ನೀರಿನ ಸಮಸ್ಯೆ ನಿವಾರಣೆಗೆ ರೂ. 556 ಕೋಟಿ ಮೀಸಲು
ಪ್ರಗತಿವಾಹಿನಿ ಸುದ್ದಿ: ನಗರದ ಎಲ್ಲಾ ನೀರಿನ ಟ್ಯಾಂಕರ್ ಮಾಲೀಕರು ಮಾ. 7 ತಾರೀಕಿನ ವೇಳೆಗೆ ನೋಂದಣಿ ಮಾಡಿಸದಿದ್ದರೆ ಸೀಜ್ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಖಡಕ್ ಎಚ್ಚರಿಕೆ ನೀಡಿದರು.
ಕುಡಿಯುವ ನೀರಿನ ಸಮಸ್ಯೆ ವಿಚಾರವಾಗಿ ಬಿಬಿಎಂಪಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು ಹೇಳಿದ್ದಿಷ್ಟು;
ಬೆಂಗಳೂರಿನಲ್ಲಿ 3,500 ಟ್ಯಾಂಕರ್‌ಗಳು ಇದ್ದು, ಕೇವಲ 219 ಟ್ಯಾಂಕರ್‌ಗಳು ಅಂದರೆ ಕೇವಲ ಶೇ 10 ರಷ್ಟು ಮಾತ್ರ ನೋಂದಣಿ ಮಾಡಿಸಿಕೊಂಡಿವೆ. ಚಿಕ್ಕ, ದೊಡ್ಡ, ಹಾಲಿನ ಟ್ಯಾಂಕರ್‌ಗಳನ್ನು ಶೀಘ್ರ ಸರ್ಕಾರದ ವಶಕ್ಕೆ ಪಡೆಯಲಾಗುವುದು. ಬಿಡಬ್ಲ್ಯೂ ಎಸ್‌ಎಸ್‌ಬಿ ಅವರು 210 ಟ್ಯಾಂಕರ್‌ಗಳನ್ನು ಈಗಾಗಲೇ ನೀರಿನ ಪೂರೈಕೆಗೆ ಬಳಸುತ್ತಿದ್ದಾರೆ.
ನೀರು ಸರ್ಕಾರಕ್ಕೆ ಸೇರಿದ್ದು
ನೀರು ಸರ್ಕಾರಕ್ಕೆ ಸೇರಿದ್ದು. ಯಾವುದೇ ವೈಯಕ್ತಿಕ ವ್ಯಕ್ತಿಗೆ ಸೇರಿದ್ದಲ್ಲ. ಯಾವ ನೀರನ್ನು ಬೇಕಾದರೂ ನಿಯಂತ್ರಣಕ್ಕೆ ತೆಗೆದುಕೊಳ್ಳುವ ಹಕ್ಕು ಸರ್ಕಾರಕ್ಕೆ ಇದೆ. ಬೆಂಗಳೂರು ಹೊರವಲಯದಲ್ಲಿ ಅಂತರ್ಜಲ ನೀರಿನ ಮಟ್ಟ ಹೆಚ್ಚಿರುವ ಕಡೆಯಿಂದಲೂ ನೀರಿನ ಪೂರೈಕೆ ಮಾಡಲು ಸಿದ್ದರಾಗಿ ಇರಬೇಕು ಎಂದು ಅಧಿಕಾರಿಗಳಿಗೆ ತಿಳಿಸಲಾಗಿದೆ. ನೀರಿನ ಸಮಸ್ಯೆ ಬಗೆಹರಿಸಲು ಚುನಾವಣಾ ನೀತಿ ಸಂಹಿತೆ ಅಡ್ಡ ಬರುವುದಿಲ್ಲ.
ಸಮಸ್ಯೆ ಬಗೆಹರಿಸಲು ರೂ. 556 ಕೋಟಿ ಮೀಸಲು
ಬೆಂಗಳೂರು ನಗರದ ಎಲ್ಲಾ ಶಾಸಕರಿಗೆ ನೀರಿನ ಸಮಸ್ಯೆ ಬಗೆಹರಿಸಲು 10 ಕೋಟಿ ಅನುದಾನ ನೀಡಲಾಗಿದೆ. ಬಿಬಿಎಂಪಿಗೆ 148 ಕೋಟಿ, ಬಿಡಬ್ಲ್ಯೂ ಎಸ್‌ಎಸ್‌ಬಿ ಯಿಂದ 128 ಕೋಟಿ ಒಟ್ಟು 556 ಕೋಟಿ ಹಣವನ್ನು ಕುಡಿಯುವ ನೀರಿನ ಪೂರೈಕೆಗೆ ಮೀಸಲಿಡಲಾಗಿದೆ.
ನೀರಿನ ಸಮಸ್ಯೆ ಬಗೆಹರಿಸಲು ಬಿಬಿಎಂಪಿ ಸಹಾಯವಾಣಿ ಮತ್ತು ವಾರ್ಡ್ ವಾರು ದೂರು ಕೇಂದ್ರಗಳನ್ನು ತೆರೆಯಲಾಗುವುದು. ಸಮಸ್ಯೆ ಆಲಿಸಲು ವಾರ್ ರೂಂಗಳು ಕೆಲಸ ನಿರ್ವಹಿಸಲಿವೆ. ಹಿರಿಯ ಅಧಿಕಾರಿಗಳು ಸೇರಿದಂತೆ ನಾನು ಸಹ ಪದೇ, ಪದೇ ಪರಿಶೀಲನೆ ನಡೆಸುತ್ತೇನೆ.
ಕುಡಿಯುವ ನೀರನ್ನು ಪೂರೈಕೆ ಮಾಡುವುದು ಸರ್ಕಾರದ ಜವಾಬ್ದಾರಿ. ಬೆಂಗಳೂರಿನ ಜನತೆ ಗಾಬರಿಯಾಗುವುದು ಬೇಡ. ಪ್ರತಿಯೊಬ್ಬರಿಗೂ ನೀರು ನೀಡುವುದು ನಮ್ಮ ಕರ್ತವ್ಯ.
ನಗರದಲ್ಲಿವೆ 15 ಸಾವಿರ ಕೊಳವೆಬಾವಿಗಳು
ಪ್ರಸ್ತುತ ನಗರದಲ್ಲಿ 15 ಸಾವಿರ ಕೊಳವೆ ಬಾವಿಗಳಿವೆ. ದಾಖಲೆಗಳ ಪ್ರಕಾರ 16,781 ಕೊಳವೆ ಬಾವಿಗಳಿವೆ. ಇದರಲ್ಲಿ 6,997 ಕೊಳವೆ ಬಾವಿಗಳು ಬತ್ತಿ ಹೋಗಿದ್ದು, 7,784 ಕೊಳವೆ ಬಾವಿಗಳು ಚಾಲ್ತಿಯಲ್ಲಿವೆ.
ಹೊಸ ಕೊಳವೆ ಬಾವಿ ಕೊರೆಸಲು ಸ್ಥಳೀಯ ಗುತ್ತಿಗೆದಾರರು ಮತ್ತು ತಮಿಳುನಾಡಿನ ಕೊಳವೆಬಾವಿ ಕೊರೆಯುವವರ ನಡುವೆ ದರದ ವಿಚಾರವಾಗಿ ಒಂದಷ್ಟು ಗೊಂದಲಗಳಿದ್ದು ಇದನ್ನು ಶೀಘ್ರ ಬಗೆಹರಿಸಲಾಗುವುದು.
ನೀರು ಪೂರೈಕೆಗೆ ಹಾಲಿನ ಟ್ಯಾಂಕರ್ ಗಳು
ನಿರುಪಯುಕ್ತ ಹಾಲಿನ ಟ್ಯಾಂಕರ್ ಗಳನ್ನು ನೀರು ಸರಬರಾಜಿಗೆ ಬಳಕೆ ಮಾಡಲು ಸೂಚಿಸಲಾಗಿದೆ. ಕೆಎಂಎಫ್ ವ್ಯಾಪ್ತಿಯ ಎಲ್ಲಾ ಘಟಕಗಳಿಂದ ಟ್ಯಾಂಕರ್‌ಗಳನ್ನು ತರಿಸಿ ಸ್ವಚ್ಚಗೊಳಿಸಿ ಬಲಸಬೇಕು ಎಂದು ಹೇಳಲಾಗಿದೆ. ಈ ಟ್ಯಾಂಕರ್ ಗಳನ್ನು ನೀರಿನ ಸಮಸ್ಯೆ ಬಗೆಹರಿಯುವ ತನಕ ಬಳಸಬೇಕು ಎಂದು ಸೂಚಿಸಲಾಗಿದೆ.
ಟ್ಯಾಂಕರ್ ನೀರು ಪೂರೈಕೆಗೆ ರೂ.500 ರಿಂದ 2 ಸಾವಿರದ ವರೆಗೂ ವಸೂಲಿ ಮಾಡುತ್ತಿದ್ದಾರೆ. ಈ ಗೊಂದಲವನ್ನು ಅಸೋಸಿಯೇಷನ್ ಬಳಿ ಮಾತನಾಡಿ ನೀರಿನ ದರವನ್ನು ಕಿ.ಮೀಗೆ ಇಂತಿಷ್ಟು ಎಂದು ನಿಗದಿ ಮಾಡಲಾಗುವುದು.
110 ಹಳ್ಳಿಗಳಿಗೆ ಮೇ ಅಂತ್ಯದ ವೇಳೆಗೆ ಕಾವೇರಿ ನೀರು ಪೂರೈಕೆ ಮಾಡಲಾಗುವುಸು. 775 ಎಂಎಲ್ ಡಿ ನೀರು ಆದಷ್ಟು ಬೇಗ ಜನರಿಗೆ ಪೂರೈಸಲಾಗುವುದು.
ನಿಷ್ಕ್ರಿಯವಾಗಿರುವ ಎಲ್ಲಾ ಶುದ್ದ ಕುಡಿಯುವ ನೀರಿನ ಘಟಕಗಳು ಚಾಲನೆಯಾಗಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಈ ಸಮಸ್ಯೆ ನಿವಾರಣೆಗೆ ಜವಾಬ್ದಾರಿಯುತ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ.
ಸಂಬಂಧಪಟ್ಟ ಎಲ್ಲಾ ಇಲಾಖೆಯವರಿಗೆ ಮುಖ್ಯವಾಗಿ ಬೆಸ್ಕಾಂ ಅವರಿಗೆ ನಗರದಲ್ಲಿ ಚಾಲನೆಯಲ್ಲಿ ಇರುವ ಕೃಷಿ, ವಾಣಿಜ್ಯ ಬಳಕೆಯ ಕೊಳವೆ ಬಾವಿಗಳನ್ನು ದಾಖಲಿಸಬೇಕು ಎಂದು ಸೂಚನೆ ನೀಡಲಾಗಿದೆ.
ನಾಗರಿಕರು ಸಹ ಅನಗತ್ಯವಾಗಿ ನೀರನ್ನು ಬಳಕೆ ಮಾಡಬಾರದು. ಉದ್ಯಾನಗಳಿಗೆ, ಇತರೇ ಬಳಕೆಗೆ ಸಂಸ್ಕರಿಸಿದ ನೀರನ್ನು ಪೂರೈಸಲಾಗುವುದು. ಬೀಕರ ಬರಗಾಲದಲ್ಲಿ ನೀರಿನ ಮಿತ ಬಳಕೆ ಮಾಡಬೇಕು.
ಕಾವೇರಿ 5 ನೇ ಹಂತಕ್ಕೆ 2 ಕಿಮೀ ನಷ್ಟು ಸಮಸ್ಯೆ ಇದೆ. ಅರಣ್ಯ ಭೂಮಿ ಮತ್ತು ಒಂದು ಕಡೆ ಕಲ್ಲು ಅಡ್ಡ ಬಂದಿರುವ ಕಾರಣ ಸಮಸ್ಯೆ ಉಂಟಾಗಿದೆ. ಶೀಘ್ರ ಈ ತೊಡಕು ನಿವಾರಣೆಯಾಗುವುದು. ಮೇ ಅತ್ಯಂತ ವೇಳೆಗೆ ನೀರು ಪೂರೈಕೆಯಾಗುವುದು ಎಂದು ತಿಳಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ