Kannada NewsKarnataka NewsLatestPolitics

*ರಾಜಕೀಯಕ್ಕಾಗಿ ತಂದೆ ಮಗಳ ದೂರ ಮಾಡಿದ ಅಪವಾದ ಬೇಡ ಎಂದ ಡಿ.ಕೆ.ಶಿವಕುಮಾರ್*

ನಿಶಾ ಯೋಗೇಶ್ವರ್ ಕಾಂಗ್ರೆಸ್ ಸೇರ್ತಾರಾ?

ಪ್ರಗತಿವಾಹಿನಿ ಸುದ್ದಿ: ಕಾಂಗ್ರೆಸ್ ಸೇರುವ ನಿಟ್ಟಿನಲ್ಲಿ ಪ್ರಯತ್ನಿಸುತ್ತಿದ್ದೇನೆ ಎಂಬ ಸಿ.ಪಿ.ಯೋಗೇಶ್ವರ್ ಮಗಳು ನಿಶಾ ಯೋಗೇಶ್ವರ್ ಹೇಳಿಕೆಗೆ ಪ್ರತಿಕ್ರಿಯಿಸಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ಆಕೆ ನಮ್ಮ ಮನೆ ಮಗಳಂತೆ. ಆಕೆ ನಮ್ಮ ಬಳಿ ಬಂದು ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಇಂಗಿತ ವ್ಯಕ್ತಪಡಿಸಿದರು. ಅವರ ತಾಯಿ ನನಗೆ ಪರಿಚಯ. ಅವರಿಗೆ ರಕ್ಷಣೆ ಇಲ್ಲ. ತಂದೆ ಸ್ಥಾನದಲ್ಲಿ ನಿಂತು ನನ್ನನ್ನು ಸ್ವೀಕಾರ ಮಾಡಿ ಎಂದು ಕೇಳಿದಳು. ರಾಜಕಾರಣಕ್ಕಾಗಿ ತಂದೆ ಮಗಳ ಬೇರೆ ಮಾಡುವುದು ಸರಿಯಲ್ಲ ಎಂದು ಹೇಳಿದರು.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ, ಆಕೆಗೆ ಮದುವೆ ಮಾಡಬೇಕು, ಧಾರೆ ಎರೆದು ಅಕ್ಷತೆ ಹಾಕಬೇಕು. ಅದನ್ನು ತಂದೆಯೇ ಮಾಡಬೇಕು. ಹೀಗಾಗಿ ರಾಜಕೀಯಕ್ಕಾಗಿ ತಂದೆ ಮಗಳನ್ನು ಬೇರೆ ಮಾಡಲು ಇಷ್ಟವಿಲ್ಲ. ಆಕೆ ಬಂದು ತಮ್ಮ ಕಷ್ಟ ಹೇಳಿಕೊಂಡಿದ್ದಾಳೆ. ಆಕೆ ಪ್ರಬುದ್ಧ ಯುವತಿ. ಆಕೆಗೆ ರಾಜಕಾರಣದಲ್ಲಿನ ಆಯ್ಕೆಗೆ ಸ್ವಾತಂತ್ರ್ಯವಿದೆ. ಆಕೆ ಇನ್ನೂ ಯೋಗೇಶ್ವರ್ ಅವರ ಕುಟುಂಬದ ಮೇಲೆ ಅವಲಂಬಿತವಾಗಿದ್ದಾರೆ ಎಂದರು.

ಅವರನ್ನು ಪಕ್ಷಕ್ಕೆ ಸೇರಿಸಿಕೊಂಡರೆ ರಾಜಕೀಯಕ್ಕೆ ಅಪ್ಪ ಮಗಳನ್ನು ದೂರ ಮಾಡಿದರು ಎಂದು ಜನ ಪ್ರಶ್ನೆ ಮಾಡಬಹುದು. ಯೋಗೇಶ್ವರ್ ಜತೆ ಇರುವ ಬಿಜೆಪಿ ಕಾರ್ಯಕರ್ತರೇ ಆಕೆಗೆ ಕಾಂಗ್ರೆಸ್ ಸೇರುವಂತೆ ಸಲಹೆ ನೀಡಿದ್ದಾರೆ. ಆಕೆ ವಿವಾಹವಾಗಿ ಬೇರೆ ಕುಟುಂಬಕ್ಕೆ ಸೇರಿದ್ದರೆ, ನಾವು ಇಷ್ಟು ಆಲೋಚನೆ ಮಾಡುತ್ತಿರಲಿಲ್ಲ. ಹೀಗಾಗಿ ನಾನು ನನ್ನ ಸಹೋದರ ಈ ವಿಚಾರವಾಗಿ ಬಹಳ ತಾಳ್ಮೆಯಿಂದ ಆಲೋಚನೆ ಮಾಡುತ್ತಿದ್ದೇವೆ ಎಂದರು.

ನಿಶಾ ಅವರು ಮಾಧ್ಯಮಗಳಿಗೆ ಕೊಟ್ಟ ಹೇಳಿಕೆ ಗಮನಿಸಿದೆ. ಆಕೆ ದೊಡ್ಡ ಧೈರ್ಯ ಮಾಡಿರುವಂತೆ ಕಾಣುತ್ತಿದೆ. ಕಾಂಗ್ರೆಸ್ ಪಕ್ಷದಲ್ಲೇ ಕೆಲಸ ಮಾಡುತ್ತೇನೆ ಎಂದು ಆಕೆ ತೀರ್ಮಾನ ಮಾಡಿದರೆ, ಆಕೆಯನ್ನು ಹೊರದಬ್ಬಲು ಆಗುವುದಿಲ್ಲ. ಹೀಗಾಗಿ ಸ್ಥಳೀಯ ನಾಯಕರ ಜೊತೆ ಚರ್ಚೆ ಮಾಡುತ್ತೇನೆ ಎಂದು ತಿಳಿಸಿದರು.

Related Articles

Back to top button