್ರವೆ ಹಕ್ಕುಪತ್ರಗಳ ವಿತರಣೆಗೆ ಕ್ರಮ ಜರುಗಿಸಲು ತಿಳಿಸಿದ ಅವರು ಕೊಳಗೇರಿ ಇಲಾಖೆ ಅಧಿಕಾರಿಗಳು ಆಯಾ ವಿಧಾನ ಸಭೆ ಶಾಸಕರುಗಳೊಂದಿಗೆ ಚರ್ಚಿಸಲು ಸೂಚಿಸಿದರು.
ಜಿಲ್ಲೆಯ ಜಲಾಶಯಗಳಲ್ಲಿ ಕೈಗಾರಿಕಾ ಉದ್ದೇಶಕ್ಕೆ ಮೀಸಲಿಟ್ಟಿರುವ ನೀರಿನ ಪ್ರಮಾಣದ ಬಗ್ಗೆ ಸಮಗ್ರ ಮಾಹಿತಿ ಹಾಗೂ ಸರಕಾರದ ಆದೇಶವನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು.
ವಿಕಲಚೇತನರಿಗೆ ವಿತರಿಸಲಾಗುವ ತ್ರಿಚಕ್ರ ವಾಹನಗಳನ್ನು ಶಾಸಕರೊಂದಿಗೆ ಚರ್ಚಿಸಿ ಶೀಘ್ರವೇ ವಿತರಿಸಬೇಕು. ಪಶುಪಾಲನಾ ಇಲಾಖೆಯಲ್ಲಿ ಪಶು ವೈದ್ಯಾಧಿಕಾರಿಗಳನ್ನು ಕೂಡಲೇ ನೇಮಿಸಬೇಕು.
ಮಾಸಿಕ ಕೆ.ಡಿ.ಪಿ. ಸಭೆ ಮಹತ್ವದ ಸಭೆಯಾಗಿದ್ದು ಸಭೆಯ ಗಂಭೀರತೆಯನ್ನು ಅರಿತು ಅಧಿಕಾರಿಗಳು ಸಮಗ್ರ ಮಾಹಿತಿಯೊಂದಿಗೆ ಸಭೆಗೆ ಹಾಜರಾಗಬೇಕು ಕೆ.ಡಿ.ಪಿ. ಸಭೆಗೆ ಗೈರು ಹಾಜರಾದ ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಸಚಿವ ಸತೀಶ ಜಾರಕಿಹೊಳಿ ಅವರು, ಅಂತಹ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಸೂಚನೆ ನೀಡಿದರು.
ಚಿಕ್ಕೋಡಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯವೈಖರಿ ಕುರಿತು ದೂರುಗಳು ಬಂದ ಹಿನ್ನೆಲೆಯಲ್ಲಿ ಅವರ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳುವಂತೆ ಜಿಲ್ಲಾಧಿಕಾರಿಗಳು ಮತ್ತು ಜಿಪಂ ಸಿಇಓ ಅವರಿಗೆ ನಿರ್ದೇಶನ ನೀಡಿದರು.
ಸರಕಾರದ ದೆಹಲಿ ವಿಶೇಷ ಪ್ರತಿನಿಧಿ-2 ಪ್ರಕಾಶ ಹುಕ್ಕೇರಿ ಅವರು ಮಾತನಾಡಿ, ಗ್ರಾಮೀಣ ಭಾಗದ ಮಕ್ಕಳಿಗೆ ಉತ್ತಮ ಶಿಕ್ಷಣ ಒದಗಿಸುವ ನಿಟ್ಟಿನಲ್ಲಿ ಸಾಕಷ್ಟು ಅನುದಾನ ಒದಗಿಸುತ್ತಿದೆ. ಆದರೂ ಕೂಡ ಗ್ರಾಮೀಣ ಭಾಗದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ, ಅಗತ್ಯ ಮೂಲ ಸೌಕರ್ಯಗಳನ್ನು ಪೂರೈಸಲು ಸಾಧ್ಯವಾಗುತ್ತಿಲ್ಲ ಎಂದ ಅವರು ಚಿಕ್ಕೋಡಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ಕಾರ್ಯವೈಖರಿಗಳ ಬಗ್ಗೆ ಅಸಮಾಧಾನ ವ್ಯಕ್ತ ಪಡಿಸಿದರು.
ಶಾಸಕರಾದ ರಾಜು ಕಾಗೆ ಅವರು ಮಾತನಾಡಿ, ತಾಲೂಕು ಕೇಂದ್ರಗಳಿಗೆ ನೇಮಕಾತಿ ಹೊಂದಿರುವ ಪಶು ವೈದ್ಯಾಧಿಕಾರಿಗಳು ತಾಲೂಕು ಕೇಂದ್ರಗಳಲ್ಲಿಯೇ ಕಾರ್ಯ ನಿರ್ವಹಿಸುವಂತೆ ನಿರ್ದೇಶನ ನೀಡುವಂತೆ ಸೂಚಿಸಿದರು. ಪ್ರಾಥಮಿಕ ಆರೋಗ್ಯ ಕೇಂದ್ರ, ತಾಲೂಕು ಆಸ್ಪತ್ರೆಗಳಲ್ಲಿ ನುರಿತ ವೈದ್ಯರು ಹಾಗೂ ಅಗತ್ಯದ ಚಿಕಿತ್ಸೆ ಪರಿಕರಗಳನ್ನು ಒದಗಿಸಲು ಕ್ರಮ ವಹಿಸಬೇಕು ಎಂದರು.
ಶಾಲಾ ಕಟ್ಟಡಗಳ ನಿರ್ಮಾಣಕ್ಕೆ ಸಂಬಂಧಿಸಿದ ಇಲಾಖೆಗಳು ಪರಸ್ಪರ ಸಮನ್ವಯದೊಂದಿಗೆ ಕಾರ್ಯನಿರ್ವಹಿಸುವಂತೆ ತಿಳಿಸಿದರು.
ಕೊಳಗೇರಿ ನಿವಾಸಿಗಳಿಗೆ ನಿವೇಶನ ಹಾಗೂ ಹಕ್ಕುಪತ್ರಗಳನ್ನು ವಿತರಿಸುವ ಕಾರ್ಯ ಕಾಲಮಿತಿಯಲ್ಲಿ ಪೂರ್ಣವಾಗಬೇಕು. ಈ ಕಾರ್ಯದಲ್ಲಿ ವಿಳಂಬಕ್ಕೆ ಆಸ್ಪದ ನೀಡದಂತೆ ನಿಗಾವಹಿಸುವಂತೆ ತಿಳಿಸಿದರು.
ವಿಧಾನ ಪರಿಷತ್ ಸದಸ್ಯ ನಾಗರಾಜ ಯಾದವ ಅವರು ಮಾತನಾಡಿ, ಕಳೆದ ಎರಡು ವರ್ಷಗಳಿಂದ ಗ್ರಾಮೀಣ ಭಾಗದ ಶಾಲೆಗಳಲ್ಲಿ ಮೂಲ ಸೌಕರ್ಯಗಳನ್ನು ಪೂರೈಸಲಾಗುತ್ತಿಲ್ಲ ಇದರಿಂದ ಗುಣಮಟ್ಟದ ಶಿಕ್ಷಣ ನೀಡಲು ಸಾಧ್ಯವಾಗುವುದಿಲ್ಲ ಎಂದು ಅಸಮಾಧಾನ ವ್ಯಕ್ತ ಪಡಿಸಿದರು.
ವೈದ್ಯಕೀಯ ಕಾಲೇಜುಗಳ ವ್ಯಾಪ್ತಿಗೆ ಬರುವ ಜಿಲ್ಲಾ ಆಸ್ಪತ್ರೆಗಳ ಆಡಳಿತದಲ್ಲಿ ಜಿಲ್ಲಾಡಳಿತಕ್ಕೆ ಪ್ರಮುಖ ಜವಾಬ್ದಾರಿ ನೀಡಲು ಸರಕಾರದ ಮಟ್ಟದಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ಮಾಡಿಕೊಂಡರು.
ಶಾಲೆಗಳಿಗೆ ಮೂಲಸೌಕರ್ಯಗಳನ್ನು ಕಾಲಮಿತಿಯಲ್ಲಿ ಒದಗಿಸಬೇಕು ಎಂದು ಒತ್ತಾಯಿಸಿದ ಪರಿಷತ್ ಸದಸ್ಯ ನಾಗರಾಜ್ ಯಾದವ ಅವರು, ಜಿಲ್ಲೆಯಲ್ಲಿ ಉದ್ಯೋಗ ಸೃಷ್ಟಿಗಾಗಿ ಹೆಚ್ಚಿನ ಪ್ರಮಾಣದಲ್ಲಿ ಕೈಗಾರಿಕೆ ಸ್ಥಾಪನೆಗೆ ಅವಕಾಶ ಒದಗಿಸಬೇಕು ಎಂದು ಸಲಹೆ ನೀಡಿದರು.
ಹಿಡಕಲ್ ಜಲಾಶಯದಿಂದ ಹುಬ್ಬಳ್ಳಿ-ಧಾರವಾಡ ಕೈಗಾರಿಕೆಗಳಿಗೆ ನೀಡುವ ಕುರಿತು ಮಾಹಿತಿಯನ್ನು ಕೇಳಿದ ಶಾಸಕ ಆಸಿಫ್(ರಾಜು) ಸೇಶ್ ಅವರು, ಹಿಡಕಲ್ ಜಲಾಶಯದಿಂದ ಕೈಗಾರಿಕಾ ಉದ್ದೇಶಕ್ಕಾಗಿ ನೀರು ಕೊಂಡೊಯ್ಯಲು ಇದುವರೆಗೆ ಅನುನತಿ ನೀಡಿರದಿದ್ದರೆ ತಕ್ಷಣವೇ ಕಾಮಗಾರಿಯನ್ನು ತಡೆಹಿಡಿಯಬೇಕು ಎಂದು ಸಭೆಯಲ್ಲಿ ಒತ್ತಾಯಿಸಿದರು.
ವಿಧಾನ ಪರಿಷತ್ ಸದಸ್ಯ ಸಾಬಣ್ಣ ತಳವಾರ ಮಾತನಾಡಿ, ನಗರದ ಕೆಲವು ಸರಕಾರಿ ಶಾಲೆಗಳಿಗೆ ಪರಿಷತ್ ಸದಸ್ಯರ ಕ್ಷೇತ್ರಾಭಿವೃದ್ಧಿ ಅನುದಾನದಡಿ ಶಾಲೆಗಳ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಬೇಕಾದರೆ ತಾಂತ್ರಿಕ ತೊಂದರೆಯಾಗುತ್ತಿದ್ದು, ಅದನ್ನು ಸರಿಪಡಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಸಾಬಣ್ಣ ತಳವಾರ ತಿಳಿಸಿದರು.
ರಾಜ್ಯಸಭಾ ಸದಸ್ಯರಾದ ಈರಣ್ಣ ಕಡಾಡಿ ಅವರು ಮಾತನಾಡಿ ಗ್ರಾಮೀಣಭಾಗದ ಜನವಸತಿ ಪ್ರದೇಶಗಳಲ್ಲಿ ನಿರಂತರ ಜ್ಯೋತಿ ಯೋಜನೆಯಡಿ ವಿದ್ಯುತ್ ಪೂರೈಸಲು ತಿಳಿಸಿದರು. ಬೆಳಗಾವಿಯಲ್ಲಿ ಆಟೋಮೊಬೈಲ್ ಕೈಗಾರಿಕೆಗಳ ಸ್ಥಾಪನೆಗೆ ಉತ್ತಮ ಅವಕಾಶವಿರುವುದರಿಂದ ಇದಕ್ಕಾಗಿ ಜಮೀನು ಗುರುತಿಸಿ ಕೈಗಾರಿಕೋದ್ಯಮಿಗಳಿಗೆ ಆಹ್ವಾನ ನೀಡಬೇಕಿದೆ ಎಂದು ಕಡಾಡಿ ಸಲಹೆ ನೀಡಿದರು.
ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ ಅವರು ಮಾತನಾಡಿ, ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಕುರಿತು ಈಗಾಗಲೇ ಸಭೆ ಜರುಗಿಸಲಾಗಿದೆ. ಸಾರ್ವಜನಿಕರು ಹೆಚ್ಚಿನ ಬಡ್ಡಿ ಆಸೆಗಾಗಿ ಸಾಲ ಪಡೆದು ಮೋಸ ಹೊಗುತ್ತಿದ್ದು, ಇದನ್ನು ನಿಯಂತ್ರಿಸಲು ಕ್ರಮ ವಹಿಸಲಾಗುವುದು.
ಹಿಡಕಲ್ ಜಲಾಶಯದಿಂದ 0.58 ಟಿಎಂಸಿ ನೀರನ್ನು ಕಿತ್ತೂರು ಹಾಗೂ ಧಾರವಾಡ ಕೈಗಾರಿಕಾ ಪ್ರದೇಶಗಳಿಗೆ ನೀರು ಹಂಚಿಕೆ ನಿಯಮಾನುಸಾರ ಮಾಡಲಾಗಿರುತ್ತದೆ. ಜಲಾಶಯದ ಹಿನ್ನೀರಿನಿಂದ ನೀರು ಪಡೆಯುತ್ತಿಲ್ಲ. ಇದರ ಬದಲಾಗಿ ಜಲಾಶಯದಿಂದ ಬಿಡುಗಡೆ ಮಾಡಲಾದ ನೀರನ್ನು ಮಾತ್ರ ಪಡೆಯಲು ಅವಕಾಶವಿರುತ್ತದೆ ಎಂದು ತಿಳಿಸಿದರು.
ಜಿಲ್ಲಾ ಪಂಚಾತಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಅವರು ಮಾತನಾಡಿ, ಜಿಲ್ಲೆಯ ಶಾಲೆಗಳಿಗೆ ಬೇಕಾದ ಬೆಂಚಗಳನ್ನು ಪೂರೈಸಲು ಕ್ರಮ ವಹಿಸಲಾಗುವದು. ಜಿಲ್ಲೆಯ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಸುಧಾರಣೆಗೆ ವಿಶೇಷ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಈ ಬಾರಿ ಜಿಲ್ಲೆಯ ಫಲಿತಾಂಶವನ್ನು ಮೊದಲ ಹತ್ತು ಸ್ಥಾನಗಳಲ್ಲಿ ಬರುವಂತೆ ಕ್ರಮ ವಹಿಸಲಾಗುತ್ತಿದೆ ಎಂದು ತಿಳಿಸಿದರು.
ಕಿತ್ತೂರು ತಾಲ್ಲೂಕಿನ ಪಶು ಆಸ್ಪತ್ರೆಗಳಿಗೆ ಕೂಡಲೇ ವೈದ್ಯರನ್ನು ನಿಯೋಜಿಸಬೇಕು ಎಂದು ಶಾಸಕ ಬಾಬಾಸಾಹೇಬ್ ಪಾಟೀಲ ಒತ್ತಾಯಿಸಿದರು.
ಜಿಲ್ಲಾಪೋಲಿಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ ಅವರು ಮಾತನಾಡಿ, ಮೈಕ್ರೋ ಫೈನಾನ್ಸ್ ಕಿರಿಕಳಕ್ಕೆ ಸಂಬಂಧಿಸಿದಂತೆ ಜಾಗೃತಿ ಮೂಡಿಸುವ ಕಾರ್ಯವಾಗುತ್ತಿದೆ. ಈ ಕುರಿತು ಬ್ಯಾಂಕ್ ಅಧಿಕಾರಿಗಳ ಸಭೆ ಆಯೋಜಸಲಾಗುತ್ತಿದೆ. ಮೂರನೇ ವ್ಯಕ್ತಿ ಹೆಸರಿನಲ್ಲಿ ಸಾಲ ಪಡೆಯದಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದರು.
ಸಭೆಯಲ್ಲಿ ಶಾಸಕರುಗಳಾದ ವಿಠಲ ಹಲಗೇಕರ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ವಿನಯ ನಾವಲಗಟ್ಟಿ, ನಾಮನಿರ್ದೇಶಿತ ಸದಸ್ಯರು, ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಗ್ರಾಮ ಪಂಚಾಯತಗಳಲ್ಲಿ ಸೇವೆ ಸಲ್ಲಿಸುವಾಗ ಮರಣ ಹೊಂದಿದ ನೌಕರರ 21 ಅವಲಂಬಿತರಿಗೆ ಅನುಕಂಪದ ಆಧಾರದ ಮೇಲೆ ನೇಮಕಾತಿ ಪತ್ರಗಳನ್ನು ವಿತರಿಸಲಾಯಿತು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ