*ಈಗ ಜೆಡಿಎಸ್ ಎಲ್ಲಿದೆ? ಅಳಿಯನನ್ನೇ ಬಿಜೆಪಿಗೆ ಕಳುಹಿಸಿ ಪಕ್ಷ ವಿಸರ್ಜನೆ ಮಾಡುವ ಸ್ಥಿತಿಯಲ್ಲಿದ್ದಾರೆ; ಡಿಸಿಎಂ ವ್ಯಂಗ್ಯ*
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಜೆಡಿಎಸ್ ಎಲ್ಲಿದೆ? ಜೆಡಿಎಸ್ ಗೆ ಅವರೇ ಮುಕ್ತಿ ಕೊಟ್ಟಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಟಾಂಗ್ ನೀಡಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಜೆಡಿಎಸ್ ಇರಬೇಕು ಎಂಬ ಆಸೆ ನನಗಿದೆ. ಆದರೆ ಅಳಿಯನನ್ನೇ ಬಿಜೆಪಿಗೆ ಕಳುಹಿಸಿ ಜೆಡಿಎಸ್ ವಿಸರ್ಜನೆ ಮಾಡುವ ಸ್ಥಿತಿಗೆ ಹೋಗಿದ್ದಾರೆ. ನಾವು ಹಿಂದೆ ಒಂದು ತಪ್ಪು ಮಾಡಿದ್ದೆವು. ಆದರೆ ಈಗ ಅದಕ್ಕಿಂತ ದೊಡ್ಡ ತಪ್ಪು ಜೆಡಿಎಸ್ ನವರು ಮಾಡಿದ್ದಾರೆ ಎಂದು ಟೀಕಿಸಿದರು.
ನಾನು ಸ್ವಾಮೀಜಿಗಳನ್ನು ರಾಜಕೀಯಕ್ಕೆ ಎಳೆಯುತ್ತಿಲ್ಲ. ಸ್ವಾಮೀಜಿಗಳಿಗೆ ಕೊಡಬೇಕಾದ ಗೌರವ ನಾವು ಕೊಡಬೇಕು ಎಂದು ಹೇಳುತ್ತಿದ್ದೇನೆ. ಮೈತ್ರಿ ಸರ್ಕಾರದ ವೇಳೆ ಕುಮಾರಸ್ವಾಮಿ ಹಾಗೂ ಕೆಲವು ಮಂತ್ರಿಗಳು ಸ್ವಾಮೀಜಿಗಳ ಕಾರ್ಯಕ್ರಮಕ್ಕೆ ಹೋಗಿದ್ದರು. ಅವರು ವಾಪಸ್ ಬರುವ ವೇಳೆಗೆ ಆಪರೇಷನ್ ಕಮಲ ನಡೆದಿತ್ತು. ಸ್ವಾಮೀಜಿಗಳಿಗೂ ಒಕ್ಕಲಿಗ ವ್ಯಕ್ತಿ ಸಿಎಂ ಆಗಿರುವ ಬಗ್ಗೆ ಅಭಿಮಾನ ಇರುತ್ತದೆ. ಆದರೆ ಈಗ ಒಕ್ಕಲಿಗ ಸಿಎಂಅನ್ನು ತೆಗೆದವರನ್ನೇ ಜತೆಗೆ ಕರೆದುಕೊಂಡು ಹೋದರೆ ಹೇಗೆ? ಎಂದು ಕೇಳಿದರು.
ಸ್ವಾಮೀಜಿಗಳ ಆಶೀರ್ವಾದ ಎಲ್ಲರಿಗೂ ಬೇಕು. ಹೀಗಾಗಿ ಚೆಲುವರಾಯಸ್ವಾಮಿ ಅವರು ನಮ್ಮ ಅಭ್ಯರ್ಥಿಗಳನ್ನು ಕರೆದುಕೊಂಡು ಹೋಗಿದ್ದರು. ಅದೇ ರೀತಿ ಇವರು ಕೂಡ ಆಶೀರ್ವಾದ ಪಡೆಯಲು ಹೋಗಿದ್ದಾರೆ. ಕುಮಾರಸ್ವಾಮಿ, ಮಂಜುನಾಥ್ ಅವರು ಸ್ವಾಮೀಜಿಗಳ ಆಶೀರ್ವಾದ ಕೇಳಿದ್ದರಲ್ಲಿ ತಪ್ಪೇನಿಲ್ಲ. ಆದರೆ ಸರ್ಕಾರ ತೆಗೆದವರನ್ನೇ ಜತೆಯಲ್ಲಿ ಕರೆದುಕೊಂಡು ಹೋಗಿದ್ದಾರೆ. ಇದರಿಂದ ಅವರು ಸಮಾಜಕ್ಕೆ ಏನು ಉತ್ತರ ನೀಡುತ್ತಾರೆ ಎಂದು ಕೇಳಿದ್ದೇನೆ ಅಷ್ಟೇ ಎಂದು ಹೇಳಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ