LatestUncategorized

*ಹಾಲಿ ಶಾಸಕರಿಗೆ ಟಿಕೆಟ್ ವಿಚಾರ; ಡಿ.ಕೆ.ಶಿವಕುಮಾರ್ ನೀಡಿದ ಸ್ಪಷ್ಟನೆಯೇನು?*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಇಂದು ಕಾಂಗ್ರೆಸ್ ಪಕ್ಷದ ಚುನಾವಣಾ ಸಮಿತಿ ಸಭೆ ನಡೆಯುತ್ತಿದೆ. ಪ್ರತಿ ಜಿಲ್ಲೆಯ ಆಕಾಂಕ್ಷಿಗಳ ಜತೆ ಚರ್ಚೆ ಮಾಡಿ ಕೆಲವು ಹೆಸರುಗಳನ್ನು ಶಿಫಾರಸ್ಸು ಮಾಡಲು ಪಕ್ಷದ ಕಾರ್ಯದರ್ಶಿಗಳು, ಕಾರ್ಯಾಧ್ಯಕ್ಷರು, ಚುನಾವಣಾ ಸಮಿತಿ ಸದಸ್ಯರಿಗೆ ಜವಾಬ್ದಾರಿ ನೀಡಲಾಗಿತ್ತು. ಇಂದು ಅವರ ಶಿಫಾರಸ್ಸುಗಳನ್ನು ನಮಗೆ ನೀಡಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ದೆಹಲಿ ನಾಯಕರು ಪ್ರತ್ಯೇಕ ಸಮೀಕ್ಷೆ ನಡೆಸಿದ್ದು, ನಾವೂ ಕೂಡ ಸಮೀಕ್ಷೆ ಮಾಡಿಸಿದ್ದೇವೆ. ಇದೆಲ್ಲವನ್ನು ಗಮನದಲ್ಲಿಟ್ಟುಕೊಂಡು ಸ್ಕ್ರೀನಿಂಗ್ ಕಮಿಟಿ ತೀರ್ಮಾನ ಮಾಡಲಿದೆ ಎಂದರು.

ಕೆಲವು ಕ್ಷೇತ್ರಗಳಲ್ಲಿ ಅಭ್ಯರ್ಥಿ ಆಯ್ಕೆ ಸವಾಲಾಗಿದೆಯಲ್ಲಾ ಎಂಬ ಪ್ರಶ್ನೆಗೆ, ‘ಯಾವುದೇ ಕ್ಷೇತ್ರಗಳಲ್ಲಿ ಅಭ್ಯರ್ಥಿ ಆಯ್ಕೆ ಸವಾಲಾಗಿಲ್ಲ. ನಮಗೆ ಗೆಲುವಿನ ಗುರಿ ಇದೆ. ಪಕ್ಷ ಅಧಿಕಾರಕ್ಕೆ ಬರಲಿದೆ ಎಂದು ಮತದಾರರು ವಿಶ್ವಾಸ ನೀಡಿರುವುದರಿಂದ ಆಕಾಂಕ್ಷಿಗಳು ಹೆಚ್ಚಾಗಿದ್ದಾರೆ. ಕೆಲವು ಕ್ಷೇತ್ರಗಳಲ್ಲಿ 10, 12, 20 ಅರ್ಜಿಗಳು ಬಂದಿವೆ. ಇಂತಹ ಕಡೆಗಳಲ್ಲಿ ಪಕ್ಷ ಅಧಿಕಾರಕ್ಕೆ ಬರಬೇಕಾದರೆ ತ್ಯಾಗ ಮಾಡಲೇಬೇಕು. ಪಕ್ಷ ಅಧಿಕಾರಕ್ಕೆ ಬಂದರೆ ಬೇರೆ, ಬೇರೆ ರೀತಿಯಲ್ಲಿ ಅವರಿಗೆ ಅಧಿಕಾರ ನೀಡಲಾಗುವುದು. ಹೀಗಾಗಿ ಪಕ್ಷದ ಟಿಕೆಟ್ ಗೆ ಆಸೆ ಪಟ್ಟು ಅರ್ಜಿ ಹಾಕಿರುವುದರಲ್ಲಿ ತಪ್ಪಿಲ್ಲ. ಪಕ್ಷ ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರಲು ನೀವೆಲ್ಲರೂ ಒಗ್ಗಟ್ಟಿನ ಸಹಕಾರ ನೀಡಬೇಕು ಎಂದು ಎಲ್ಲಾ ಆಕಾಂಕ್ಷಿಗಳಲ್ಲಿ ಕೇಳಿಕೊಳ್ಳುತ್ತೇನೆ ಎಂದು ತಿಳಿಸಿದರು.

ಮೊದಲ ಪಟ್ಟಿ ಬಿಡುಗಡೆ  ವಿಚಾರವಾಗಿ, ಇಂದು ಸಭೆಯಲ್ಲಿ ಅಭ್ಯರ್ಥಿಗಳ ಪಟ್ಟಿ ಒಂದು ಹಂತಕ್ಕೆ ಬರಲಿದೆ. ನಂತರ ಕೇಂದ್ರ ಚುನಾವಣಾ ಸಮಿತಿಯು ಪರಿಶೀಲಿಸಿ ಪ್ರಕಟಿಸಲಿದೆ  ಎಂದು ತಿಳಿಸಿದರು.

ಹಾಲಿ ಶಾಸಕರಿಗೆ ಟಿಕೆಟ್ ಸಿಗುವುದೇ ಎಂಬ ವಿಚಾರವಾಗಿ ಕೇಳಿದ ಪ್ರಶ್ನೆಗೆ, ನಮ್ಮ ಪಕ್ಷದ ಎಲ್ಲಾ ಶಾಸಕರು ಉತ್ತಮವಾಗಿ ಕೆಲಸ ಮಾಡಿಕೊಂಡು ಬಂದಿದ್ದು, ಬಿಜೆಪಿ ಸಹಕಾರ ನೀಡದಿದ್ದರೂ ನಮ್ಮ ಶಾಸಕರು ಜನರಮಧ್ಯೆ ನಿಂತು ಕೆಲಸ ಮಾಡಿದ್ದಾರೆ. ಹೀಗಾಗಿ ಬಹುತೇಕ ಎಲ್ಲ ಹಾಲಿ ಶಾಸಕರಿಗೆ ಟಿಕೆಟ್ ಸಿಗಲಿದೆ ಎಂದು ಸ್ಪಷ್ಟಪಡಿಸಿದರು.

ಜನಾರ್ದನ ರೆಡ್ಡಿ ಅವರು ಕಲ್ಯಾಣ ಕರ್ನಾಟಕ ಭಾಗದಲ್ಲಿ ಯಾತ್ರೆ ಬಗ್ಗೆ  ಅವರವರ ಪಕ್ಷದ ವಿಚಾರವಾಗಿ ಯಾರು ಏನಾದರೂ ಮಾಡಿಕೊಳ್ಳಲಿ. ಅವರ ಸಿದ್ಧಾಂತ ಬೇರೆ, ನಮ್ಮ ಸಿದ್ಧಾಂತ ಬೇರೆ. ನಮ್ಮ ನಾಯಕತ್ವ ಬೇರೆ, ಅವರ ನಾಯಕತ್ವ ಬೇರೆ. ಯಾರು ಏನೆಲ್ಲಾ ಶ್ರಮ ಹಾಕುತ್ತಾರೋ ಹಾಕಲಿ, ಎಲ್ಲರಿಗೂ ಒಳ್ಳೆಯದಾಗಲಿ. ನಮ್ಮದು ಇತಿಹಾಸವಿರುವ, ಜನರ ಮಧ್ಯೆ ಇದ್ದು, ಅವರ ಸೇವೆ ಮಾಡಿ, ಅವರ ಜೀವನದಲ್ಲಿ ಬದಲಾವಣೆ ತರುವ ಪಕ್ಷ. ಅದರ ಬಗ್ಗೆ ನಾವು ಚರ್ಚೆ ಮಾಡುತ್ತೇವೆ’ ಎಂದು ಹೇಳಿದರು.

ನಾಳೆಯಿಂದ ಪ್ರತ್ಯೇಕ ಯಾತ್ರೆ ನಡೆಸುತ್ತಿರುವುದರ ಬಗ್ಗೆ ಕೇಳಿದಾಗ, ‘ಇದು ಪ್ರತ್ಯೇಕ ಯಾತ್ರೆಯಲ್ಲ. ಜಿಲ್ಲಾ ಹಂತದಲ್ಲಿ ನಾವು ಯಾತ್ರೆ ಮುಗಿಸಿದ್ದು, ಈಗ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಯಾತ್ರೆ ಮಾಡುತ್ತಿದ್ದೇವೆ’ ಎಂದು ತಿಳಿಸಿದರು.

ಬೆಂಗಳೂರು ಹೊರವಲಯದ ಕ್ಲಾರ್ಕ್ ಎಕ್ಷಾರ್ಟಿಕದಲ್ಲಿ ಗುರುವಾರ 2023 ವಿಧಾನಸಭೆ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ಸಮಿತಿ ಸಭೆ ನಡೆಯಿತು.

ಸಭೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ ಕೆ ಹರಿಪ್ರಸಾದ್, ಪ್ರಚಾರ ಸಮಿತಿ ಅಧ್ಯಕ್ಷ ಬಿ ಕೆ ಹರಿಪ್ರಸಾದ್, ಮಾಜಿ ಸಿಎಂ ವೀರಪ್ಪ ಮೊಯ್ಲಿ ಮತ್ತಿತರ ನಾಯಕರು ಭಾಗವಹಿಸಿದ್ದರು.

 

 

*ಕೇಂದ್ರ ಬಜೆಟ್ ನಲ್ಲಿ ರಾಜ್ಯಕ್ಕೆ ಸಿಕ್ಕ ಕೊಡುಗೆಗಳೇನು? ಸಿಎಂ ಹೇಳಿದ್ದೇನು?*

https://pragati.taskdun.com/union-budget-2023cm-basavaraj-bommaiupper-bhadra-projectpressmeet/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button