Cancer Hospital 2
Laxmi Tai Society2
Beereshwara add32

*ದೆಹಲಿ ಚಲೋ: ಪ್ರತಿಭಟನೆಗೆ ಕರೆ ಕೊಟ್ಟ ಡಿಸಿಎಂ ಡಿ.ಕೆ.ಶಿವಕುಮಾರ್*

Anvekar 3

ಪ್ರಗತಿವಾಹಿನಿ ಸುದ್ದಿ: “ಕೇಂದ್ರ ಬಜೆಟ್ ನಲ್ಲಿ ಕರ್ನಾಟಕ ರಾಜ್ಯಕ್ಕೆ ನಿರಂತರ ಅನ್ಯಾಯವಾಗುತ್ತಿದೆ. ಕೇಂದ್ರದ ಮಲತಾಯಿ ಧೋರಣೆಯಿಂದ ಕಳೆದ ಐದು ವರ್ಷಗಳಲ್ಲಿ ರಾಜ್ಯಕ್ಕೆ 62 ಸಾವಿರ ಕೋಟಿ ಹಣ ನಷ್ಟವಾಗಿದೆ. ಹೀಗಾಗಿ ಕಾಂಗ್ರೆಸ್ ಫೆ. 7 ರಂದು ಕರ್ನಾಟಕ ಸರಕಾರವು ದೆಹಲಿಯಲ್ಲಿ ಪ್ರತಿಭಟನೆ ನಡೆಸಲಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಡಿ.ಕೆ. ಶಿವಕುಮಾರ್, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಾನು ಸೇರಿದಂತೆ ರಾಜ್ಯದ ಸಚಿವರು, ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು ಈ ಪ್ರತಿಭಟನೆಯಲ್ಲಿ ಭಾಗವಹಿಸುತ್ತೇವೆ.

ಪ್ರತಿಭಟನೆ ಸ್ಥಳಾವಕಾಶದ ಬಗ್ಗೆ ಕೆಂದ್ರಕ್ಕೆ ಪತ್ರ ಬರೆದಿದ್ದು, ಅನುಮತಿ ಸಿಕ್ಕ ಸ್ಥಳದಲ್ಲಿ ಪ್ರತಿಭಟನೆ ನಡೆಸುತ್ತೇವೆ.

ಪ್ರಜಾತಂತ್ರ ವ್ಯವಸ್ಥೆಯಲ್ಲಿ ಪ್ರತಿಭಟನೆ ನಮ್ಮ ಮೂಲಭೂತ ಹಕ್ಕು. ಕಾಂಗ್ರೆಸ್ ಜನಪ್ರತಿನಿಧಿಗಳು ಭಾಗವಹಿಸಲಿರುವ ಈ ಪ್ರತಿಭಟನೆಯಲ್ಲಿ ಪ್ರತಿಪಕ್ಷದ ಸಂಸದರು. ಶಾಸಕರು ಭಾಗವಹಿಸಬೇಕು ಎಂದು ಮನವಿ ಮಾಡುತ್ತೇನೆ.

2018-19ರಲ್ಲಿ ಕೇಂದ್ರ ಸರ್ಕಾರದ ಬಜೆಟ್ ಗಾತ್ರ 24.5 ಲಕ್ಷ ಕೋಟಿ ಇತ್ತು. 2023-24ನೇ ಸಾಲಿನಲ್ಲಿ ಕೇಂದ್ರ ಸರ್ಕಾರದ ಬಜೆಟ್ ಗಾತ್ರ ದುಪ್ಪಟ್ಟಾಗಿದ್ದು 45 ಲಕ್ಷ ಕೋಟಿಯಾಗಿದೆ. 2018-19ರಲ್ಲಿ ಕೇಂದ್ರ ಸರ್ಕಾರದ ಬಜೆಟ್ ನಲ್ಲಿ ರಾಜ್ಯಕ್ಕೆ 46 ಸಾವಿರ ಕೋಟಿ ಅನುದಾನ ಸಿಕ್ಕಿತ್ತು. ಆದರೆ 2024-25ನೇ ಸಾಲಿನಲ್ಲಿ ರಾಜ್ಯಕ್ಕೆ ಬಂದಿರುವ ಅನುದಾನ ಕೇವಲ 50 ಸಾವಿರ ಕೋಟಿ ಮಾತ್ರ. ಕೇಂದ್ರ ಸರ್ಕಾರದ ಬಜೆಟ್ ಗಾತ್ರ ದುಪ್ಪಟ್ಟಾಗಿದ್ದರೂ ರಾಜ್ಯಕ್ಕೆ ಬರುವ ಅನುದಾನದ ಪ್ರಮಾಣದಲ್ಲಿ ಅತ್ಯಲ್ಪ ಏರಿಕೆ ಮಾತ್ರವಾಗಿದೆ.

ಕರ್ನಾಟಕ ರಾಜ್ಯ ದೇಶದಲ್ಲೇ ಪ್ರಗತಿಪರ ರಾಜ್ಯ. ಮಹಾರಾಷ್ಟ್ರ ಬಿಟ್ಟರೆ ಕೇಂದ್ರಕ್ಕೆ ಅತಿ ಹೆಚ್ಚು ತೆರಿಗೆ ಪಾವತಿ ಮಾಡುತ್ತಿರುವ ರಾಜ್ಯ ಕರ್ನಾಟಕ. ನಿನ್ನೆ ಬಜೆಟ್ ಅನ್ನು ನಾವೆಲ್ಲ ಗಮನಿಸಿದ್ದೇವೆ. ಕೇವಲ ನಿನ್ನೆಯ ಬಜೆಟ್ ಮಾತ್ರವಲ್ಲ. ಕಳೆದ ಐದು ವರ್ಷಗಳ ಬಜೆಟ್ ನೋಡಿದರೆ ನಮಗೆ ನಮ್ಮ ಪಾಲು ನ್ಯಾಯುತವಾಗಿ ಸಿಕ್ಕಿಲ್ಲ. ರಾಜ್ಯದ 28 ಸಂಸದರ ಪೈಕಿ 27 ಸಂಸದರು ಎನ್ಡಿಎ ಮೈತ್ರಿಕೂಟದವರೇ ಆಗಿದ್ದರೂ ನಮಗೆ ಸೂಕ್ತ ನ್ಯಾಯ ಸಿಗುತ್ತಿಲ್ಲ.

2018-19ರಿಂದ ಈಗಿನವರೆಗೂ ಕೇಂದ್ರ ಬಜೆಟ್ ಗಮನಿಸಿದರೆ ನಮ್ಮ ರಾಜ್ಯದ ಪಾಲಿನಲ್ಲಿ 40ರಿಂದ 45% ಪಾಲು ಕಡಿಮೆಯಾಗಿದೆ. ಇದರಿಂದಾಗಿ ನಮ್ಮ ರಾಜ್ಯದ ಮೇಲೆ ಸಾಲದ ಹೊರೆ ಹೆಚ್ಚಾಗುತ್ತಿದೆ. . ಇತ್ತೀಚೆಗೆ ನಡೆಸಿದ ಸಮೀಕ್ಷೆಯಲ್ಲಿ ಪ್ರತಿ ವರ್ಷ 7-10 ಸಾವಿರ ಕೋಟಿ ಅನುದಾನ ಕಡಿಮೆಯಾಗುತ್ತಾ ಬರುತ್ತಿದೆ.

14ನೇ ಹಣಕಾಸು ಆಯೋಗದ ಶಿಫಾರಸ್ಸಿನಂತೆ ಕರ್ನಾಟಕ ರಾಜ್ಯಕ್ಕೆ 4.71% ಪಾಲು ನೀಡಲಾಗಿತ್ತು. ಆದರೆ 15ನೇ ಹಣಕಾಸು ಆಯೋಗದಲ್ಲಿ ರಾಜ್ಯದ ಪಾಲನ್ನು 3.64% ಗೆ ಇಳಿಸಲಾಗಿದೆ. ಇದರಿಂದಾಗಿ ನಮಗೆ ಐದು ವರ್ಷಕ್ಕೆ 62 ಸಾವಿರ ಕೋಟಿಯಷ್ಟು ಹಣ ಕಡಿಮೆಯಾಗಿದೆ. ಇನ್ನು ವಿವಿಧ ರೀತಿಯಲ್ಲಿ ಕರ್ನಾಟಕ ರಾಜ್ಯಕ್ಕೆ ಘೋಷಣೆ ಮಾಡಿದ್ದ ಅನುದಾನ ಕೂಡ ಸರಿಯಾಗಿ ನೀಡಿಲ್ಲ.

ನೀರಾವರಿ ಯೋಜನೆಯಲ್ಲಿ ಭದ್ರ ಮೇಲ್ದಂಡೆ ಯೋಜನೆಗೆ 5,200 ಕೋಟಿ ನೀಡುವುದಾಗಿ ಘೋಷಣೆ ಮಾಡಿದ್ದರು. ಅದನ್ನು ನೀಡಿಲ್ಲ. ಇನ್ನು ಬೆಂಗಳೂರಿನಲ್ಲಿ ಮೆಟ್ರೋಗೆ ಕೂಡ ವಿವಿಧ ಹಂತದ ಯೋಜನೆ ಅನುದಾನ ನೀಡುವುದಾಗಿ ಹೇಳಿದ್ದರು. ನಾನು ಹಲವು ಬಾರಿ ಪ್ರಧಾನಿ, ಜಲಶಕ್ತಿ ಸಚಿವರು, ನಗರಾಭಿವೃದ್ಧಿ ಸಚಿವರಿಗೆ ಪತ್ರ ಬರೆದಿದ್ದೇನೆ. ನಮ್ಮ ರಾಜ್ಯದಿಂದ ಹೆಚ್ಚು ತೆರಿಗೆ ರವಾನೆಯಾಗುತ್ತಿದ್ದರೂ ನಮಗೆ ಮಲತಾಯಿ ಧೋರಣೆ ತೋರುತ್ತಿದ್ದೀರಿ. ಸಿದ್ದರಾಮಯ್ಯ ಅವರು ಪ್ರಧಾನಮಂತ್ರಿಗಳನ್ನು ಭೇಟಿ ಮಾಡಿ ಮನವಿ ಮಾಡಿದ್ದರು. ಆದರೂ ಯಾವುದೇ ಪ್ರಯೋಜನ ಆಗಿಲ್ಲ. ಇದರಿಂದಾಗಿ ನಮಗೆ ನಿರಾಸೆಯಾಗಿದೆ.

ನಮಗೆ ಆಗಿರುವ ಅನ್ಯಾಯದ ಬಗ್ಗೆ ರಾಜ್ಯದ ಜನರಿಗೆ ತಿಳಿಸಬೇಕು. ನಮ್ಮ ರಾಜ್ಯದಲ್ಲಿ ಬರಗಾಲ ಎದುರಾಗಿದೆ. ರಾಜ್ಯದ ಇತಿಹಾಸದಲ್ಲೇ ಅತಿ ಹೆಚ್ಚು ತಾಲೂಕುಗಳನ್ನು ಬರಪೀಡಿತ ಪ್ರದೇಶ ಎಂದು ಘೋಷಣೆ ಮಾಡಲಾಗಿದೆ. ಕೇಂದ್ರ ಬರ ನಿಯಮಾನುಸಾರ ನಾವು ಘೋಷಣೆ ಮಾಡಿದ್ದೇವೆ. ನಮ್ಮ ಹಣಕಾಸು ಹಾಗೂ ಕೃಷಿ ಸಚಿವರು ಕೇಂದ್ರ ಸಚಿವರನ್ನು ಭೇಟಿ ಮಾಡಿ ಮನವಿ ನೀಡಿದ್ದರು. ಸಂಸದರು ಕೂಡ ಸರ್ಕಾರದ ಮೇಲೆ ಒತ್ತಡ ಹಾಕಿ ರಾಜ್ಯಕ್ಕೆ ನ್ಯಾಯ ಒದಗಿಸಬೇಕು ಎಂದು ಮನವಿ ಮಾಡಿದ್ದೆವು. ಆದರೂ ನಯಾಪೈಸೆ ಹಣ ಬಂದಿಲ್ಲ.

ನರೇಗಾ ಯೋಜನೆ ಪ್ರಕಾರ ಬರ ಪೀಡಿತ ಪ್ರದೇಶಗಳಲ್ಲಿ ಮಾನವ ಕೂಲಿ ದಿನಗಳನ್ನು 100ರಿಂದ 150 ದಿನಗಳಿಗೆ ಹೆಚ್ಚಳ ಮಾಡಬೇಕು ಎಂದು ಕಾನೂನಿನಲ್ಲಿ ಇದೆ. ಯಾವುದೇ ಯೋಜನೆ ತೆಗೆದುಕೊಂಡರೂ ಕರ್ನಾಟಕ ರಾಜ್ಯಕ್ಕೆ ಅನ್ಯಾಯವಾಗಿದೆ. ಕೇಂದ್ರದ ಅನುದಾನದಲ್ಲಿ ಕರ್ನಾಟಕ ಮತ್ತು ಗುಜರಾತ್ ನಡುವೆ ನಾನು ಹೋಲಿಕೆ ಮಾಡಲು ಹೋಗುವುದಿಲ್ಲ. ಬೇರೆಯವರಿಗೆ ನೀವು ಎಷ್ಟಾದರೂ ನೀಡಿ ಆದರೆ ನಮಗೆ ನ್ಯಾಯಯುತವಾಗಿ ಸಿಗಬೇಕಾದ ನಮ್ಮ ಪಾಲನ್ನು ನೀಡಿ ಎಂದು ಕೇಳುತ್ತಿದ್ದೇವೆ.

ಬಿಜೆಪಿ ಸರ್ಕಾರ ಇದ್ದಾಗ ಡಬಲ್ ಇಂಜಿನ್ ಸರ್ಕಾರದಿಂದ ನಮಗೆ ಲಾಭ ಆಗಿರಬಹುದು ಎಂದು ಭಾವಿಸಿದ್ದೆವು. ಆದರೆ ಸಚಿವ ಸಂಪುಟದಲ್ಲಿ ಚರ್ಚೆ ಮಾಡಿದಾಗ ನಮ್ಮ ರಾಜ್ಯಕ್ಕೆ 62 ಸಾವಿರ ಕೋಟಿ ನಷ್ಟವಾಗಿದೆ. ಇದನ್ನು ಹೇಗೆ ಅರಗಿಸಿಕೊಳ್ಳುವುದು? ಕೇಂದ್ರ ಸರ್ಕಾರದ ಬಜೆಟ್ ಗಾತ್ರ ಡಬಲ್ ಆಗಿದ್ದರೂ ರಾಜ್ಯದ ಪಾಲಿನ ಅನುದಾನ ಮಾತ್ರ ಹೆಚ್ಚಳವಾಗಿಲ್ಲ ಎಂದರು.

ಕಾಂಗ್ರೆಸ್ ಸರ್ಕಾರದಿಂದ ಪ್ರತಿಭಟನೆ, ವಿರೋಧ ಪಕ್ಷದ ಸಂಸದರಿಗೂ ಆಹ್ವಾನ:
ಈ ಸಮಯದಲ್ಲಿ ನಾವು ಅನಿವಾರ್ಯವಾಗಿ ಹೋರಾಟ ಮಾಡಬೇಕಿದೆ. ಕರ್ನಾಟಕ ಸರ್ಕಾರ ಮುಖ್ಯಮಂತ್ರಿಗಳ ನೇತೃತ್ವದಲ್ಲಿ 136+2 ಒಟ್ಟು 138 ಶಾಸಕರು, ಎಲ್ಲಾ ಪರಿಷತ್ ಸದಸ್ಯರು ಫೆ.6ರಂದು ದೆಹಲಿಗೆ ತಲುಪಿ, ಫೆ.7ರಂದು ದೆಹಲಿಯಲ್ಲಿ ಪ್ರತಿಭಟನೆ ವ್ಯಕ್ತಪಡಿಸುತ್ತೇವೆ. ನಮ್ಮ ಧ್ವನಿಯನ್ನು ದೆಹಲಿ ಸರ್ಕಾರಕ್ಕೆ ಮುಟ್ಟಿಸಲು ಮುಂದಾಗಿದ್ದೇವೆ. ಫೆ.7ರಂದು ಬೆಳಗ್ಗೆ 10 ಗಂಟೆಗೆ ನಮಗೆ ಅನುಮತಿ ನೀಡುವ ಸ್ಥಳದಲ್ಲಿ ಪ್ರತಿಭಟನೆ ಮಾಡುತ್ತೇವೆ.

ಈ ಪ್ರತಿಭಟನೆಗೆ ರಾಜ್ಯದ ಎಲ್ಲಾ ಸಂಸದರಿಗೆ ಆಹ್ವಾನ ನೀಡಲಾಗುವುದು. ಎಲ್ಲರೂ ರಾಜ್ಯದ ಹಿತ ಕಾಯಲು ಪಕ್ಷಾತೀತವಾಗಿ ಹೋರಾಟ ಮಾಡಲು ತೀರ್ಮಾನಿಸಿದ್ದೇವೆ ಎಂದರು.

Emergency Service

ಪ್ರಶ್ನೋತ್ತರ:

ಈ ಹೋರಾಟಕ್ಕೆ ದೇವೇಗೌಡರಿಗೆ ಆಹ್ವಾನ ನೀಡುತ್ತೀರಾ ಎಂದು ಕೇಳಿದಾಗ, “ಕರ್ನಾಟಕ ರಾಜ್ಯದ ಹಿತ ಕಾಯುವ ಬಗ್ಗೆ ಭಕ್ತಿ, ಭಾವನೆ ಯಾರಿಗೆಲ್ಲಾ ಇದೆಯೋ ಅವರೆಲ್ಲರೂ ಈ ಹೋರಾಟದಲ್ಲಿ ಭಾಗವಹಿಸಬೇಕು ಎಂದು ನಮ್ರತೆಯಿಂದ ಮನವಿ ಮಾಡುತ್ತೇನೆ” ಎಂದು ತಿಳಿಸಿದರು.

ಈ ಹೋರಾಟವನ್ನು ಅಕಾಲದಲ್ಲಿ ಮಾಡುತ್ತಿಲ್ಲವೇ ಎಂದು ಕೇಳಿದಾಗ, “ನಾವು ಈ ಹೋರಾಟವನ್ನು ಅಕಾಲದಲ್ಲಿ ಅಲ್ಲ, ಸಕಾಲದಲ್ಲಿ ಮಾಡುತ್ತಿದ್ದೇವೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರ ಹಿತಕ್ಕಾಗಿ ಅವರಿಗೆ ಆಗುತ್ತಿರುವ ಅನ್ಯಾಯದ ವಿರುದ್ಧ ಹೋರಾಟ ಮಾಡಬೇಕು. ಇದರ ಬಗ್ಗೆ ಜನರಿಗೆ ತಿಳಿಸಬೇಕು. ಪ್ರತಿ ಮತದಾರರಿಗೂ ನ್ಯಾಯ ಒದಗಿಸಬೇಕು. ಹೀಗಾಗಿ ಈ ಹೋರಾಟ ಮಾಡಲಾಗುತ್ತಿದೆ” ಎಂದು ತಿಳಿಸಿದರು.

ತೆರಿಗೆ ಪಾವತಿಯಲ್ಲಿ ರಾಜ್ಯ ಎರಡನೇ ಸ್ಥಾನದಲ್ಲಿದ್ದರೂ ಅನ್ಯಾಯವಾಗುತ್ತಿರುವುದೇಕೆ ಎಂದು ಕೇಳಿದಾಗ, “ಜಿಎಸ್ಟಿ ಹಾಗೂ ವಿವಿಧ ತೆರಿಗೆ ರೂಪದಲ್ಲಿ ನಮ್ಮ ರಾಜ್ಯದಿಂದ ಕೇಂದ್ರ ಸರ್ಕಾರಕ್ಕೆ ಈ ವರ್ಷ 4 ಲಕ್ಷ ಕೋಟಿ ಹಣ ಸಂಗ್ರಹವಾಗಿದೆ. ಆದರೆ ಕೇಂದ್ರ ಸರ್ಕಾರದಿಂದ ನಮಗೆ ಕೇವಲ 50-53 ಸಾವಿರ ಕೋಟಿ ಮಾತ್ರ ವಾಪಸ್ ನೀಡಲಾಗುತ್ತಿದೆ. ಅಂದರೆ ಪ್ರತಿ ನೂರು ರೂಪಾಯಿಯ ತೆರಿಗೆಯನ್ನು ಕೇಂದ್ರ ಸರ್ಕಾರಕ್ಕೆ ನೀಡಿದರೆ ಅದರಲ್ಲಿ 12-13 ರೂಪಾಯಿ ಮಾತ್ರ ನಮ್ಮ ರಾಜ್ಯಕ್ಕೆ ವಾಪಸ್ ನೀಡಲಾಗುತ್ತಿದೆ. ಕರ್ನಾಟಕ ರಾಜ್ಯಕ್ಕೆ ಅನ್ಯಾಯವಾಗುತ್ತಿರುವುದಕ್ಕೆ ಇದಕ್ಕಿಂತ ಬೇರೆ ಸಾಕ್ಷಿ ಬೇಕಾಗಿಲ್ಲ” ಎಂದು ವಿವರಿಸಿದರು.

ಬಜೆಟ್ ಉತ್ತರ ಭಾಗದ ರಾಜ್ಯಗಳ ಪರವಾಗಿದೆಯೇ ದು ಕೇಳಿದಾಗ, “ಬಜೆಟ್ ನಲ್ಲಿ ಬೇರೆ ರಾಜ್ಯಗಳಿಗೆ ನೀಡಿರುವ ಅನುದಾನದ ಬಗ್ಗೆ ನಾನು ಮಾತನಾಡುವುದಿಲ್ಲ. ಆದರೆ ಕರ್ನಾಟಕ ರಾಜ್ಯಕ್ಕೆ ಭಾರಿ ಅನ್ಯಾಯವಾಗಿದೆ. ಕರ್ನಾಟಕಕ್ಕೆ ಬರಬೇಕಾದ ಪಾಲಿನ ಅನುದಾನ ಸಿಕ್ಕಿಲ್ಲ” ಎಂದು ತಿಳಿಸಿದರು.

ಪಕ್ಷದ ಸಭೆ ವಿಚಾರವಾಗಿ ಕೇಳಿದಾಗ, “ಸಂಸತ್ ಚುನಾವಣೆ ಅಭ್ಯರ್ಥಿಗಳನ್ನು ಅಂತಿಮ ಮಾಡಬೇಕು, ನಾವು ಎಲ್ಲರ ಅಭಿಪ್ರಾಯ ಪಡೆದಿದ್ದೇವೆ. ವೀಕ್ಷಕರಿಂದ ಅಭಿಪ್ರಾಯ ಪಡೆದಿದ್ದೇವೆ. ಕಾರ್ಯಕರ್ತರಿಗೂ ಸೂಕ್ತ ನಿರ್ದೇಶನ ನೀಡಿದ್ದೇವೆ” ಎಂದು ತಿಳಿಸಿದರು.

ಹುಟ್ಟುತ್ತಾ ಭಾರತೀಯ ಸಾಯುವಾಗಲೂ ಭಾರತೀಯ:
ಡಿ.ಕೆ. ಸುರೇಶ್ ಅವರ ಹೇಳಿಕೆ ವಿಚಾರವಾಗಿ ಬಿಜೆಪಿ ನಾಯಕರು ಕ್ಷಮೆಯಾಚನೆಗೆ ಆಗ್ರಹಿಸುತ್ತಿರುವ ಬಗ್ಗೆ ಕೇಳಿದಾಗ, “ನಾನು ಭಾರತೀಯ. ಹುಟ್ಟತ್ತಾ ಭಾರತೀಯನಾಗಿದ್ದೇನೆ. ಸಾಯುವಾಗಲೂ ಭಾರತೀಯನಾಗಿ ಸಾಯುತ್ತೇನೆ. ಭಾರತ ಅಖಂಡ ದೇಶ. ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ, ಪೂರ್ವದಿಂದ ಪಶ್ಚಿಮದವರೆಗೆ ಭಾರತವೊಂದೆ. ಬಿಜೆಪಿ ಈ ವಿಚಾರ ರಾಜಕೀಯಗೊಳಿಸುತ್ತಿದೆ. ಸಂಸದ ಸುರೇಶ್ ವರು ಬಿಜೆಪಿ ಸರ್ಕಾರದಿಂದ ಕರ್ನಾಟಕ ಹಾಗೂ ದಕ್ಷಿಣ ಭಾರತದ ರಾಜ್ಯಗಳಿಗೆ ಆಗಿರುವ ಅನ್ಯಾಯವನ್ನು ಪ್ರಶ್ನಿಸಿದ್ದಾರೆ. ಹೀಗೆ ಅನ್ಯಾಯ ಮುಂದುವರಿದರೆ ಮುಂದೆ ಇಂತಹ ಆಲೋಚನೆಗಳು ಬರಬಹುದು ಎಂದು ಎಚ್ಚರಿಕೆ ನೀಡಿದ್ದಾರೆ. ಸುರೇಶ್ ಕೂಡ ಭಾರತೀಯ. ಕಾಂಗ್ರೆಸಿಗನಾಗಿದ್ದು ಕಾಂಗ್ರೆಸ್ ಪಕ್ಷ ಈ ದೇಶವನ್ನು ಒಗ್ಗಟ್ಟಾಗಿಟ್ಟಿದೆ. ಕಾಂಗ್ರೆಸ್ ಪಕ್ಷ ಅಥವಾ ಕಾಂಗ್ರೆಸ್ ಸರ್ಕಾರಗಳು ದೇಶವನ್ನು ಸಮಾನತೆಯಿಂದ ನೋಡಿದೆ. ಬಿಜೆಪಿಯವರು ಬಜೆಟ್ ವಿಚಾರವಾಗಿ ಪ್ರತಿಕ್ರಿಯೆ ನೀಡಲಾಗದೇ ಈ ವಿಚಾರವನ್ನು ರಾಜಕೀಯಗೊಳಿಸುತ್ತಿದ್ದಾರೆ. ರಾಜ್ಯದ 27 ಸಂಸದರು ಒಂದು ದಿನವೂ ಪ್ರಧಾನಮಂತ್ರಿ, ಕೇಂದ್ರ ವಿತ್ತ ಸಚಿವರನ್ನು ಭೇಟಿ ಮಾಡಿ ರಾಜ್ಯದ ಹಿತದ ಬಗ್ಗೆ ಚರ್ಚೆ ಮಾಡಿಲ್ಲ. ಬೊಮ್ಮಾಯಿ ಅವರಾಗಲಿ, ಯಡಿಯೂರಪ್ಪ ಅವರಾಗಲಿ ರಾಜ್ಯದ ಬಗ್ಗೆ ತಮ್ಮ ನಾಯಕರ ಜತೆ ಮಾತನಾಡಿಲ್ಲ. ಅವರು ತಮ್ಮ ಸಮಸ್ಯೆಗಳಲ್ಲೇ ಮುಳುಗಿದ್ದಾರೆ. ಇವರ ಅವಧಿಯಲ್ಲೇ ರಾಜ್ಯಕ್ಕೆ ಹೆಚ್ಚು ಅನ್ಯಾಯವಾಗಿದೆ ಎಂಬುದನ್ನು ದಾಖಲೆಗಳು ಹೇಳುತ್ತಿವೆ” ಎಂದು ಸ್ಪಷ್ಟನೆ ನೀಡಿದರು.

ಮೇಕೆದಾಟು ವಿಚಾರದಲ್ಲಿ ಎಲ್ಲಾ ಸಂಸದರು ಧ್ವನಿ ಎತ್ತಲಿ:
ಮೇಕೆದಾಟು ಯೋಜನೆ ವಿಚಾರವಾಗಿ ಕೇಳಿದ ಪ್ರಶ್ನೆಗೆ ಉತ್ತರಿಸಿ, “ಮೇಕೆದಾಟು ವಿಚಾರವಾಗಿ ಕರ್ನಾಟಕಕ್ಕೆ ಹೊಸ ಆಯಾಮ ಶುರುವಾಗಿದೆ. ನಿನ್ನೆ ಸಭೆಯಲ್ಲಿ ಮತಗಳನ್ನು ಹಾಕಲಾಗಿದೆ. ತಾಂತ್ರಿಕ ಸಮಿತಿಗೆ ತೀರ್ಮಾನವಾಗಿದೆ. ನಮ್ಮ ನೀರು ನಮ್ಮ ಹಕ್ಕು. ಅದನ್ನು ಬಳಸಿಕೊಂಡು ಅವರ ಪಾಲಿನ ನೀರನ್ನು ಖಂಡಿತವಾಗಿಯೂ ನೀಡುತ್ತೇವೆ. ಈ ವಿಚಾರವಾಗಿ ನಾವು ಅವರಿಗೆ ಮನದಟ್ಟು ಮಾಡುತ್ತೇವೆ. ಕೇಂದ್ರ ಸರ್ಕಾರ ಕೂಡ ಪರಿಸರ ಇಲಾಖೆ ಅನುಮತಿ ನೀಡಿ ಸಹಕಾರ ನೀಡಬೇಕಾಗುತ್ತದೆ. ಎಲ್ಲಾ ಸಂಸದರು ಒಟ್ಟಾಗಿ ಧ್ವನಿ ಎತ್ತಲಿ ಎಂದು ಮನವಿ ಮಾಡುತ್ತೇನೆ” ಎಂದು ತಿಳಿಸಿದರು.

ನಾವು ತಪ್ಪು ಮಾಡಿದ್ದರೆ, ಡಬಲ್ ಇಂಜಿನ್ ಸರ್ಕಾರ ಸರಿಪಡಿಸಲಿಲ್ಲ ಯಾಕೆ?
14 ಮತ್ತು 15ನೇ ಹಣಕಾಸು ಆಯೋಗದ ಅನುದಾನ ಹಂಚಿಕೆಯಲ್ಲಿ ಕುಸಿತಕ್ಕೆ ಆಗಿನ ಕಾಂಗ್ರೆಸ್ ಸರ್ಕಾರ ಸರಿಯಾಗಿ ವಿಚಾರ ಮಂಡನೆ ಮಾಡಿಲ್ಲ ಎಂಬ ಬಿಜೆಪಿ ನಾಯಕರ ಆರೋಪದ ಬಗ್ಗೆ ಕೇಳಿದಾಗ, “ನಮ್ಮಿಂದ ತಪ್ಪಾಗಿದ್ದರೆ ಅವರು ಏನು ಮಾಡುತ್ತಿದ್ದರು? ನಮ್ಮ ತಪ್ಪನ್ನು ಸರಿಪಡಿಸಬಹುದಾಗಿತ್ತಲ್ಲವೇ? ಅವರದ್ದು ಡಬಲ್ ಇಂಜಿನ ಸರ್ಕಾರ ಇತ್ತಲ್ಲವೇ. ರಾಜ್ಯಕ್ಕೆ ಬರಬೇಕಾದ ಅನುದಾನ ತರುವುದು ಡಬಲ್ ಇಂಜಿನ್ ಸರ್ಕಾರದ ಜವಾಬ್ದಾರಿ ಆಗಿರಲಿಲ್ಲವೇ? ಆ ಸರ್ಕಾರ ಜನರ ಹಿತಕ್ಕೆ ವಿರುದ್ಧವಾಗಿ ಕೆಲಸ ಮಾಡಿತ್ತು. ನಾವು ಸೂಕ್ತ ದಾಖಲೆಗಳನ್ನು ಸಲ್ಲಿಸಿದ್ದು, ಈಗಲಾದರೂ ಕೇಂದ್ರ ಬಿಜೆಪಿ ಸರ್ಕಾರ ಸರಿಪಡಿಸಲಿ” ಎಂದು ಸವಾಲೆಸೆದರು.

ದೇವೇಗೌಡರ ಸ್ಥಿತಿ ನೋಡಿದರೆ ನನಗೂ ಭಯವಾಗುತ್ತದೆ:
ಕುಮಾರಸ್ವಾಮಿ ಕೇಸರಿ ಶಾಲು ಹಾಕಿಕೊಳ್ಳಬಾರದಿತ್ತು, ಅವರು ಪಕ್ಷದ ಶಾಲು ಹಾಕಿಕೊಳ್ಳಬೇಕಿತ್ತು. ನಾನು ಕೇಸರಿ ಶಾಲು ಹಾಕುವುದಿಲ್ಲ ಎಂಬ ದೇವೇಗೌಡರ ಹೇಳಿಕೆ ಬಗ್ಗೆ ಕೇಳಿದಾಗ, “ಕುಮಾರಸ್ವಾಮಿ ಅವರು ಬಿಜೆಪಿ ವಕ್ತಾರರಾಗಿದ್ದಾರೆ. ದೇವೇಗೌಡರಿಗೆ ಇಷ್ಟು ನೋವು ತರುತ್ತಾರೆ ಎಂದು ನಂಬಲು ಸಾಧ್ಯವಾಗುತ್ತಿಲ್ಲ. ದೇವೇಗೌಡರ ಸಿದ್ಧಾಂತವನ್ನು ನಾನು ಕಂಡಿದ್ದೇನೆ. ಮಕ್ಕಳಿಗಾಗಿ ಅವರು ಏನೆಲ್ಲಾ ಮಾಡಬೇಕು. ನನಗೆ ವಯಸ್ಸಾದ ಮೇಲೆ ನಮ್ಮ ಮನೆಗಳಲ್ಲಿ ಯಾವೆಲ್ಲಾ ಸಮಸ್ಯೆಗಳು ಬರುತ್ತವೆಯೋ ಗೊತ್ತಿಲ್ಲ. ಇದನೆಲ್ಲಾ ನೋಡಿದರೆ ನನಗೂ ಭಯವಾಗುತ್ತದೆ. ಪರಿಸ್ಥಿತಿ ನಾವು ನಂಬಿದ ಸಿದ್ಧಾಂತಕ್ಕೆ ವಿರುದ್ಧವಾಗಿ ಹೋಗಬೇಕಾಗುವಂತೆ ಮಾಡುತ್ತದೆ. ಮರಕ್ಕೆ ಬೇರು ಎಷ್ಟು ಮುಖ್ಯವೋ ಮನುಷ್ಯನಿಗೆ ನಂಬಿಕೆ ಅಷ್ಟೇ ಮುಖ್ಯ” ಎಂದು ತಿಳಿಸಿದರು.

ಕುಮಾರಸ್ವಾಮಿ ಕುಟುಂಬದವರು ಕಲ್ಲು ಹೊಡೆದಿರುವ ಪಟ್ಟಿ ನೀಡಲೇ:
ಕನಕಪುರದಲ್ಲಿ ಕಲ್ಲು ಹೊಡೆಯುವವರನ್ನು ಶಾಸಕರು ಸಂಸದರನ್ನಾಗಿ ಮಾಡಿದರೆ ದೇಶ ಒಡೆಯುತ್ತಾರೆ ಎಂಬ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಕನಕಪುರದ ಜನರನ್ನು ಕೇಳಿ. ಅವರು ಅವರ ಮನೆಯವರೂ ಕಲ್ಲು ಹೊಡೆಯುತ್ತಿದ್ದರಲ್ಲ. ಅದರ ಪಟ್ಟಿ ನೀಡಲಾ? ಎಲ್ಲ ಪಟ್ಟಿ ನೀಡಲು ಕಳೆದ ಅಧಿವೇಶನದಲ್ಲಿ ಕದುಕುಳಿತಿದ್ದೆ” ಎಂದು ತಿಳಿಸಿದರು.

ಕಾರ್ಯಕರ್ತರಿಗೆ ನಿಗಮ ಮಂಡಳಿ ನೇಮಕ ವಿಚಾರವಾಗಿ ಕೇಳಿದಾಗ, “ಬಜೆಟ್ ತಯಾರಿ ವಿಚಾರವಾಗಿ ನಾನು ಹಾಗೂ ಮುಖ್ಯಮಂತ್ರಿಗಳು ನಿರತವಾಗಿದ್ದೆವು. ಈ ವಿಚಾರವಾಗಿ ಯಾರಿಗೆ ಯಾವ ನಿರ್ದೇಶನ ನೀಡಬೇಕೋ ನೀಡಿದ್ದೇವೆ” ಎಂದು ತಿಳಿಸಿದರು.

ಮಾಜಿ ಸಚಿವ ಬಿ.ಶಿವರಾಮ್ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಯಾರೋಬ್ಬರೂ ಅನಗತ್ಯವಾಗಿ ಮಾಧ್ಯಮಗಳ ಮುಂದೆ ಮಾತನಾಡುವಂತಿಲ್ಲ. ಮಾತನಾಡಿದರೆ ಶೋಕಾಸ್ ನೋಟೀಸ್ ಜಾರಿ ಮಾಡುತ್ತೇವೆ” ಎಂದು ತಿಳಿಸಿದರು.

Gokak Jyotishi add 8-2
Bottom Add3
Bottom Ad 2

You cannot copy content of this page