Kannada NewsKarnataka NewsLatestPoliticsUncategorized

*ಬೊಮ್ಮಾಯಿ ಅವರ ಧಮ್ಮು ತಾಕತ್ತಿಗೆ ಜನ ಈಗಾಗಲೇ ಉತ್ತರ ನೀಡಿದ್ದಾರೆ; ಮಾಜಿ ಸಿಎಂ ಗೆ ಟಾಂಗ್ ನೀಡಿದ ಡಿ.ಕೆ.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ನಾವು ರಾಜ್ಯದ ಜನರಿಗೆ ಐದು ಗ್ಯಾರಂಟಿ ನೀಡಿದ್ದು, ಅದರಲ್ಲಿ ಅನ್ನಭಾಗ್ಯ ಯೋಜನೆ ಮೂಲಕ 10 ಕೆ.ಜಿ ಅಕ್ಕಿ ನೀಡುವುದಾಗಿ ವಾಗ್ದಾನ ನೀಡಿದ್ದೇವೆ. ಹೆಚ್ಚುವರಿ 5 ಕೆ.ಜಿ ಅಕ್ಕಿ ಖರೀದಿಗೆ ಭಾರತೀಯ ಆಹಾರ ನಿಗಮ ಆರಂಭದಲ್ಲಿ ಒಪ್ಪಿಗೆ ನೀಡಿತ್ತು. ಆದರೆ ರಾಜಕೀಯ ಉದ್ದೇಶದಿಂದ ರಾಜ್ಯದಲ್ಲಿ ಅನ್ನಭಾಗ್ಯ ಯೋಜನೆ ವಿಫಲಗೊಳಿಸಲು ಇದೀಗ ಅಕ್ಕಿ ನೀಡಲು ನಿರಾಕರಿಸಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ವಾಗ್ದಾಳಿ ನಡೆಸಿದರು.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಬಡವರಿಗೆ ಬಿಜೆಪಿಯ ಕೇಂದ್ರ ಸರ್ಕಾರ ಮೋಸ ಮಾಡಿದೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರದಿದ್ದರೆ ಕೇಂದ್ರದ ಯೋಜನೆ ಕಟ್ ಮಾಡುತ್ತೇವೆ ಎಂದು ನಡ್ದಾ ಅವರು ಹೇಳಿದ್ದರು. ಈಗ ಅವರು ಹೇಳಿದಂತೆ ನಡೆದುಕೊಳ್ಳುತ್ತಿದ್ದಾರೆ ಎಂದು ಕಿಡಿಕಾರಿದರು.

ಕೇಂದ್ರ ಅಕ್ಕಿ ನೀಡದಿದ್ದರೂ ನಾವು ಬೇರೆ ರಾಜ್ಯಗಳ ಜತೆ ಮಾತನಾಡಿ ಅಲ್ಲಿಂದ ಅಕ್ಕಿ ಖರೀದಿ ಮಾಡುತ್ತೇವೆ. ಸ್ವಲ್ಪ ತಡವಾದರೂ ನಾವು ನಮ್ಮ ಯೋಜನೆ ಜಾರಿ ಮಾಡಿಯೇ ಮಾಡುತ್ತೇವೆ. ನಾವು ಈ ಯೋಜನೆಯಲ್ಲಿ ಕೇವಲ ಒಂದು ಪಕ್ಷದವರಿಗೆ ಮಾತ್ರ ಅಕ್ಕಿ ನೀಡುತ್ತಿಲ್ಲ. ಸರ್ವರಿಗೂ ಸಮಬಾಳು ಸಮಪಾಲು ಎಂಬಂತೆ ಪಕ್ಷ, ಧರ್ಮ ಭೇದವಿಲ್ಲದೆ ಎಲ್ಲರಿಗೂ ನೀಡುತ್ತಿದ್ದೇವೆ. ಒಂದು ವೇಳೆ ಕೇಂದ್ರ ಸರ್ಕಾರ ಸಹಕಾರ ನೀಡಿದ್ದರೆ ಜನರ ಹೊಟ್ಟೆ ತುಂಬುತ್ತಿತ್ತು. ಅಕ್ಕಿ ನೀಡುವುದು ನಮ್ಮ ಜವಾಬ್ದಾರಿ. ಪಾರದರ್ಶಕವಾಗಿ ಅಕ್ಕಿ ಖರೀದಿ ಮಾಡಿ ಜನರಿಗೆ ನೀಡುತ್ತೇವೆ ಎಂದರು.

ಇದೇ ವೇಳೆ ಕಾಂಗ್ರೆಸ್ ನವರಿಗೆ ಧಮ್ಮು, ತಾಕತ್ತಿದ್ದರೆ ಪ್ರತಿಯೊಬ್ಬರಿಗೂ 15 ಕೆಜಿ ಅಕ್ಕಿ ಕೊಡಲಿ ಎಂಬ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಸವಾಲಿಗೆ ಪ್ರತಿಕ್ರಿಯಿಸಿದ ಡಿ.ಕೆ.ಶಿವಕುಮಾರ್, ಬೊಮ್ಮಾಯಿ ಅವರ ಧಮ್ಮು, ತಾಕತ್ತಿಗೆ ಈಗಗಲೇರಾಜ್ಯದ ಜನರು ಉತ್ತರ ಕೊಟ್ಟಿದ್ದಾರೆ ಎಂದು ಟಾಂಗ್ ನೀಡಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button