*ಸಚಿವ ಡಿ.ಸುಧಾಕರ ನಿಧನ: ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸಂತಾಪ*

ಸುಧಾಕರ್ ಅಗಲಿಕೆಯಿಂದ ರಾಜಕೀಯ ಕ್ಷೇತ್ರಕ್ಕೆ ದೊಡ್ಡ ನಷ್ಟವುಂಟಾಗಿದೆ: ಸಿಎಂ ಸಿದ್ದರಾಮಯ್ಯ
ಪ್ರಗತಿವಾಹಿನಿ ಸುದ್ದಿ: ಯೋಜನೆ ಮತ್ತು ಸಾಂಖ್ಯಿಕ ಸಚಿವ ಸುಧಾಕರ್ ಅವರ ಅಗಲಿಕೆಯಿಂದ ರಾಜಕೀಯ ಕ್ಷೇತ್ರಕ್ಕೆ ದೊಡ್ಡ ನಷ್ಟವುಂಟಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಸದಾಶಿವ ನಗರದಲ್ಲಿರುವ ಸಚಿವ ಸುಧಾಕರ್ ಅವರ ನಿವಾಸದಲ್ಲಿ ಅಂತಿಮ ದರ್ಶನ ಪಡೆದು ಮಾಧ್ಯಮದವರೊಂದಿಗೆ ಮಾತನಾಡಿದರು.
ಸಹಕಾರ ಕ್ಷೇತ್ರಕ್ಕೂ ಕೊಡುಗೆ
ಸುಧಾಕರ್ ಅವರು ಮೂಲತಃ ಚಳ್ಳಕರೆಯವರು. 2008ರಿಂದ ಹಿರಿಯೂರು ಶಾಸಕರಾಗಿದ್ದರು. ಎರಡನೇ ಬಾರಿಗೆ ಮಂತ್ರಿಯಾಗಿದ್ದ ಅವರು ಅತ್ಯಂತ ಜನಪ್ರಿಯ ವ್ಯಕ್ತಿ. ಸಮಾಜ ಕಲ್ಯಾಣ ಸಚಿವರಾಗಿಯೂ ಕೆಲಸ ಮಾಡಿದ್ದಾರೆ. ಸಹಕಾರ ಕ್ಷೇತ್ರದಲ್ಲಿಯೂ ಸಾಕಷ್ಟು ಕೊಡುಗೆ ನೀಡಿರುವ ಅವರು ಡಿಸಿಸಿ ಬ್ಯಾಂಕ್ ಅಧ್ಯಕ್ಷರೂ ಆಗಿದ್ದರು. ಅಪೆಕ್ಸ್ ಬ್ಯಾಂಕ್ ನಿರ್ದೇಶಕರಾಗಿಯೂ ಕಾರ್ಯನಿರ್ವಹಿಸಿದ್ದರು. ಸುಧಾಕರ್ ಅವರ ಚಿಕ್ಕಪ್ಪ ಜಯಣ್ಣ ಕೂಡಾ ಶಾಸಕರಾಗಿದ್ದವರು. ರಾಜಕೀಯ ಕ್ಷೇತ್ರದಲ್ಲಿ ಅಪಾರ ಜನಪ್ರಿಯತೆ ಗಳಿಸಿಕೊಂಡಿದ್ದರು. ಚಳ್ಳಕೆರೆ ಎಸ್.ಟಿ ಮೀಸಲು ಕ್ಷೇತ್ರವಾಗಿದ್ದರಿಂದ ಹಿರಿಯೂರಿನಿಂದ ಸ್ಪರ್ಧಿಸಿ ಗೆದ್ದಿದ್ದರು ಎಂದು ವಿವರಿಸಿ, ರೈತರ ಹಾಗೂ ಬಡವರ ಪರವಾಗಿ ಸಾಕಷ್ಟು ಕೆಲಸ ಮಾಡಿದ್ದು, ಜನಪ್ರಿಯ ವ್ಯಕ್ತಿಯಾಗಿದ್ದರು ಎಂದರು.
ಆತ್ಮಕ್ಕೆ ಚಿರಶಾಂತಿ ದೊರಕಲಿ
ಸುಧಾಕರ್ ಅವರು ಪತ್ನಿ, ಪುತ್ರಿ ಹಾಗೂ ಪುತ್ರ ಸೇರಿದಂತೆ ಅಪಾರ ಬಂಧುಬಳಗ, ಅಭಿಮಾನಿಗಳನ್ನು ಬಿಟ್ಟು ಅಗಲಿದ್ದಾರೆ. ಅವರ ಆತ್ಮಕ್ಕೆ ಚಿರಶಾಂತಿ ದೊರಕಲಿ ಹಾಗೂ ಕುಟುಂಬದವರಿಗೆ ಅವರ ಸಾವಿನ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುವುದಾಗಿ ಹೇಳಿದರು.
ಮೂರು ದಿನಗಳ ಶೋಕಾಚರಣೆ
ಚಿತ್ರದುರ್ಗ ಜಿಲ್ಲೆಯಲ್ಲಿ ಮೂರು ದಿನಗಳ ಕಾಲ ಶೋಕಾಚರಣೆ ಮಾಡುತ್ತಿದ್ದು, ಚಿತ್ರದುರ್ಗದಲ್ಲಿ ಸೋಮವಾರ ರಜೆ ಘೋಷಣೆ ಮಾಡಲಾಗಿದೆ ಎಂದರು.
ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ
ನಾಳೆ ಚಳ್ಳಕೆರೆಯಲ್ಲಿ ಸಂಜೆ 4.00 ಗಂಟೆಗೆ ನಡೆಯಲಿರುವ ಅಂತಿಮ ಸಂಸ್ಕಾರದಲ್ಲಿ ಭಾಗಿಯಾಗುವುದಾಗಿ ತಿಳಿಸಿದ ಮುಖ್ಯಮಂತ್ರಿಗಳು ಅವರ ಮತಕ್ಷೇತ್ರ ಹಿರಿಯೂರಿಗೆ ಅವರ ಪಾರ್ಥಿವ ಶರೀರವನ್ನು ದರ್ಶನಕ್ಕಾಗಿ ಇರಿಸಿದ್ದು, ನಾಳೆ ಚಳ್ಳಕೆರೆಗೆ ಕರೆದೊಯ್ಯಲಾಗುವುದು ಎಂದು ವಿವರಿಸಿದರು. ಎಲ್ಲಾ ಸರ್ಕಾರಿ ಗೌರವದೊಂದಿಗೆ ಅವರ ಅಂತ್ಯಕ್ರಿಯೆ ನಡೆಯಲಿದೆ ಎಂದರು.
ಇದೇ ವೇಳೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಕೂಡ ಸಚಿವ ಸುಧಾಕರ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು.

ಡಿ ಸುಧಾಕರ್ ಅವರ ಸ್ಮರಣೆಗೆ ನೀರಾವರಿ ಯೋಜನೆಗೆ ಅವರ ಹೆಸರಿಡಲು ಆಲೋಚನೆ: ಡಿಸಿಎಂ ಡಿ.ಕೆ. ಶಿವಕುಮಾರ್
“ಸಚಿವರಾದ ಡಿ. ಸುಧಾಕರ್ ಅವರು ಭದ್ರ ಮೇಲ್ದಂಡೆ ಯೋಜನೆ ಜಾರಿಗೆ ಹೋರಾಟ ಮಾಡಿದ್ದರು. ಅವರ ಸ್ಮರಣಾರ್ಥ ನೀರಾವರಿ ಯೋಜನೆಗೆ ಸುಧಾಕರ್ ಅವರ ಹೆಸರಿಡಲು ಆಲೋಚನೆ ಮಾಡಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.
ಸಚಿವ ಡಿ ಸುಧಾಕರ್ ನಿಧನದ ಹಿನ್ನೆಲೆಯಲ್ಲಿ ಸದಾಶಿವನಗರ ನಿವಾಸದಲ್ಲಿ ಭಾನುವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.
“ಇಂದು ನಮ್ಮ ಪಾಲಿಗೆ ಬಹಳ ದುಃಖದ ದಿನ. ನನ್ನ ಆಪ್ತಮಿತ್ರ ಹಾಗೂ ನಮ್ಮ ಸರ್ಕಾರದ ಸಚಿವರಾದ ಡಿ. ಸುಧಾಕರ್ ಅವರು ನಮ್ಮನ್ನು ಅಗಲಿದ್ದಾರೆ. ಕಳೆದ ಒಂದು ತಿಂಗಳ ಹಿಂದೆ ಮಂಡಿ ನೋವಿನ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಸೇರಿದ್ದರು. ಶಸ್ತ್ರಚಿಕಿತ್ಸೆ ನಂತರ ಶ್ವಾಸಕೋಶ ಸೋಂಕಿಗೆ ಒಳಗಾಗಿದ್ದರು, ಪ್ರಜ್ಞೆ ಹೋಗಿತ್ತು. ಈ ಮಧ್ಯೆ ಕೆಲ ದಿನಗಳ ಕಾಲ ಅವರಿಗೆ ಪ್ರಜ್ಞೆ ಮರಳಿತ್ತು. ಹೀಗಾಗಿ ಅವರು ಗುಣಮುಖರಾಗಿ ಮರಳುತ್ತಾರೆ ಎಂಬ ವಿಶ್ವಾಸವಿತ್ತು. ವಿದೇಶದಿಂದಲೂ ವೈದ್ಯರನ್ನು ಕರೆಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಇಂದು ಬೆಳಗಿನ ಜಾವ 3.15ಕ್ಕೆ ಅವರು ಕೊನೆಯುಸಿರೆಳೆದಿದ್ದಾರೆ. ಪ್ರತಿ ನಿತ್ಯ ನಾನು ಅವರ ಕುಟುಂಬ ಸದಸ್ಯರ ಜತೆ ಸಂಪರ್ಕದಲ್ಲಿದ್ದು, ಅವರ ಆರೋಗ್ಯದ ಬಗ್ಗೆ ಮಾಹಿತಿ ಪಡೆಯುತ್ತಿದ್ದೆ” ಎಂದರು.
“ಇಂದು ಅವರ ಪಾರ್ಥಿವ ಶರೀರವನ್ನು ಹಿರಿಯೂರಿಗೆ ತೆಗೆದುಕೊಂಡು ಹೋಗಲಾಗುತ್ತಿದ್ದು, ಸಂಜೆ ನಂತರ ಚಳ್ಳಕೆರೆಗೆ ತೆಗೆದುಕೊಂಡು ಹೋಗಲಾಗುವುದು. ನಾನು ಜಿಲ್ಲಾಧಿಕಾರಿಗಳ ಜೊತೆ ಚರ್ಚೆ ಮಾಡಿದ್ದು ನಾಳೆ ಸಂಜೆ 3 ಗಂಟೆ ನಂತರ ಜೈನ ಧರ್ಮದ ವಿಧಿ ವಿಧಾನಗಳ ಪ್ರಕಾರ ಅಂತಿಮ ಕಾರ್ಯ ನಡೆಸಲಾಗುವುದು. ಸರ್ಕಾರದ ಗೌರವದೊಂದಿಗೆ ಅವರಿಗೆ ಅಂತಿಮ ನಮನ ಸಲ್ಲಿಸಲಾಗುವುದು” ಎಂದು ತಿಳಿದರು.
“ನಾನು ಇಂದು ಅವರ ಪಾರ್ಥಿವ ಶರೀರ ದರ್ಶನ ಮಾಡಲಿದ್ದೇನೆ. ನಾಳೆ ಅವರ ಅಂತಿಮ ಸಂಸ್ಕಾರ ಕಾರ್ಯದಲ್ಲಿ ಭಾಗವಹಿಸುತ್ತೇನೆ. ಅವರು ನನ್ನ ಜೊತೆ ಬಹಳ ಒಡನಾಟ ಇಟ್ಟುಕೊಂಡಿದ್ದರು. ಬಹಳ ಚಿಕ್ಕ ವಯಸ್ಸು, ಆರೋಗ್ಯವಾಗಿದ್ದರು. ಎಸ್ ಎಂ ಕೃಷ್ಣ ಅವರ ಕಾಲದಲ್ಲಿ ರಂಗನಾಥ್ ಅವರ ಕ್ಷೇತ್ರದಲ್ಲಿ ಟಿಕೆಟ್ ಕೊಡಿಸಿದ್ದೆ. ನನ್ನ ಜೊತೆ ಮಂತ್ರಿಯಾಗಿ ಕೆಲಸ ಮಾಡಿದ್ದಾರೆ. ಅವರಿಗೆ ಯೋಜನಾ ಮತ್ತು ಮುಜರಾಯಿ ಇಲಾಖೆ ನೀಡಲಾಗಿತ್ತು. ಅವರ ಜೊತೆ ಚರ್ಚೆ ಮಾಡಿ ಮುಜರಾಯಿ ಇಲಾಖೆಯನ್ನು ರಾಮಲಿಂಗಾರೆಡ್ಡಿ ಅವರಿಗೆ ನೀಡಲಾಯಿತು. ಸಿಎಂ ಇದಕ್ಕೆ ಅನುಮತಿ ನೀಡಿದ್ದರು” ಎಂದು ಹೇಳಿದರು.
“ಭಾರತ ಜೋಡೋ ಯಾತ್ರೆ ವೇಳೆ ಐದು ದಿನದ ಜವಾಬ್ದಾರಿಯನ್ನು ಅವರೇ ವಹಿಸಿದ್ದರು. ಅವರ ಅಗಲಿಕೆ ವಿಚಾರವನ್ನು ರಾಹುಲ್ ಗಾಂಧಿ ಅವರ ಗಮನಕ್ಕೆ ತರಲಾಗಿದೆ. ರಾಹುಲ್ ಗಾಂಧಿ ಅವರು ಸುಧಾಕರ್ ಅವರ ಕುಟುಂಬದ ಸದಸ್ಯರ ಜೊತೆಗೆ ಮಾತನಾಡಲಿದ್ದಾರೆ” ಎಂದರು.
“ಸುಧಾಕರ್ ಅವರ ಪಕ್ಷ ನಿಷ್ಠೆ, ತ್ಯಾಗ ಸ್ಮರಿಸುತ್ತೇವೆ. ಶಾಂತಿ ಕಾಪಾಡಬೇಕು ಎಂದು ನಮ್ಮ ಕಾರ್ಯಕರ್ತರು ಹಾಗೂ ಮುಖಂಡರಿಗೆ ಮನವಿ ಮಾಡುತ್ತೇವೆ. ಸಹಕಾರ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದರು. ಹಾಲಿ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿದ್ದರು. ಅವರ ಅಗಲಿಕೆ ನಮ್ಮ ಪಕ್ಷಕ್ಕೆ ದೊಡ್ಡ ನಷ್ಟವಾಗಿದೆ. ಈ ಅಗಲಿಕೆ ನೋವು ಭರಿಸುವ ಶಕ್ತಿಯನ್ನು ನೀಡಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುವೆ” ಎಂದರು.
“ಭದ್ರಾ ಯೋಜನೆ ಪೂರ್ಣಗೊಳಿಸಿ ಅದಕ್ಕೆ ಚಾಲನೆ ನೀಡಬೇಕು ಎಂದು ಬಹಳ ಆಸೆ ಇಟ್ಟುಕೊಂಡಿದ್ದರು. ಈ ಯೋಜನೆಗಾಗಿ ಸಾಕಷ್ಟು ಹೋರಾಟ ಮಾಡಿದ್ದರು. ಅವರ ಅಧ್ಯಕ್ಷತೆಯಲ್ಲಿ ಈ ಯೋಜನೆ ಉದ್ಘಾಟನೆ ಮಾಡಬೇಕು ಎಂದು ಚಿಂತಿಸಿದ್ದೆವು. ಕ್ಷೇತ್ರ ಹಾಗೂ ಜಿಲ್ಲೆಯ ಅಭಿವೃದ್ಧಿ ಬಗ್ಗೆ ಆಸಕ್ತಿ ಹೊಂದಿದ್ದರು. ಎಲ್ಲಾ ವರ್ಗದ ಜನರಿಗೆ ನ್ಯಾಯ ಒದಗಿಸಿಕೊಡುತ್ತಿದ್ದರು. ಪಕ್ಷದ ಸದಸ್ಯತ್ವ ಅಭಿಯಾನದಲ್ಲಿ ಅತಿ ಹೆಚ್ಚು ನೋಂದಣಿ ಮಾಡಿಸಿದ ಕೀರ್ತಿ ಸುಧಾಕರ್ ಅವರಿಗೆ ಸಲ್ಲುತ್ತದೆ. ರಾಹುಲ್ ಗಾಂಧಿ ಅವರ ಭಾರತ ಜೋಡೋ ಸಂದರ್ಭದಲ್ಲಿ ಮಳೆ ಬಂದು ಅವ್ಯವಸ್ಥೆಯಾದಾಗ ಕಾರ್ಯಕ್ರಮ ಯಶಸ್ಸಿಗೆ ಅವರು ಹಾಗೂ ಅವರ ಕಾರ್ಯಕರ್ತರು ಪಟ್ಟ ಕಷ್ಟ ನೆನೆಯುತ್ತೇವೆ” ಎಂದು ಹೇಳಿದರು.
ಸುಧಾಕರ ನಿಧನಕ್ಕೆ ಲಕ್ಷ್ಮೀ ಹೆಬ್ಬಾಳಕರ್ ಸಂತಾಪ
ಬೆಳಗಾವಿ : ಹಿರಿಯ ಸಚಿವ ಡಿ.ಸುಧಾಕರ ಅವರ ನಿಧನಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಅತ್ಯಂತ ಕಷ್ಟದಿಂದ ಮೇಲೆ ಬಂದಿದ್ದ ಸುಧಾಕರ ಅವರು ಅತ್ಯಂತ ಸರಳ, ಸಜ್ಜನರಾಗಿದ್ದರು. ಎಲ್ಲರೊಂದಿಗೆ ನಗು ನಗುತ್ತ ಮಾತನಾಡುತ್ತಿರುತ್ತಿದ್ದ ಸುಧಾಕರ ಅವರ ಅಕಾಲಿಕ ನಿಧನ ರಾಜ್ಯಕ್ಕೆ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ಕುಟುಂಬಕ್ಕೆ ಧುಃಖವನ್ನು ಸಹಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಲಕ್ಷ್ಮೀ ಹೆಬ್ಬಾಳಕರ್ ಪ್ರಾರ್ಥಿಸಿದ್ದಾರೆ.
ಸಚಿವ ಈಶ್ವರ ಖಂಡ್ರೆ ಸಂತಾಪ
ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್ ಅವರ ನಿಧನಕ್ಕೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಕಂಬನಿ ಮಿಡಿದಿದ್ದಾರೆ. ಸುಧಾಕರ್ ಅವರ ದಿವ್ಯಆತ್ಮಕ್ಕೆ ಭಗವಂತ ಚಿರಶಾಂತಿ ಕರುಣಿಸಲಿ, ಅವರ ಕುಟುಂಬದವರಿಗೆ ಮತ್ತು ಅಪಾರ ಅಭಿಮಾನಿ ಬಳಗಕ್ಕೆ ಅಕಾಲಿಕ ಅಗಲಿಕೆಯ ನೋವು ಸಹಿಸಿಕೊಳ್ಳುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಈಶ್ವರ ಖಂಡ್ರೆ ಪ್ರಾರ್ಥಿಸಿದ್ದಾರೆ.
ಸುಧಾಕರ್ ನಿಧನಕ್ಕೆ ಜಮೀರ್ ಅಹಮದ್ ಖಾನ್ ತೀವ್ರ ಸಂತಾಪ
ಬೆಂಗಳೂರು :ಯೋಜನೆ ಮತ್ತು ಸಾಂಖ್ಯಿಕ ಸಚಿವರಾದ ಡಿ.ಸುಧಾಕರ್ ಅವರ ಅಕಾಲಿಕ ನಿಧನಕ್ಕೆ ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಜನಪರ ಕಾಳಜಿ ಹಾಗೂ ಬದ್ಧತೆಯಿದ್ದ ನನ್ನ ಆತ್ಮೀಯ ಸ್ನೇಹಿತರಾಗಿದ್ದ ಸುಧಾಕರ್ ಅವರ ಅಗಲಿಕೆಯಿಂದ ನಾನು ದುಃಖಿತನಾಗಿದ್ದೇನೆ. ಅನಾರೋಗ್ಯ ಕಾರಣ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ನಾನು ಖುದ್ದು ಆಸ್ಪತ್ರೆಗೆ ಭೇಟಿ ನೀಡಿ ಅರೋಗ್ಯ ವಿಚಾರಿಸಿದ್ದೆ. ಅವರು ಗುಣಮುಖರಾಗುವ ಭರವಸೆ ಇತ್ತು. ಇದು ಅತ್ಯಂತ ನೋವಿನ ಸಂಗತಿ. ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬವರ್ಗಕ್ಕೆ ನೋವು ಭರಿಸುವ ಶಕ್ತಿ ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಸಚಿವ ಎಚ್.ಕೆ ಪಾಟೀಲ್ ಕಂಬನಿ
ಸಚಿವ ಸಂಪುಟದ ಸಹೋದ್ಯೋಗಿ “ಸಚಿವ ಡಿ. ಸುಧಾಕರ್ ಅವರ ನಿಧನ ಸುದ್ದಿ ಅತ್ಯಂತ ದುಃಖ ತಂದಿದೆ. ಸರಳ ವ್ಯಕ್ತಿತ್ವ, ಜನಪರ ಚಿಂತನೆ ಮತ್ತು ಅಭಿವೃದ್ಧಿ ಪರ ಕೆಲಸಗಳ ಮೂಲಕ ಅವರು ಜನಮನದಲ್ಲಿ ವಿಶೇಷ ಸ್ಥಾನ ಪಡೆದಿದ್ದರು. ಅವರ ಆತ್ಮಕ್ಕೆ ಶಾಂತಿ ಸಿಗಲಿ, ಕುಟುಂಬದವರಿಗೆ ಹಾಗೂ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿ ದೊರಕಲಿ” ಎಂದು ಸಚಿವ ಎಚ್.ಕೆ ಪಾಟೀಲ್ ಸಂತಾಪ ಸೂಚಿಸಿದ್ದಾರೆ.




